ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IND vs ENG 1st Test: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

Last Updated 5 ಫೆಬ್ರುವರಿ 2021, 6:23 IST
ಅಕ್ಷರ ಗಾತ್ರ

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆತಿಥೇಯ ಭಾರತ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ನಾಯಕ ಜೋ ರೂಟ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಶಹಬಾಜ್ ನದೀಂ ಇನ್...
ಭಾರತ ತಂಡದ ಪರ ಎಡಗೈ ಸ್ಪಿನ್ನರ್ ಶಹಬಾಜ್ ನದೀಂಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಶಹಬಾಜ್ ಪಾಲಿಗಿದು ಎರಡನೇ ಪಂದ್ಯವಾಗಿದ್ದು, 2019ರಲ್ಲಿ ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆದ ಪದಾರ್ಪಣಾ ಟೆಸ್ಟ್ ಪಂದ್ಯದಲ್ಲಿ ಒಟ್ಟು ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಪ್ರಭಾವಿ ಎನಿಸಿದ್ದರು.

ಗಿಲ್-ರೋಹಿತ್ ಓಪನರ್;ಪಂತ್ ವಿಕೆಟ್ ಕೀಪರ್...
ಭಾರತ ತಂಡದ ಪರ ಶುಭಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಅವರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇದರಿಂದಾಗಿ ಕರ್ನಾಟಕದ ಮಯಂಕ್ ಅಗರವಾಲ್ ಅವಕಾಶ ವಂಚಿತವಾಗಿದ್ದಾರೆ.

ಹಾಗೆಯೇ ತವರಿನ ಟೆಸ್ಟ್ ಪಂದ್ಯದಲ್ಲೂ ರಿಷಭ್ ಪಂತ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದರಿಂದಾಗಿ ವೃದ್ಧಿಮಾನ್ ಸಹಾ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ.

ಇಶಾಂತ್ ಇನ್...
ಅದೇ ಹೊತ್ತಿಗೆ ಗಾಯದಿಂದಾಗಿ ಸುದೀರ್ಘ ಸಮಯದಿಂದ ಹೊರಗುಳಿದಿರುವ ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಅಲ್ಲದೆ ತವರಿನಲ್ಲಿ ಮೊದಲ ಟೆಸ್ಟ್ ಪಂದ್ಯ ಆಡುತ್ತಿರುವ ಜಸ್‌ಪ್ರೀತ್ ಬೂಮ್ರಾ ಜೊತೆಗೆ ಹೊಸ ಚೆಂಡನ್ನು ಹಂಚಿಕೊಳ್ಳಲಿದ್ದಾರೆ.

ಭಾರತ ತಂಡವು ಮೂವರು ಸ್ಪಿನ್ನರ್‌ಗಳ ತಂತ್ರಕ್ಕೆ ಮೊರೆ ಹೋಗಿದ್ದು, ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್ ಜೊತೆಗೆ ಎಡಗೈ ಸ್ಪಿನ್ನರ್ ಶಹಬಾಜ್ ನದೀಂ ಕಾಣಿಸಿಕೊಂಡಿದ್ದಾರೆ.

ಗಾಯಾಳು ಅಕ್ಷರ್ ಪಟೇಲ್ ಔಟ್
ಆಸ್ಟ್ರೇಲಿಯಾ ಬಳಿಕ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಸರಣಿಯಲ್ಲೂ ಭಾರತದ ಗಾಯದ ಸಮಸ್ಯೆ ಮುಂದುವರಿದಿದೆ. ಸರಣಿ ಆರಂಭಕ್ಕೂ ಮುನ್ನವೇ ಮೊಣಕಾಲಿನ ಗಾಯಕ್ಕೆ ತುತ್ತಾಗಿರುವ ಅಕ್ಷರ್ ಪಟೇಲ್ ಸೇವೆಯಿಂದ ವಂಚಿತವಾಗಿದೆ. ಇವರ ಸ್ಥಾನಕ್ಕೆ ರಾಹುಲ್ ಚಹರ್ ಹಾಗೂ ಶಹಬಾಜ್ ನದೀಂ ಅವರನ್ನು ಸೇರ್ಪಡೆಗೊಳಿಸಲಾಗಿದೆ.

ಜೋ ರೂಟ್ 100ನೇ ಟೆಸ್ಟ್...
ಇಂಗ್ಲೆಂಡ್ ನಾಯಕ ಜೋ ರೂಟ್ ಅವರು ಸ್ಮರಣೀಯ 100ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಭಾರತದಲ್ಲೇ ಪದಾರ್ಪಣೆ ಮಾಡಿರುವ ರೂಟ್ ಈಗ ಭಾರತ ನೆಲದಲ್ಲೇ 100ನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ. ಅಲ್ಲದೆ ಮೈಲುಗಲ್ಲು ತಲುಪುತ್ತಿರುವ ಎದುರಾಳಿ ತಂಡದ ನಾಯಕರನ್ನು ಟೀಮ್ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ ಅಭಿನಂದಿಸಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್...
ಒಟ್ಟಾರೆಯಾಗಿ ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ನೆಲದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಅದೇ ಗೆಲುವಿನ ಓಟವನ್ನು ಮುಂದುವರಿಸುವ ಇರಾದೆಯಲ್ಲಿದೆ. ಮುಂಬರುವ ಚೊಚ್ಚಲ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಯಾರು ಆಡಲಿದ್ದಾರೆ ಎಂಬುದು ಕೂಡಾ ಇದೇ ಸರಣಿಯಲ್ಲಿ ನಿರ್ಧಾರವಾಗಲಿದೆ. ಹಾಗಾಗಿ ಪ್ರಸ್ತುತ ಸರಣಿಯಲ್ಲಿ ರೋಚಕತೆ ಮನೆ ಮಾಡಿದೆ.

ಮೊದಲೆರೆಡು ಪಂದ್ಯಗಳು ಚೆನ್ನೈನಲ್ಲಿ ಮತ್ತು ಅಂತಿಮ ಎರಡು ಪಂದ್ಯಗಳು ಅಹಮದಾಬಾದ್‌ನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಮೊಟೆರಾದಲ್ಲಿ ನಡೆಯಲಿದೆ.

ಆಡುವ ಬಳಗ ಇಂತಿದೆ:

ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಜಸ್‌ಪ್ರೀತ್ ಬೂಮ್ರಾ ಮತ್ತು ಶಹಬಾಜ್ ನದೀಂ.

ಇಂಗ್ಲೆಂಡ್: ರೋರಿ ಬರ್ನ್ಸ್, ಡಾಮಿನಿಕ್ ಸಿಬ್ಲಿ, ಡ್ಯಾನಿಯಲ್ ಲಾರೆನ್ಸ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಒಲ್ಲಿ ಪಾಪ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡಾಮಿನಿಕ್ ಬೆಸ್, ಜೋಫ್ರಾ ಆರ್ಚರ್, ಜ್ಯಾಕ್ ಲೀಚ್ ಮತ್ತು ಜೇಮ್ಸ್ ಆಂಡ್ರೆಸನ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT