ಪರ್ತ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ 'ಸೂಪರ್ 12' ಹಂತದ ಇಂದಿನ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಹೊಸ ದಾಖಲೆ ಬರೆದಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ಅತಿ ವೇಗವಾಗಿ 1,000 ರನ್ ಪೂರೈಸಿದ ವಿಶ್ವದ ಎರಡನೇ ಆಟಗಾರ ಎನಿಸಿದರು. ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲ ಜಯವರ್ಧನೆ ಮೊದಲ ಸ್ಥಾನದಲ್ಲಿದ್ದಾರೆ. ಅವರು 31 ಪಂದ್ಯಗಳಿಂದ 1,016 ರನ್ ಗಳಿಸಿದ್ದಾರೆ. 24 ಪಂದ್ಯಗಳ 22 ಇನಿಂಗ್ಸ್‌ಗಳಲ್ಲಿ 1,001 ರನ್ ಬಾರಿಸಿರುವ ವಿರಾಟ್ ಕೊಹ್ಲಿ, ಜಯವರ್ಧನೆ ನಂತರದ ಸ್ಥಾನದಲ್ಲಿದ್ದಾರೆ. ಅಗ್ರಸ್ಥಾನ್ಕಕೇರಲು ಕೊಹ್ಲಿಗೆ ಇನ್ನು 15 ರನ್ ಬೇಕಿದೆ.
ಈ ಪಟ್ಟಿಯಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 36 ಪಂದ್ಯಗಳ 33 ಇನಿಂಗ್ಸ್‌ಗಳಿಂದ 919 ರನ್ ಗಳಿಸಿದ್ದಾರೆ.
ಸದ್ಯ ಚುಟುಕು ವಿಶ್ವಕಪ್‌ನಲ್ಲಿ ಅತಿಹೆಚ್ಚು ಅರ್ಧಶತಕ ಗಳಿಸಿದ ದಾಖಲೆ ವಿರಾಟ್ ಹೆಸರಲ್ಲಿದೆ. ಅವರು 12 ಅರ್ಧಶತಕ ಗಳಿಸಿದ್ದಾರೆ. ನಂತರದ ಸ್ಥಾನದಲ್ಲಿ ವೆಸ್ಟ್ ಇಂಡೀಸ್‌ನ ಕ್ರಿಸ್ ಗೇಲ್ ಮತ್ತು ರೋಹಿತ್ ಶರ್ಮಾ ಇದ್ದಾರೆ. ಈ ಇಬ್ಬರೂ ತಲಾ 9 ಬಾರಿ 50ಕ್ಕಿಂತ ಹೆಚ್ಚು ರನ್ ಬಾರಿಸಿದ್ದಾರೆ.
ಇಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳನ್ನು ಕಳೆದುಕೊಂಡು 133 ರನ್ ಕಲೆಹಾಕಿದೆ.
ಈ ಪಂದ್ಯದಲ್ಲಿ 11 ಎಸೆತಗಳನ್ನು ಎದುರಿಸಿದ ಕೊಹ್ಲಿ, 2 ಬೌಂಡರಿ ಸಹಿತ 12 ರನ್ ಕಲೆಹಾಕಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.