ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಣದಲ್ಲಿ ಘಟಾನುಘಟಿಗಳ ಭವಿಷ್ಯ ಮತಯಂತ್ರಕ್ಕೆ ಇಂದು

Last Updated 12 ಮೇ 2018, 5:50 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಒಟ್ಟು 147 ಅಭ್ಯರ್ಥಿಗಳು ಕಣದಲ್ಲಿದ್ದು, ಭವಿಷ್ಯ ಬರೆಯಲು ಮತದಾರರು ಸಿದ್ಧರಾಗಿದ್ದಾರೆ.‌ ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆದಿರುವ ಕ್ಷೇತ್ರ ಚಾಮುಂಡೇಶ್ವರಿ. ಈ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಅಭ್ಯರ್ಥಿ ಜಿ.ಟಿ.ದೇವೇಗೌಡರ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಅಭ್ಯರ್ಥಿಯಾಗಿ ಗೋಪಾಲ್‌ ರಾವ್‌ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ಒಟ್ಟು 15 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.

ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶನಿವಾರ ಸಿದ್ದರಾಮಯ್ಯ ಶನಿವಾರ ಮತ ಚಲಾಯಿಸಲಿದ್ದಾರೆ. ಪುತ್ರ ಹಾಗೂ ವರುಣಾ ಕ್ಷೇತ್ರದ ಅಭ್ಯರ್ಥಿ ಡಾ.ಯತೀಂದ್ರ ಕೂಡ ಇಲ್ಲಿಯೇ ಮತದಾನ ಮಾಡಲಿದ್ದಾರೆ. ಜಿ.ಟಿ.ದೇವೇಗೌಡರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ ಚಲಾಯಿಸಲಿದ್ದಾರೆ.

ವರುಣಾದಲ್ಲಿ ಅತಿ ಹೆಚ್ಚು ಅಂದರೆ 23 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಚ್‌.ಡಿ.ಕೋಟೆಯಲ್ಲಿ ಕೇವಲ ಏಳು ಅಭ್ಯರ್ಥಿ ಸ್ಪರ್ಧಿಸಿದ್ದಾರೆ.

ಕೆಲವರು ಹ್ಯಾಟ್ರಿಕ್‌ ಮೇಲೆ ಕಣ್ಣಿಟ್ಟರೆ, ಕೆಲವರು ಸತತ ನಾಲ್ಕನೇ ಗೆಲುವು ಎದುರು ನೋಡುತ್ತಿದ್ದಾರೆ. ಇನ್ನು ಕೆಲವರು ಮೊದಲ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸತತ ಸೋಲಿನಿಂದ ಪಾರಾಗಿ ಮೊದಲ ಗೆಲುವು ಒಲಿಸಿಕೊಳ್ಳಲು ಪಣತೊಟ್ಟವರೂ ಇದ್ದಾರೆ. ಹೆಚ್ಚಿನ ಕ್ಷೇತ್ರಗಳಲ್ಲಿ ನೇರ ಹಣಾಹಣಿ, ಕೆಲವೆಡೆ ತ್ರಿಕೋನ ಸ್ಪರ್ಧೆ, ಒಂದೆರಡು ಕ್ಷೇತ್ರಗಳಲ್ಲಿ ಚತುಷ್ಕೋನ ಸ್ಪರ್ಧೆ ಏರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ, ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಬಿಎಸ್ಪಿ ನಾಯಕಿ ಮಾಯಾವತಿ ಮೈಸೂರು ಭಾಗದಲ್ಲಿ ಪ್ರಚಾರ ಕೈಗೊಂಡ ಪ್ರಮುಖರು. ಜೊತೆಗೆ ಚಲನಚಿತ್ರ ನಟರಾದ ದರ್ಶನ್‌, ಯಶ್‌, ಜಯಮಾಲಾ, ರಾಜ್‌ ಬಬ್ಬರ್‌ ಪ‍್ರಚಾರ ನಡೆಸಿದರು.

ಮತ ಎಣಿಕೆ ಸ್ಥಳದಲ್ಲಿ ನಿಷೇಧಾಜ್ಞೆ

ಮೈಸೂರು: ಮೇ 15ರಂದು ಮತ ಎಣಿಕೆ ನಡೆಯಲಿದ್ದು, ಅಂದು ಬೆಳಿಗ್ಗೆ 6 ಗಂಟೆಯಿಂದ ಮೇ 16ರ ಬೆಳಿಗ್ಗೆ 6ರ ವರೆಗೆ ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮತ ಎಣಿಕೆ ಕಾರ್ಯವು ಕೂರ್ಗಳ್ಳಿ ಎನ್‌ಐಇ ಕಾಲೇಜು ಹಾಗೂ ಮಹಾರಾಣಿ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳಲು 144 ಸೆಕ್ಷನ್‌ ಜಾರಿ ಮಾಡಲಾಗುವುದು ಎಂದು ನಗರ ಪೊಲೀಸ್‌ ಕಮಿಷನರ್‌ ಡಾ.ಸುಬ್ರಮಣ್ಯೇಶ್ವರರಾವ್‌ ತಿಳಿಸಿದ್ದಾರೆ.

ಮತ ಎಣಿಕೆ ಕೇಂದ್ರದ 200 ಮೀಟರ್‌ ವ್ಯಾಪ್ತಿಯಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸಲಾಗಿದೆ. 5 ಮಂದಿಗಿಂತ ಹೆಚ್ಚು ಗುಂಪುಗೂಡುವಂತಿಲ್ಲ. ಗೆದ್ದ ಅಭ್ಯರ್ಥಿ ಈ ಪ್ರದೇಶದಲ್ಲಿ ವಿಜಯೋತ್ಸವ ನಡೆಸುವಂತಿಲ್ಲ. ಪಟಾಕಿ ಸಿಡಿಸುವಂತಿಲ್ಲ. ಧ್ವನಿವರ್ಧಕ ಬಳಸುವಂತಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT