ಪಾಕ್ ಪ್ರವಾಸದಿಂದ ಹಠಾತ್ತನೇ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನದ ಕ್ರಿಕೆಟಿಗರು ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ವೇಗಿ ಶೋಯಬ್ ಅಖ್ತರ್, 'ಪಾಕಿಸ್ತಾನ ಕ್ರಿಕೆಟ್ ಅನ್ನು ನ್ಯೂಜಿಲೆಂಡ್ ಕೊಂದುಹಾಕಿತು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನ್ಯೂಜಿಲೆಂಡ್ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ, 'ಸರಣಿಯ ಹಠಾತ್ ಮುಂದೂಡಿಕೆಯಿಂದ ತೀವ್ರ ನಿರಾಶೆಯಾಗಿದೆ' ಎಂದು ತಿಳಿಸಿದ್ದಾರೆ.
'ಪಾಕಿಸ್ತಾನದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳಲ್ಲಿ ಈ ಸರಣಿಯು ಸಂತಸ ಉಂಟು ಮಾಡಿತ್ತು. ನಮ್ಮ ಭದ್ರತಾ ಸಂಸ್ಥೆಗಳ ಸಾಮರ್ಥ್ಯದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಭದ್ರತಾ ಸಂಸ್ಥೆಗಳು ನಮ್ಮ ಹೆಮ್ಮೆ. ಪಾಕಿಸ್ತಾನ್ ಜಿಂದಾಬಾದ್' ಎಂದು ಆಜಂ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಪಾಕಿಸ್ತಾನ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಸಹ ನ್ಯೂಜಿಲೆಂಡ್ ನಿರ್ಧಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಶುಕ್ರವಾರ ಮೊದಲ ಏಕದಿನ ಪಂದ್ಯ ನಿಗದಿಯಾಗಿತ್ತು. ಆದರೆ, ಈ ಪ್ರವಾಸವನ್ನು ಮೊಟಕುಗೊಳಿಸಲು ನ್ಯೂಜಿಲೆಂಡ್ ತಂಡವು ನಿರ್ಧಾರ ತೆಗೆದುಕೊಂಡಿದೆ. ನ್ಯೂಜಿಲೆಂಡ್ ನಿರ್ಧಾರದ ವಿರುದ್ಧ ಪಾಕಿಸ್ತಾನ ಕ್ರಿಕೆಟ್ ಮಂಡಳಿಯೂ ಹರಿಹಾಯ್ದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.