ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ–ತಾ.ಪಂ ಮೀಸಲು ನಿಗದಿ ತಿಂಗಳಲ್ಲಿ ಪೂರ್ಣ: ಅಡ್ವೊಕೇಟ್‌ ಜನರಲ್‌

ಹೈಕೋರ್ಟ್‌ಗೆ ಅಡ್ವೊಕೇಟ್‌ ಜನರಲ್‌ ಮಾಹಿತಿ
Published 19 ಡಿಸೆಂಬರ್ 2023, 16:02 IST
Last Updated 19 ಡಿಸೆಂಬರ್ 2023, 16:02 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್‌ ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು‘ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ಹಿಂಪಡೆದು ‘ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ‘ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಅವರು, ’ಜಿ.ಪಂ ಮತ್ತು ತಾ.ಪಂ ಕ್ಷೇತ್ರಗಳ ಗಡಿಗಳನ್ನು ನಿರ್ಧರಿಸುವ ಹಾಗೂ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಈಗಾಗಲೇ ಚುರುಕುಗೊಳಿಸಲಾಗಿದೆ. ಕೊಡಗು ಜಿಲ್ಲೆಯೊಂದನ್ನು ಬಿಟ್ಟು ಉಳಿದ 30 ಜಿಲ್ಲೆಗಳ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆಯನ್ನು ಇದೇ 19ರಂದು (ಮಂಗಳವಾರ) ಸಂಜೆ ಪ್ರಕಟಿಸಲಾಗುತ್ತಿದ್ದು, ಮುಂದಿನ ಏಳು ದಿನಗಳಲ್ಲಿ ಕೊಡಗು ಜಿಲ್ಲೆಯ ಕ್ಷೇತ್ರ ಪುನರ್‌ವಿಂಗಡಣೆ ಅಧಿಸೂಚನೆ ಪ್ರಕಟಿಸಲಾಗುವುದು‘ ಎಂದರು.

‘ಕ್ಷೇತ್ರ ಪುನರ್‌ ವಿಂಗಡಣೆ ಅಧಿಸೂಚನೆ ಪ್ರಕಟಿಸಿದ ನಂತರದ ಏಳು ದಿನಗಳಲ್ಲಿ ಮೀಸಲಾತಿ ಕರಡು ಅಧಿಸೂಚನೆ ಹೊರಡಿಸಲಾಗುವುದು. ಮೀಸಲಾತಿ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗುವುದು. ನಂತರದ ಎರಡು ವಾರಗಳಲ್ಲಿ ಸಂಬಂಧಿಸಿದ ಪ್ರಾಧಿಕಾರಗಳು ಮೀಸಲು ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿವೆ‘ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಚುನಾವಣಾ ಆಯೋಗ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ‘ಸರ್ಕಾರದ ಹೇಳಿಕೆಯ ಬಗ್ಗೆ ಸಂಶಯವಿದೆ‘ ಎಂದು ಆಕ್ಷೇಪಿಸಿದರು.

ಈ ಮಾತಿಗೆ ಮಧ್ಯ ಪ್ರವೇಶಿಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು, ’ಅಡ್ವೊಕೇಟ್‌ ಜನರಲ್‌ ಒಬ್ಬ ಸಾಂವಿಧಾನಿಕ ಹುದ್ದೆಯ ಜವಾಬ್ದಾರಿ ಪ್ರತಿನಿಧಿ. ಅವರನ್ನು ನಂಬಬಾರದೇ? ಅವರ ಮೇಲೆ ಭರವಸೆ ಇಡಬೇಕಾಗುತ್ತದೆ. ಕ್ಷೇತ್ರ ಪುನರ್ ವಿಂಗಡಣೆ ಪೂರ್ಣಗೊಳಿಸುವ ಬಗೆಗಿನ ಹೇಳಿಕೆಯನ್ನು ಲಿಖಿತವಾಗಿ ಸಲ್ಲಿಸಬೇಕು. ಅಡ್ವೊಕೇಟ್‌ ಅವರ ಈ ಹೇಳಿಕೆಯನ್ನೇ ನ್ಯಾಯಪೀಠ ಮುಚ್ಚಳಿಕೆ ಎಂದು ಪರಿಗಣಿಸಲಿದೆ‘ ಎಂದು ತಿಳಿಸಿದರು. ಇದಕ್ಕೆ ಶಶಿಕಿರಣ ಶೆಟ್ಟಿ ಒಪ್ಪಿಗೆ ನೀಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ’ಈ ಸಂಬಂಧ ಎಜಿ ಲಿಖಿತ ಪ್ರಮಾಣಪತ್ರ ಸಲ್ಲಿಸಬೇಕು. ಅವರು ನೀಡಿರುವ ಭರವಸೆ ಕಾರ್ಯಗತಗೊಳ್ಳದೇ ಹೋದರೆ ರಾಜ್ಯ ಚುನಾವಣಾ ಆಯೋಗವು ಅಗತ್ಯ ಕ್ರಮಕ್ಕಾಗಿ ಪುನಃ ನ್ಯಾಯಾಲಯದ ಮೆಟ್ಟಿಲೇರಬಹುದು‘ ಎಂದು ತಿಳಿಸಿ ಅರ್ಜಿ ವಿಲೇವಾರಿ ಮಾಡಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT