ಮಂಗಳವಾರ, ಡಿಸೆಂಬರ್ 7, 2021
23 °C

T20WC: ಅಭ್ಯಾಸ ಪಂದ್ಯದಲ್ಲಿ ಮಿಂಚಿದ ರೋಹಿತ್; ಆಸೀಸ್ ವಿರುದ್ಧ ಭಾರತಕ್ಕೆ ಗೆಲುವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಪೂರ್ವಭಾವಿಯಾಗಿ ನಡೆದ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಒಂಬತ್ತು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. 

ಈ ಮೂಲಕ ವಿಶ್ವಕಪ್‌ಗೂ ಮೊದಲು ನಡೆದ ಎರಡೂ ಅಭ್ಯಾಸ ಪಂದ್ಯಗಳಲ್ಲಿ ಗೆಲುವು ಬಾರಿಸಿದೆ. ಈ ಮೊದಲು ಇಂಗ್ಲೆಂಡ್ ವಿರುದ್ಧ ಜಯಭೇರಿ ಮೊಳಗಿಸಿತ್ತು. 

ದ್ವಿತೀಯ ಅಭ್ಯಾಸ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ ರೋಹಿತ್, ಬಿರುಸಿನ ಅರ್ಧಶತಕ ಗಳಿಸುವ ಮೂಲಕ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 

ಅಲ್ಲದೆ ಮೊದಲ ವಿಕೆಟ್‌ಗೆ ಕೆ.ಎಲ್. ರಾಹುಲ್ ಜೊತೆಗೆ 9.2 ಓವರ್‌ಗಳಲ್ಲಿ 68 ರನ್‌ಗಳ ಜೊತೆಯಾಟ ಕಟ್ಟಿದರು. ಅಮೋಘ ಆಟವಾಡಿದ ರಾಹುಲ್ 31 ಎಸೆತಗಳಲ್ಲಿ 39 ರನ್ ಗಳಿಸಿ (2 ಬೌಂಡರಿ, 3 ಸಿಕ್ಸರ್) ಮಗದೊಮ್ಮೆ ಮಿಂಚಿದರು. 

ಅತ್ತ ಸಲೀಸಾಗಿ ಬ್ಯಾಟ್ ಬೀಸಿದ ರೋಹಿತ್ 36 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ರಾಹುಲ್ ವಿಕೆಟ್ ಪತನದ ಬಳಿಕ ಸೂರ್ಯಾಕುಮಾರ್ ಯಾದವ್ ಬೆಂಬಲ ದೊರಕಿತು.  

41 ಎಸೆತಗಳನ್ನು ಎದುರಿಸಿದ ರೋಹಿತ್ ಐದು ಬೌಂಡರಿ ಹಾಗೂ ಮೂರು ಸಿಕ್ಸರ್ ನೆರವಿನಿಂದ 60 ರನ್ ಗಳಿಸಿ ನಿವೃತ್ತಿ ಹೊಂದಿದರು. 

ಆಸೀಸ್ ಒಡ್ಡಿದ 153 ರನ್ ಗುರಿಯನ್ನು 17.5 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ ತಲುಪಿತು. ಸೂರ್ಯಕುಮಾರ್ ಯಾದವ್ 38 ರನ್ ಹಾಗೂ ಹಾರ್ದಿಕ್ ಪಾಂಡ್ಯ 14 ರನ್ ಗಳಿಸಿ ಔಟಾಗದೆ ಉಳಿದರು. 

ಈ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸೀಸ್ ಆರಂಭ ಉತ್ತಮವಾಗಿರಲಿಲ್ಲ. 11 ರನ್ ಗಳಿಸುವಷ್ಟರಲ್ಲಿ ಡೇವಿಡ್ ವಾರ್ನರ್ (1), ನಾಯಕ ಆ್ಯರನ್ ಫಿಂಚ್ (8) ಹಾಗೂ ಮಿಚೆಲ್ ಮಾರ್ಶ್ (0) ವಿಕೆಟ್‌‌ಗಳು ನಷ್ಟವಾಗಿತ್ತು.  

ನಾಲ್ಕನೇ ವಿಕೆಟ್‌ಗೆ ಸ್ಟೀವ್ ಸ್ಮಿತ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ 61 ರನ್‌ಗಳ ಜೊತೆಯಾಟ ಕಟ್ಟಿದರು. ಮ್ಯಾಕ್ಸ್‌ವೆಲ್ 41 ರನ್ ಗಳಿಸಿದರು. 

ಅತ್ತ ಆಕರ್ಷಕ ಇನ್ನಿಂಗ್ಸ್ ಕಟ್ಟಿದ ಸ್ಮಿತ್ ಅರ್ಧಶತಕ ಸಾಧನೆ ಮಾಡಿದರು. 48 ಎಸೆತಗಳನ್ನು ಎದುರಿಸಿದ ಸ್ಮಿತ್ ಏಳು ಬೌಂಡರಿಗಳ ನೆರವಿನಿಂದ 57 ರನ್ ಗಳಿಸಿದರು. 

ಕೊನೆಯ ಹಂತದಲ್ಲಿ ಮಾರ್ಕಸ್ ಸ್ಟೋಯಿನಿಸ್ ಕೇವಲ 25 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 41 ರನ್ ಗಳಿಸಿ ಔಟಾಗದೆ ಉಳಿದರು. 

ಇದರೊಂದಿಗೆ ಐದು ವಿಕೆಟ್ ನಷ್ಟಕ್ಕೆ 152 ರನ್‌ಗಳ ಸವಾಲಿನ ಮೊತ್ತ ಪೇರಿಸಿತು. ಭಾರತ ಪರ ಅಶ್ವಿನ್ ಎರಡು ವಿಕೆಟ್ ಕಿತ್ತು ಮಿಂಚಿದರು. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು