ಮಂಗಳವಾರ, ಮಾರ್ಚ್ 31, 2020
19 °C

ಬಡ್ತಿ: ರೇವಣ್ಣ ಗೊಂದಲ ಸೃಷ್ಟಿ: ದಲಿತ ಸಂಘರ್ಷ ಸಮಿತಿ ಒಕ್ಕೂಟ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಡ್ತಿ ಮೀಸಲಾತಿ ಕಾಯ್ದೆ ಅನುಷ್ಠಾನದಲ್ಲಿ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಹಸ್ತಕ್ಷೇಪ ನಡೆಸಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ದಲಿತ ಸಂಘರ್ಷ ಸಮಿತಿ ಒಕ್ಕೂಟ ಆರೋಪಿಸಿದೆ.

ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ  ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್‌, ‘ಬಡ್ತಿ ಮೀಸಲಾತಿ ಕಾಯ್ದೆಯನ್ನು ಸುಪ್ರೀಂ ಕೋರ್ಟ್‌ ಈ ವರ್ಷದ ಮೇ 10ರಂದು ಎತ್ತಿ ಹಿಡಿದಿದೆ. ಆದರೆ, ಸಚಿವರು ಹಾಗೂ ಅಧಿಕಾರಿಗಳು ಜವಾಬ್ದಾರಿಯುತವಾಗಿ ವರ್ತಿಸದೆ ಹಳೆ ಚಾಳಿಯನ್ನೇ ಮುಂದುವರಿಸಿದ್ದಾರೆ. ಇಡೀ ಲೋಕೋಪಯೋಗಿ ಇಲಾಖೆಯನ್ನೇ ತನ್ನ ಪಿತ್ರಾರ್ಜಿತ ಆಸ್ತಿ ಎಂದು ರೇವಣ್ಣ ಭಾವಿಸಿದಂತಿದೆ’ ಎಂದು ಕಿಡಿಕಾರಿದರು.

‘ರೇವಣ್ಣ ಒಕ್ಕಲಿಗರು, ಲಿಂಗಾಯತರು, ಬ್ರಾಹ್ಮಣ (ಸಾಮಾನ್ಯ ಜಾತಿ) ನೌಕರರ ಹಿತಾಸಕ್ತಿಯನ್ನು ಮಾತ್ರ ರಕ್ಷಿಸುತ್ತಿದ್ದು, ದಲಿತ ನೌಕರರ ಅವಕಾಶಗಳನ್ನು ಶಾಶ್ವತವಾಗಿ ಮುಚ್ಚುತ್ತಿದ್ದಾರೆ. ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.

‘ಲೋಕೋಪಯೋಗಿ ಇಲಾಖೆಯಲ್ಲಿ ಇಬ್ಬರು ಕಾರ್ಯಪಾಲಕ ಎಂಜಿನಿಯರ್‌ಗಳಿಗೆ ಮಾತ್ರ ಬಡ್ತಿ ನೀಡಲಾಗಿದೆ. ಉಳಿದ 215 ಕಾರ್ಯಪಾಲಕ ಎಂಜಿನಿಯರ್‌ಗಳನ್ನು ಬೇರೆ ಬೇರೆ ಇಲಾಖೆಗಳಿಗೆ ಹಂಚಿಕೆ ಮಾಡಿದ್ದಾರೆ. ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಲು 30 ದಿನಗಳ ಗಡುವು ವಿಧಿಸಲಾಗಿತ್ತು. ಈ ಅವಧಿ ಮುಕ್ತಾಯಗೊಂಡ ಬಳಿಕವೂ 107 ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳಿಗೆ ಸ್ಥಳನಿಯುಕ್ತಿ ಮಾಡಿಲ್ಲ. ಕರ್ತವ್ಯಲೋಪ ಎಸಗಿದ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಕೃಷ್ಣಾ ರೆಡ್ಡಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು