ಪೇಶಾವರ: ಭಾರಿ ಮಳೆಯಿಂದಾಗಿ ವಾಯವ್ಯ ಪಾಕಿಸ್ತಾನದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 9 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಅಪ್ಪರ್ ದಿರ್ ಜಿಲ್ಲೆಯ ಮೈದಾನ್ ಪ್ರದೇಶದಲ್ಲಿ ಶುಕ್ರವಾರ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವಶೇಷಗಳ ಅಡಿಯಿಂದ ಎಲ್ಲಾ 12 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 9 ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಡಾನ್ ಪತ್ರಿಕೆ ವರದಿ ಮಾಡಿದೆ.
ಮುಂದಿನ 24 ಗಂಟೆಗಳಲ್ಲಿ ದೇಶದಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.