ಅಖಂಡ ಕರ್ನಾಟಕ ಉಳಿವಿಗೆ ಆಗ್ರಹಿಸಿ ಪ್ರತಿಭಟನೆ

7

ಅಖಂಡ ಕರ್ನಾಟಕ ಉಳಿವಿಗೆ ಆಗ್ರಹಿಸಿ ಪ್ರತಿಭಟನೆ

Published:
Updated:
Deccan Herald

ಚಾಮರಾಜನಗರ: ಅಖಂಡ ಕರ್ನಾಟಕವನ್ನು ಉಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ಕನ್ನಡಪರ ಸಂಘಟನೆಗಳ ಒಕ್ಕೂಟ) ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಮನವಿ ಸಲ್ಲಿಸಿದರು.

‘ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು ಜಾರಿಗೊಳಿಸಬೇಕು ಮತ್ತು ಅಖಂಡ ಕರ್ನಾಟಕವನ್ನು ಇಬ್ಭಾಗ ಮಾಡಬಾರದು. ಕರ್ನಾಟಕವನ್ನು ಉಳಿಸಬೇಕು’ ಎಂದು ಆಗ್ರಹಿಸಿದರು.

‘ಅಖಂಡ ಕರ್ನಾಟಕದಲ್ಲಿರುವ ಪ್ರಾದೇಶಿಕ ಅಸಮತೋಲನೆಯನ್ನು ನಿವಾರಣೆ ಮಾಡಲು ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸರ್ಕಾರದ ಅವಧಿಯಲ್ಲಿ ನೀಡಲಾದ ನಂಜುಂಡಪ್ಪ ವರದಿಯನ್ನು ಎರಡೂ ಸರ್ಕಾರಗಳು ಜಂಟಿಯಾಗಿ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಕೆಲವು ರಾಜಕೀಯ ಮುಖಂಡರು ತಮ್ಮ ಸ್ವಾರ್ಥಕ್ಕಾಗಿ ಅಖಂಡ ಕರ್ನಾಟಕವನ್ನು ವಿಭಜನೆಗೊಳಿಸುವ ಹೇಳಿಕೆ ನೀಡುತ್ತಿದ್ದಾರೆ. ಲಕ್ಷಾಂತರ ಜನರ ಪರಿಶ್ರಮದ ಫಲವಾಗಿ ಕರ್ನಾಟಕ ಏಕೀಕರಣಗೊಂಡಿದೆ. ಯಾವುದೇ ಕಾರಣಕ್ಕೂ ರಾಜ್ಯ ವಿಭಜನೆಯಾಗಬಾರದು. ಇದಕ್ಕೆ ಸರ್ಕಾರ ಅವಕಾಶ ನೀಡಬಾರದು. ಸಮಸ್ಯೆಯನ್ನು ತಕ್ಷಣವೇ ಸರಿಪಡಿಸಬೇಕು. ಇಲ್ಲವಾದರೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ವೇದಿಕೆಯ ಜಿಲ್ಲಾಧ್ಯಕ್ಷ ಆರ್.ಕೆ. ನವೀನ್‌ ಕುಮಾರ್, ಉಪಾಧ್ಯಕ್ಷ ರಾಜೇಂದ್ರ, ನಗರ ಘಟಕ ಅಧ್ಯಕ್ಷ ಕುಮಾರ್, ಗುಂಡ್ಲುಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್‌ ನಾಯಕ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !