ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆರಿಗೆ ರಜೆ ನಿರಾಕರಣೆ: ಕೇಂದ್ರಕ್ಕೆ ಹೈಕೋರ್ಟ್‌ ನೋಟಿಸ್‌

Last Updated 18 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹೆರಿಗೆ ರಜೆ ನೀಡಲು ನಿರಾಕರಿಸಿದ ನಗರದ ಖಾಸಗಿ ಕಂಪನಿಯೊಂದರ ವಿರುದ್ಧ ಮಹಿಳೆಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ‌ ನಡೆಸಿತು.

ಪ್ರತಿವಾದಿಗಳಾದ ಕೇಂದ್ರ ಕಾರ್ಮಿಕ ಸಚಿವಾಲಯದ ಕಾರ್ಯದರ್ಶಿ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ಅರ್ಜಿದಾರ ಮಹಿಳೆಯು ನಗರದ 'ಫ್ಲೋಸರ್ಟ್' ಹೆಸರಿನ ‘ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಭಾರತ ಲಿಮಿಟೆಡ್’ ಕಂಪನಿಯಲ್ಲಿ  8 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಇವರು 2014ರಲ್ಲಿ ಮದುವೆಯಾಗಿದ್ದು, 2017ರಲ್ಲಿ ಜಯನಗರದ ಕ್ಲೌಡ್ ನೈನ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು.

ಈ ಸಂದರ್ಭದಲ್ಲಿ ಹೆರಿಗೆ ರಜೆ ಕೋರಿ ಕಂಪನಿಯ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕಂಪನಿ, ‘10ಕ್ಕಿಂತ ಹೆಚ್ಚು ನೌಕರರಿದ್ದರೆ ಮಾತ್ರ ಹೆರಿಗೆ ರಜೆ ನೀಡಲು ಕಾನೂನಿನಲ್ಲಿ ಅವಕಾಶವಿದೆ’ ಎಂದು ತಿಳಿಸಿತ್ತು.

ಇದನ್ನು ಆಕ್ಷೇಪಿಸಿ ಮಹಿಳೆಯು ಕೇಂದ್ರ ಕಾರ್ಮಿಕ ಸಚಿವಾಲಯದ ಕಾರ್ಯದರ್ಶಿಗೆ ಪತ್ರ ಬರೆದು ಹೆರಿಗೆ ರಜೆಯ ಭತ್ಯೆ ಹಾಗೂ ಸೌಲಭ್ಯಗಳನ್ನು ನೀಡುವಂತೆ ಕೋರಿದ್ದರು.

ಇದಕ್ಕೆ ಉತ್ತರಿಸಿದ್ದ ಸಚಿವಾಲಯ, ‘ಹೆರಿಗೆ ಸೌಲಭ್ಯ ಕಾಯ್ದೆ - 1961, ಕಲಂ 2 ರ ಪ್ರಕಾರ, ನಿಮ್ಮ ಕಂಪನಿಯಲ್ಲಿ 8 ಜನ ನೌಕರರಿದ್ದಾರೆ. ಆದ ಕಾರಣ ನಿಮಗೆ ಹೆರಿಗೆ ಭತ್ಯೆ ಅನ್ವಯವಾಗುವುದಿಲ್ಲ’ ಎಂದು ತಿಳಿಸಿತ್ತು.

ಇದನ್ನು ಪ್ರಶ್ನಿಸಿರುವ ಮಹಿಳೆ, ‘ಇದು ಸಂವಿಧಾನದ 42ನೇ ವಿಧಿಗೆ ವಿರುದ್ಧವಾಗಿದೆ’ ಎಂದು ಆಕ್ಷೇಪಿಸಿದ್ದಾರೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ವಕೀಲ ಎಸ್.ವಿ. ಗಿರಿ ಕುಮಾರ್, ’ಕೇಂದ್ರ ಸರ್ಕಾರ ಈ ದಿಸೆಯಲ್ಲಿ ಕಾನೂನಿಗೆ ತಿದ್ದುಪಡಿ ತಂದರೆ ರಾಜ್ಯ ಸರ್ಕಾರ ಅದನ್ನು ಅನುಷ್ಠಾನಗೊಳಿಸಲು ಸಿದ್ಧವಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿ ಎಂದು ಕೇಂದ್ರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು 4 ವಾರ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT