ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಮೇಲೆ ನಂಬಿಕೆಯಿಟ್ಟ ಆರ್‌ಸಿಬಿಗೆ ಧನ್ಯವಾದ; ಕಾರ್ತಿಕ್ ಭಾವನಾತ್ಮಕ ನುಡಿ

ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಆಫ್ರಿಕಾ ಎದುರಿನ ಟಿ–20 ಸರಣಿಗೆ ಆಯ್ಕೆಯಾಗಿರುವುದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ದಿನೇಶ್‌ ಕಾರ್ತಿಕ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಐಪಿಎಲ್‌ ಟೂರ್ನಿಯಲ್ಲಿ ಮಿಂಚುತ್ತಿರುವ ಅನುಭವಿ ವಿಕೆಟ್‌ ಕೀಪರ್‌ –ಬ್ಯಾಟರ್ ದಿನೇಶ್ ಕಾರ್ತಿಕ್ ಮೂರು ವರ್ಷಗಳ ಬಳಿಕ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ವಿಡಿಯೊ ಹಂಚಿಕೊಂಡಿರುವ ಕಾರ್ತಿಕ್, ‘ನನಗೆ ತುಂಬಾ ಸಂತೋಷವಾಗಿದೆ. ಟೀಮ್ ಇಂಡಿಯಾಗೆ ಆಯ್ಕೆಯಾಗಿರುವುದು ನನ್ನ ಅತ್ಯಂತ ವಿಶೇಷ ಕಮ್‌ಬ್ಯಾಕ್‌ ಆಗಿದೆ ಎಂದರೆ ತಪ್ಪಲ್ಲ. ಏಕೆಂದರೆ ಬಹಳಷ್ಟು ಜನರು ನನ್ನನ್ನು ತ್ಯಜಿಸಿದ್ದರು. ನನ್ನ ಮೇಲೆ ನಂಬಿಕೆ ಇರಿಸಿ ಐಪಿಎಲ್ ಮೆಗಾ ಹರಾಜಿನಲ್ಲಿ ನನ್ನನ್ನು ಖರೀದಿಸಿದ ಆರ್‌ಸಿಬಿ ಫ್ರಾಂಚೈಸಿಗೆ ಋಣಿಯಾಗಿದ್ದೇನೆ. ಐಪಿಎಲ್‌ನಲ್ಲಿ ಆರ್‌ಸಿಬಿ ಪರ ನನ್ನ ಕೈಲಾದಷ್ಟು ಶ್ರಮಿಸಿದ್ದೇನೆ. ಆರ್‌ಸಿಬಿ ನನ್ನ ಪಾಲಿಗೆ ವಿಶೇಷ ಫ್ರಾಂಚೈಸಿಯಾಗಿದೆ. ಟೀಮ್‌ ಇಂಡಿಯಾಗೆ ಆಯ್ಕೆಯಾಗಿರುವುದು ತುಂಬಾ ಸಂತೋಷ ತರಿಸಿದೆ’ ಎಂದು ಹೇಳಿಕೊಂಡಿದ್ದಾರೆ.

‘ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹಾಗೂ ರೋಹಿತ್ ಶರ್ಮಾ ಅವರಿಗೆ ವಿಶೇಷ ಕ್ರೆಡಿಟ್ ಸಲ್ಲಬೇಕು. ಏಕೆಂದರೆ, ಇತ್ತೀಚೆಗೆ ಯುವ ಆಟಗಗಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಸಂದರ್ಭದಲ್ಲಿ ನನ್ನ ಮೇಲೆ ನಂಬಿಕೆ ಇರಿಸಿದ್ದಾರೆ. ಭಾರತ ತಂಡದಲ್ಲಿ ಆಡುವುದು ನನ್ನ ಮೊದಲ ಆದ್ಯತೆಯಾಗಿದೆ’ ಎಂದು ಕಾರ್ತಿಕ್ ಹೇಳಿದ್ದಾರೆ.

ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಕಾರ್ತಿಕ್ ಆಡಿರುವ 14 ಪಂದ್ಯಗಳಲ್ಲಿ 57.40ರ ಸರಾಸರಿಯಲ್ಲಿ 287 ರನ್ ಗಳಿಸಿದ್ದಾರೆ. ಆರ್‌ಸಿಬಿ ಪ್ಲೇ-ಆಫ್‌ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಜೂನ್ 9ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟಿ–20 ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟೀಮ್ ಇಂಡಿಯಾವನ್ನು ಭಾನುವಾರ ಪ್ರಕಟಿಸಿದ್ದು, ಹಲವು ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಕನ್ನಡಿಗ ಕೆ.ಎಲ್.ರಾಹುಲ್ ಅವರನ್ನು ನಾಯಕರಾಗಿ ಹಾಗೂ ರಿಷಭ್ ಪಂತ್ ಅವರನ್ನು ಉಪನಾಯಕರಾಗಿ ಆಯ್ಕೆ ಮಾಡಲಾಗಿದೆ. ಕಾಶ್ಮೀರದ ಪ್ರತಿಭೆ, ವೇಗಿ ಉಮ್ರನ್ ಮಲೀಕ್ ತಂಡದಲ್ಲಿದ್ದಾರೆ.

ಟಿ–20: ಕೆ.ಎಲ್. ರಾಹುಲ್ (ನಾಯಕ), ಋತುರಾಜ್ ಗಾಯಕ ವಾಡ, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪನಾಯಕ/ವಿಕೆಟ್‌ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್‌ಕೀಪರ್–ಬ್ಯಾಟರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT