ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಲೈ 15ರ ಒಳಗೆ ಹಕ್ಕುಪತ್ರ ವಿತರಣೆ

ಚಿಕ್ಕಬಳ್ಳಾಪುರ ತಾಲ್ಲೂಕು ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಡಾ.ಕೆ.ಸುಧಾಕರ್ ಭರವಸೆ
Last Updated 15 ಜೂನ್ 2018, 11:03 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ನಿವೇಶನ ರಹಿತರಿಗೆ ಮೊದಲ ಆದ್ಯತೆಯಲ್ಲಿ ನಿವೇಶನ ಒದಗಿಸಲು ಉದ್ದೇಶಿಸಿದ್ದು, ಆಯ್ಕೆಯಾ ಗಿರುವ ಫಲಾನುಭವಿಗಳಿಗೆ ಜುಲೈ 15ರ ಒಳಗೆ ಹಕ್ಕುಪತ್ರಗಳನ್ನು ವಿತರಿಸಲು ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಕ್ರಮಕೈಗೊಳ್ಳಬೇಕು’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ತಾಲ್ಲೂಕಿನಲ್ಲಿ 2,500 ನಿವೇಶನ ರಹಿತ ಫಲಾನುಭವಿಗಳನ್ನು ಮತ್ತು ಅವರಿಗೆ ನಿವೇಶನ ಒದಗಿಸಲು 56 ಎಕರೆ ಜಮೀನು ಗುರುತಿಸಲಾಗಿದೆ. ಒಂದು ತಿಂಗಳಲ್ಲಿ ಒಂದು ಸಾವಿರ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

‘ಅನೇಕ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ಸ್ಮಶಾನ ಭೂಮಿ ಇಲ್ಲದೆ ಅಂತ್ಯಕ್ರಿಯೆ ನಡೆಸಲು ತೊಂದರೆ ಉಂಟಾಗಿದೆ. ಸ್ಮಶಾನ ಭೂಮಿಗಳ ಹೊಂದಿರದ ಗ್ರಾಮಗಳನ್ನು ಗುರುತಿಸಿ, ಶೀಘ್ರವೇ ಪಟ್ಟಿ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕಡ್ಡಾಯವಾಗಿ ಗ್ರಾಮ ಸಭೆ ಹಮ್ಮಿಕೊಳ್ಳಬೇಕು. ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೇ ಸರ್ಕಾರಿ ಯೋಜನೆಗಳನ್ನು ಅರ್ಹ -ಫಲಾನುಭವಿಗಳಿಗೆ ತಲುಪಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಮೊದಲ ಆದ್ಯತೆ ನೀಡಬೇಕು. ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಬೇಕು’ ಎಂದು ತಿಳಿಸಿದರು.

‘ಮುಂದಿನ ಐದು ವರ್ಷಗಳಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಗ್ರಾಮಗಳ ಮೂಲ ಸೌಕರ್ಯಗಳ ಅಭಿವೃದ್ಧಿ ಯೊಂದಿಗೆ, ಕೆರೆಗಳ ಪುನಶ್ಚೇತನ, ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡ ಲಾಗುವುದು. ಕ್ಷೇತ್ರದ ಜನತೆಗೆ ನೆಮ್ಮದಿ ಜೀವನ ಕಟ್ಟಿಕೊಡುವ ಜತೆಗೆ ಮಾದರಿ ಕ್ಷೇತ್ರವನ್ನಾಗಿಸುವ ರೂಪಿಸಲಾಗುವುದು. ಇದಕ್ಕೆ ಎಲ್ಲ ಅಧಿಕಾರಿಗಳು ಬದ್ಧತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಇಒ ಕೆ.ಪಿ.ಸಂಜೀವಪ್ಪ ಮಾತನಾಡಿ, ‘ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಸಲುವಾಗಿ ಸರ್ಕಾರಿ ಜಮೀನು ಗುರುತಿಸಲಾಗಿದೆ. ಈ ಪೈಕಿ 9 ಎಕರೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ಆದ್ದರಿಂದ ಬಾಕಿ ಇರುವ ಜಮೀನು ಅಭಿವೃದ್ಧಿಪಡಿಸಿ, ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಉಪಾಧ್ಯಕ್ಷೆ ಇಂದ್ರಮ್ಮ ಅಣ್ಣಯ್ಯಪ್ಪ, ಸದಸ್ಯ ತಿರುಮಳಪ್ಪ ಉಪಸ್ಥಿತರಿದ್ದರು.

ಲಂಚ ಕೇಳಿದರೆ ದೂರು ನೀಡಿ

‘ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಪಾರದರ್ಶಕ, ಭ್ರಷ್ಟಾಚಾರ ರಹಿತವಾಗಿ ಸಾರ್ವಜನಿಕರಿಗೆ ಸೇವೆಯನ್ನು ಒದಗಿಸಲು ಬದ್ಧತೆ ಪ್ರದರ್ಶಿಸಬೇಕು. ಕ್ಷೇತ್ರದಲ್ಲಿ ಶೇ 100ರಷ್ಟು ಭ್ರಷ್ಟಾಚಾರ ರಹಿತ ಆಡಳಿತ ನಡೆಸಲು ತೀರ್ಮಾನಿಸಿರುವೆ. ಆದ್ದರಿಂದ ಪ್ರತಿ ಕಚೇರಿಯಲ್ಲಿ ಲಂಚ ಪಡೆಯುವುದು, ನೀಡುವುದು ಅಪರಾಧ ಎಂಬ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಒಂದು ವೇಳೆ ಯಾವುದೇ ಕೆಲಸಕ್ಕೆ ಅಧಿಕಾರಿ, ಸಿಬ್ಬಂದಿ ಲಂಚಕ್ಕೆ ಒತ್ತಾಯಿಸಿದರೆ ಸಾರ್ವಜನಿಕರು ಅವರ ವಿರುದ್ಧ ದೂರು ನೀಡಿದರೆ ಕ್ರಮ ಕೈಗೊಳ್ಳುವೆ’ ಎಂದು ಸುಧಾಕರ್‌ ತಿಳಿಸಿದರು.

ಬಿಇಒಗೆ ತರಾಟೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ಬೇಸರ ವ್ಯಕ್ತಪಡಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಅವರನ್ನು ತರಾಟೆಗೆ ತೆಗೆದುಕೊಂಡ ಸುಧಾಕರ್, ‘ಶಿಕ್ಷಕರು ತಮ್ಮ ಹೊಣೆಗಾರಿಕೆ ಅರಿತು, ಬೋಧನಾ ಕೌಶಲ ವೃದ್ಧಿಸಿಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಖಾಸಗಿ ಶಾಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗಿಂತ ಉತ್ತಮ ಅಂಕ ಗಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.

ವೈದ್ಯರ ವಿರುದ್ಧ ಶಿಸ್ತುಕ್ರಮ

‘ಸರಕಾರದಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಔಷಧಗಳನ್ನು ಪೂರೈಸಲಾಗುತ್ತಿದೆ. ಜತೆಗೆ ಜನೌಷಧ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ಔಷಧಗಳನ್ನು ಮಾರಾಟ ಮಾಡಲು ಸೌಲಭ್ಯ ಕಲ್ಪಿಸಲಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ಚೀಟಿ ಕೊಟ್ಟು ಖಾಸಗಿ ಔಷಧಿ ಮಳಿಗೆಗಳಿಗೆ ಕಳುಹಿಸಬಾರದು. ಹಾಗೊಮ್ಮೆ ಕಳುಹಿಸಿದ್ದು ನನ್ನ ಗಮನಕ್ಕೆ ಬಂದರೆ ಅಂತಹ ವೈದ್ಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುತ್ತೇನೆ’ ಎಂದು ಸುಧಾಕರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT