ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ–ಆಸ್ಟ್ರೇಲಿಯಾ ಹಣಾಹಣಿ: ಏಕದಿನ ಸರಣಿ ಕೈವಶದತ್ತ ರೋಹಿತ್ ಪಡೆ ಚಿತ್ತ

ಜಡೇಜ, ರಾಹುಲ್ ಮೇಲೆ ಕಣ್ಣು
Last Updated 18 ಮಾರ್ಚ್ 2023, 18:40 IST
ಅಕ್ಷರ ಗಾತ್ರ

ವಿಶಾಖಪಟ್ಟಣ: ಮುಂಬೈನಲ್ಲಿ ಆಲ್‌ರೌಂಡರ್ ರವೀಂದ್ರ ಜಡೇಜ ಹಾಗೂ ಕೆ.ಎಲ್. ರಾಹುಲ್ ಅವರ ಅಮೋಘ ಆಟದ ಬಲದಿಂದ ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ ತಂಡವು ಆಸ್ಟ್ರೇಲಿಯಾ ಎದುರಿನ ಸರಣಿ ಕೈವಶ ಮಾಡಿಕೊಳ್ಳುವತ್ತ ಚಿತ್ತ ನೆಟ್ಟಿದೆ.

ಮೂರು ಪಂದ್ಯಗಳ ಸರಣಿಯ ಎರಡನೇ ಹಣಾಹಣಿಯು ಭಾನುವಾರ ನಡೆಯಲಿದೆ. ಸರಣಿ ಜಯದ ಆಸೆಯನ್ನು ಜೀವಂತವಾಗಿಟ್ಟುಕೊಳ್ಳಲು ಆಸ್ಟ್ರೇಲಿಯಾಕ್ಕೂ ಈ ಪಂದ್ಯದಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ. ಅದರಿಂದಾಗಿ ಸೆಣಸಾಟವು ರೋಚಕವಾಗುವ ನಿರೀಕ್ಷೆಯೂ ಇದೆ.

ಮೊದಲ ಪಂದ್ಯದಲ್ಲಿ ಅಲಭ್ಯರಾಗಿದ್ದ ರೋಹಿತ್ ಶರ್ಮಾ ತಂಡಕ್ಕೆ ಮರಳುತ್ತಿದ್ದು, ನಾಯಕತ್ವ ವಹಿಸುವರು. ಮುಂಬೈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಿದ್ದರು. ಇಶಾನ್ ಕಿಶನ್ ಬೆಂಚ್ ಕಾಯಬೇಕಾಗಬಹುದು.

ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಮೊದಲ ಪಂದ್ಯದಲ್ಲಿ 188 ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಭಾರತ ತಂಡಕ್ಕೆ ಅಜೇಯ ಜೊತೆಯಾಟವಾಡಿದ ರಾಹುಲ್ ಹಾಗೂ ಜಡೇಜ ಗೆಲುವಿನ ಕಾಣಿಕೆ ನೀಡಿದ್ದರು. 81 ರನ್‌ಗಳಿಗೆ ಐದು ವಿಕೆಟ್ ಕಳೆದುಕೊಂಡಿದ್ದ ತಂಡಕ್ಕೆ ಬಲ ತುಂಬಿದರು. ಟೆಸ್ಟ್ ಸರಣಿಯಲ್ಲಿ ಫಾರ್ಮ್‌ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದ ರಾಹುಲ್ ಏಕದಿನ ಪಂದ್ಯದಲ್ಲಿ ಉಪಯಕ್ತ ಆಟವಾಡಿದರು.

ಜಡೇಜ ಬೌಲಿಂಗ್, ಬ್ಯಾಟಿಂಗ್ ಮತ್ತು ಫೀಲ್ಡಿಂಗ್‌ ವಿಭಾಗಗಳಲ್ಲಿ ಮಿಂಚಿನ ಸಂಚಲನ ಮೂಡಿಸಿದರು. ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಅವರ ಉತ್ತಮ ಬೌಲಿಂಗ್‌ನಿಂದ ಆಸ್ಟ್ರೇಲಿಯಾ ಸಾಧಾರಣ ಮೊತ್ತ ಗಳಿಸಿತ್ತು. ಪ್ರವಾಸಿ ಬಳಗದಲ್ಲಿ ಮಿಚೆಲ್ ಮಾರ್ಷ್ ಉತ್ತಮ ಲಯದಲ್ಲಿದ್ದಾರೆ. ಆದರೆ ಉಳಿದ ಬ್ಯಾಟರ್‌ಗಳು ತಮ್ಮ ಫಾರ್ಮ್ ಕಂಡುಕೊಂಡರೆ ಆತಿಥೇಯ ಬೌಲರ್‌ಗಳಿಗೆ ದಾರಿ ಕಠಿಣವಾಗುವ ಸಾಧ್ಯತೆ ಇದೆ. ಎಡಗೈ ವೇಗಿ ಮಿಚೆಲ್ ಸ್ಟಾರ್ಕ್‌, ಮಾರ್ಕಸ್ ಸ್ಟೋಯಿನಿಸ್ ಮತ್ತು ಸ್ಪಿನ್ನರ್ ಆ್ಯಡಂ ಜಂಪಾ ಅವರು ರೋಹಿತ್ ಬಳಗಕ್ಕೆ ಸವಾಲೊಡ್ಡಬಲ್ಲರು.

ಪಿಚ್ ಹೇಗಿದೆ?
ವಿಶಾಖಪಟ್ಟಣದ ವಿಸಿಎ–ವಿಡಿಸಿಎ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳ ಸ್ನೇಹಿಯಾಗಿದೆ. 2010ರಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಏಕದಿನ ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಅದರಲ್ಲಿ ಭಾರತ ಜಯಿಸಿತ್ತು. ವಿರಾಟ್ ಕೊಹ್ಲಿ ಹಾಗೂ ಆಸ್ಟ್ರೇಲಿಯಾದ ಮೈಕೆಲ್ ಕ್ಲಾರ್ಕ್ ಶತಕ ಗಳಿಸಿದ್ದರು. ಬೌಲರ್‌ಗಳು ಸ್ವಲ್ಪ ಲಯ ತಪ್ಪಿದರೂ ದುಬಾರಿಯಾಗುವುದು ಖಚಿತ.

ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್. ರಾಹುಲ್ (ವಿಕೆಟ್‌ಕೀಪರ್), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜೈದೇವ್ ಉನದ್ಕತ್

ಆಸ್ಟ್ರೇಲಿಯಾ: ಸ್ಟೀವನ್ ಸ್ಮಿತ್ (ನಾಯಕ), ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಾರ್ನಸ್ ಲಾಬುಷೇನ್, ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರಾನ್ ಗ್ರೀನ್, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಆಷ್ಟನ್ ಆಗರ್, ಮಿಚೆಲ್ ಸ್ಟಾರ್ಕ್, ನೇಥನ್ ಎಲಿಸ್, ಆ್ಯಡಂ ಜಂಪಾ.

ಪಂದ್ಯ ಆರಂಭ: ಮಧ್ಯಾಹ್ನ 1.30

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT