ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಿಂದ ಶ್ರೇಯಸ್ ಅಯ್ಯರ್ ಔಟ್

ನವದೆಹಲಿ: ಭಾರತದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಬೆನ್ನು ನೋವಿನಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಬಾರ್ಡರ್–ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ಫೆಬ್ರವರಿ 9ರಿಂದ ನಾಗಪುರಲ್ಲಿ ಆರಂಭವಾಗಲಿದೆ.
ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಫಿಟ್‌ನೆಸ್ ಪ್ರಮಾಣಪತ್ರ ಪಡೆಯಲು ಶ್ರೇಯಸ್ ಆಗಮಿಸಿದ್ದಾರೆ. ಆದರೆ, ಸಂಪೂರ್ಣ ಚೇತರಿಕೆ ಕಾಣಲು ಇನ್ನಷ್ಟು ಸಮಯ ಬೇಕು ಎಂದು ಅವರಿಗೆ ತಿಳಿಸಲಾಗಿದೆ ಎಂದು ಇಎಸ್‌ಪಿಎನ್ ಕ್ರಿಕ್‌ಇನ್ಫೋ ಕ್ರೀಡಾ ವೆಬ್‌ಸೈಟ್ ವರದಿ ಮಾಡಿದೆ.
ಬಾಂಗ್ಲಾದೇಶ ವಿರುದ್ಧ 2022ರ ಡಿಸೆಂಬರ್‌ನಲ್ಲಿ ನಡೆದ ಟೆಸ್ಟ್ ಸರಣಿಯ ಬಳಿಕ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರು ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಅಲಭ್ಯರಾಗಿದ್ದರು. ಎನ್‌ಸಿಎ ಅಲ್ಲಿ ಉಳಿದುಕೊಂಡು ಚಿಕಿತ್ಸೆ ಹಾಗೂ ತರಬೇತಿ ಪಡೆದಿರುವ ಅಯ್ಯರ್, ಬಾರ್ಡರ್–ಗವಾಸ್ಕರ್ ಸರಣಿಗೆ ತಂಡದೊಂದಿಗೆ ಅಭ್ಯಾಸ ಆರಂಭಿಸಲು ಬೆಂಗಳೂರಿನಿಂದ ನಾಗಪುರಕ್ಕೆ ಇಂದು (ಫೆಬ್ರವರಿ 2) ಪ್ರಯಾಣಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಇದೀಗ ಅದು ಸಾಧ್ಯವಾಗುತ್ತಿಲ್ಲ.
ಇದನ್ನೂ ಓದಿ: T20 Cricket | ಭಾರತದ ವಿರುದ್ಧ ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಆದ ತಂಡಗಳಿವು
ಅಯ್ಯರ್, ಎನ್‌ಸಿಎ ಅಲ್ಲಿಯೇ ಉಳಿದುಕೊಳ್ಳಬೇಕಿರುವುದು ಬಿಸಿಸಿಐ ವೈದ್ಯಕೀಯ ತಂಡ ತೆಗೆದುಕೊಂಡಿರುವ ಮುನ್ನೆಚ್ಚರಿಕಾ ಕ್ರಮವಾಗಿದೆ. ಅವರು (ಅಯ್ಯರ್) ಫೆಬ್ರವರಿ 17 ರಂದು ದೆಹಲಿಯಲ್ಲಿ ಆರಂಭವಾಗುವ ಎರಡನೇ ಟೆಸ್ಟ್‌ಗೆ ಭಾರತ ತಂಡವನ್ನು ಕೂಡಿಕೊಳ್ಳುವ ನಿರೀಕ್ಷೆಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಐಸಿಸಿ ರ್‍ಯಾಂಕಿಂಗ್‌ನಲ್ಲಿ ಟಿ20 ಕ್ರಿಕೆಟ್‌ನ ನಂಬರ್ 01 ಬ್ಯಾಟರ್ ಎನಿಸಿರುವ ಸೂರ್ಯಕುಮಾರ್ ಯಾದವ್ ಅವರು ಅಯ್ಯರ್ ಅನುಪಸ್ಥಿತಿಯಲ್ಲಿ ಟೆಸ್ಟ್ ತಂಡದ ಆಡುವ ಬಳಗದಲ್ಲಿ ಇದೇ ಮೊದಲ ಬಾರಿಗೆ ಸ್ಥಾನ ಪಡೆಯುವ ಸಾಧ್ಯತೆ ಇದೆ.
ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯು ಫೆಬ್ರವರಿ 09 ರಿಂದ ಮಾರ್ಚ್ 13ರ ವರೆಗೆ ನಡೆಯಲಿದೆ. ಬಳಿಕ ಏಕದಿನ ಸರಣಿಯ ಮೂರು ಪಂದ್ಯಗಳು ಕ್ರಮವಾಗಿ ಮಾರ್ಚ್ 17, 19 ಹಾಗೂ 22 ರಂದು ನಡೆಯಲಿವೆ.
ಟೆಸ್ಟ್ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ.ಎಲ್.ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆ.ಎಸ್.ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್.ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್
ಇದನ್ನೂ ಓದಿ: T20 Cricket | ನ್ಯೂಜಿಲೆಂಡ್ ವಿರುದ್ಧ ಶತಕ ಸಿಡಿಸಿ ಕೊಹ್ಲಿ ದಾಖಲೆ ಮುರಿದ ಗಿಲ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.