ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಂಗ್ಲಾದೇಶ: ಬೆನಾಪೋಲ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ, ನಾಲ್ವರು ಸಾವು

Published 6 ಜನವರಿ 2024, 2:49 IST
Last Updated 6 ಜನವರಿ 2024, 2:49 IST
ಅಕ್ಷರ ಗಾತ್ರ

ಢಾಕಾ: ಬಾಂಗ್ಲಾದೇಶದ ಬೆನಾಪೋಲ್​​ ಎಕ್ಸ್‌ಪ್ರೆಸ್‌ ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರೈಲು ಜೆಸ್ಸೋರ್‌ನಿಂದ ಢಾಕಾಕ್ಕೆ ತೆರಳುತ್ತಿತ್ತು. ಸಯಿದಾಬಾದ್‌ನ ಗೋಲಬಾಗ್ ಪ್ರದೇಶಕ್ಕೆ ತಲುಪಿದಾಗ ಬೆಂಕಿ ಹೊತ್ತಿಕೊಂಡಿದೆ.

ಬೆನಾಪೋಲ್ ಎಕ್ಸ್‌ಪ್ರೆಸ್‌ ರೈಲಿನ ಕನಿಷ್ಠ ನಾಲ್ಕು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದುವರೆಗೆ ನಾಲ್ವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಗ್ನಿಶಾಮಕ ಸೇವೆ ಮತ್ತು ನಾಗರಿಕ ರಕ್ಷಣಾ ವಕ್ತಾರ ಶಹಜಹಾನ್ ಶಿಕ್ದರ್ ತಿಳಿಸಿದ್ದಾರೆ.

ರೈಲಿನಲ್ಲಿ 292 ಮಂದಿ ಪ್ರಯಾಣಿಕರಿದ್ದು, ಹೆಚ್ಚಿನವರು ಭಾರತದಿಂದ ಬಾಂಗ್ಲಾದೇಶಕ್ಕೆ ಹಿಂತಿರುಗುತ್ತಿದ್ದರು. ರೈಲು ಕಮಲಾಪುರ ನಿಲ್ದಾಣಕ್ಕೆ ತಲುಪುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ನಾಳೆ (ಭಾನುವಾರ) ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಚುನಾವಣೆಯನ್ನು ಅಲ್ಲಿನ ವಿರೋಧ ಪಕ್ಷ ಬಾಂಗ್ಲಾದೇಶ ರಾಷ್ಟ್ರೀಯ ಪಕ್ಷ (ಬಿಎನ್​ಪಿ) ವಿರೋಧಿಸಿದೆ. ರೈಲು ದುರಂತದ ಹಿಂದೆ ವಿರೋಧ ಪಕ್ಷಗಳ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT