ಬುಧವಾರ, ನವೆಂಬರ್ 20, 2019
21 °C
ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎಚ್.ಕೋರಡ್ಡಿ ಅಭಿಮತ

ಆರೋಗ್ಯಕ್ಕೆ ಪೌಷ್ಟಿಕ ಆಹಾರ ಮುಖ್ಯ

Published:
Updated:
Prajavani

ಚಿಕ್ಕಬಳ್ಳಾಪುರ: ‘ಮಕ್ಕಳು ಮತ್ತು ಗರ್ಭಿಣಿಯರು ದ್ವಿದಳ ಧಾನ್ಯಗಳು, ಸೊಪ್ಪು, ತರಕಾರಿ, ಹಣ್ಣುಗಳಂತಹ ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ಆರೋಗ್ಯವಂತ ಜೀವನ ನಡೆಸಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎಚ್.ಕೋರಡ್ಡಿ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ನಗರದ ಕಂದವಾರ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಮಾಸಾಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ನಾವು ಚಿಕ್ಕವರಾಗಿದ್ದಾಗ ನಮಗೆ ಮನೆಯಲ್ಲಿ ದ್ವಿದಳ ಧಾನ್ಯಗಳನ್ನು ನೀರಿನಲ್ಲಿ ನೆನೆಸಿಟ್ಟು ತಿನ್ನಲು ಕೊಡುತ್ತಿದ್ದರು. ಆದರೆ ಈಗ ಪೋಷಕರು ಮಕ್ಕಳಿಗೆ ಮೊಳಕೆ ಕಾಳುಗಳ ಬದಲು ಕುರುಕಲು ತಿಂಡಿ ಮತ್ತು ಬೇಕರಿಯಲ್ಲಿ ಸಿಗುವ ಪದಾರ್ಥಗಳನ್ನು ಕೊಡಿಸುತ್ತಾರೆ. ಆರೋಗ್ಯದ ದೃಷ್ಟಿಯಿಂದ ಇದು ತುಂಬಾ ಅಪಾಯಕಾರಿ ಸಂಗತಿ’ ಎಂದು ತಿಳಿಸಿದರು.

‘ಸರ್ಕಾರಗಳು ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದು ಅದಕ್ಕಾಗಿ ನೂರಾರು ಕೋಟಿ ರೂಪಾಯಿ ವ್ಯಯಿಸುತ್ತವೆ. ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮಾತೃಪೂರ್ಣ ಯೋಜನೆ ಅಡಿಯಲ್ಲಿ ಧಾನ್ಯಗಳು, ಮೊಳಕೆ ಕಾಳುಗಳು, ಪೌಷ್ಟಿಕಾಂಶ ಭರಿತ ಊಟ, ಹಾಲು ನೀಡಲಾಗುತ್ತದೆ. ಈ ಬಗ್ಗೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಳ್ಳಿಯ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

‘ಬಾಲ್ಯ ವಿವಾಹ ಸಮಾಜದ ಮೇಲೆ ಅನೇಕ ಬಗೆಯಲ್ಲಿ ದುಷ್ಪರಿಣಾಮ ಬೀರುತ್ತದೆ. ವಿಶೇಷವಾಗಿ ನವಜಾತ ಶಿಶುಗಳಲ್ಲಿ ಅಪೌಷ್ಟಿಕತೆ ಪ್ರಮಾಣ ಹೆಚ್ಚಿಸುತ್ತದೆ. ಹೆಣ್ಣು ಮಕ್ಕಳನ್ನು ದೈಹಿಕವಾಗಿ ದುರ್ಬಲಗೊಳಿಸುತ್ತದೆ. ಆದ್ದರಿಂದ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ ಬಿ.ಎಂ.ಯೋಗೇಶ್‌ಗೌಡ ಮಾತನಾಡಿ, ‘ಅಪೌಷ್ಠಿಕತೆ ಪ್ರಮಾಣ ಶೂನ್ಯಕ್ಕೆ ಇಳಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಅಪೌಷ್ಟಿಕತೆ ಹೊಂದಿರುವ ಮಕ್ಕಳು ಮಾನಸಿಕ ಮತ್ತು ದೈಹಿಕವಾಗಿ ಸೊರಗಿರುತ್ತಾರೆ. ಅಂತಹ ಮಕ್ಕಳನ್ನು ಸದೃಢಗೊಳಿಸಲು ಅಪೌಷ್ಟಿಕಾಂಶಯುಕ್ತ ಆಹಾರಗಳನ್ನು ನೀಡುವ ಅಗತ್ಯವಿದೆ’ ಎಂದು ತಿಳಿಸಿದರು.

ಪೌಷ್ಟಿಕಾಂಶ ಆಹಾರ ಪದಾರ್ಥಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ, ಹಿರಿಯ ಸಿವಿಲ್ ನ್ಯಾಯಾಧೀಶ ಎಚ್.ದೇವರಾಜು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅನಿಲ್‌ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಸುರೇಶ್ ಬಾಬು, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಜಿ.ಹರೀಶ್, ಜಿಲ್ಲಾ ಆರ ಸಿಎಚ್ ಅಧಿಕಾರಿ ಚನ್ನಕೇಶವ ರೆಡ್ಡಿ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)