ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾದ ಆ್ಯರನ್‌ ಫಿಂಚ್‌ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ

ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ವಿರಮಿಸಿದ ಬ್ಯಾಟರ್
Last Updated 7 ಫೆಬ್ರುವರಿ 2023, 12:56 IST
ಅಕ್ಷರ ಗಾತ್ರ

ಮೆಲ್ಬರ್ನ್‌ (ಪಿಟಿಐ): ಚುಟುಕು ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಬ್ಯಾಟರ್‌ ಮತ್ತು ನಾಯಕ ಎನಿಸಿರುವ ಆ್ಯರನ್‌ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಪ್ರಕಟಿಸಿದ್ದಾರೆ.

ಆಸ್ಟ್ರೇಲಿಯಾದ ಬಿಗ್‌ಬ್ಯಾಷ್ ಲೀಗ್‌ ಮತ್ತು ಇತರ ದೇಶಗಳಲ್ಲಿ ನಡೆಯುವ ಟಿ20 ಲೀಗ್‌ಗಳಲ್ಲಿ ಇನ್ನಷ್ಟು ವರ್ಷ ಆಟ ಮುಂದುವರಿಸಲು ನಿರ್ಧರಿಸಿದ್ದಾರೆ.

‘ಟಿ20ಯಲ್ಲಿ ನಮಗೆ ವಿಶ್ವಕಪ್‌ ಗೆದ್ದುಕೊಟ್ಟ ಮತ್ತು ಸುದೀರ್ಘ ಅವಧಿಯವರೆಗೆ ತಂಡವನ್ನು ಮುನ್ನಡೆಸಿದ್ದ ನಾಯಕ ತಮ್ಮ ವೃತ್ತಿಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಪ್ರಕಟಿಸಿದ್ದಾರೆ. ಆ್ಯರನ್‌ ಫಿಂಚ್‌ ಅವರಿಗೆ ಧನ್ಯವಾದಗಳು’ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

ಫಿಂಚ್‌ ಅವರ ನಿವೃತ್ತಿ ನಿರ್ಧಾರ ನಿರೀಕ್ಷಿತವೇ ಆಗಿತ್ತು. ಐದು ಟೆಸ್ಟ್‌ಗಳಲ್ಲಿ ಆಡಿದ್ದ ಅವರಿಗೆ 2018ರ ಬಳಿಕ ಟೆಸ್ಟ್‌ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ. ಫಾರ್ಮ್‌ ಕಳೆದುಕೊಂಡ ಕಾರಣ ಕಳೆದ ವರ್ಷ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು.

ದುಬೈನಲ್ಲಿ 2021 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅವರು ತಂಡವನ್ನು ಟ್ರೋಫಿಯತ್ತ ಮುನ್ನಡೆಸಿದ್ದರು. ಆಸ್ಟ್ರೇಲಿಯಾ ತಂಡ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಗೆದ್ದಿತ್ತು.

ಆದರೆ ಕಳೆದ ವರ್ಷ ತವರು ನೆಲದಲ್ಲಿ ನಡೆದಿದ್ದ ಚುಟುಕು ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಫಿಂಚ್‌ ನಾಯಕತ್ವದ ತಂಡ ಸೆಮಿಫೈನಲ್‌ ಪ್ರವೇಶಿಸಲು ವಿಫಲವಾಗಿತ್ತು. ವಿಶ್ವಕಪ್‌ನಲ್ಲಿ ಐರ್ಲೆಂಡ್‌ ವಿರುದ್ಧದ ಪಂದ್ಯವೇ ಅವರ ಕೊನೆಯ ಅಂತರರಾಷ್ಟ್ರೀಯ ಪಂದ್ಯ ಎನಿಸಿದೆ. ಆ ಪಂದ್ಯದಲ್ಲಿ 63 ರನ್‌ ಗಳಿಸಿದ್ದ ಅವರು ತಂಡಕ್ಕೆ 42 ರನ್‌ಗಳ ಗೆಲುವು ತಂದುಕೊಟ್ಟಿದ್ದರು.

‘2024ರಲ್ಲಿ ನಡೆಯುವ ಟಿ20 ವಿಶ್ವಕಪ್‌ವರೆಗೆ ನನಗೆ ಆಡಲು ಸಾಧ್ಯವಿಲ್ಲ ಎಂಬುದನ್ನು ಮನಗಂಡು ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದು ಅವರು ಸುದ್ದಿಗಾರರಲ್ಲಿ ತಿಳಿಸಿದರು.

ಕ್ರಿಕೆಟ್‌ನ ಮೂರು ಮಾದರಿಗಳಲ್ಲಿ ಒಟ್ಟು 254 ಅಂತರರಾಷ್ಟ್ರೀಯ ಪಂದ್ಯಗಳನ್ನಾಡಿರುವ ಫಿಂಚ್‌, 8,804 ರನ್‌ ಪೇರಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 17 ಮತ್ತು ಟಿ20ಯಲ್ಲಿ ಎರಡು ಶತಕಗಳನ್ನು ಗಳಿಸಿದ್ದಾರೆ. ಅವರು 76 ಟಿ20 ಮತ್ತು 55 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT