ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 100ರಷ್ಟು ಫಲಿತಾಂಶಕ್ಕೆ ಪ್ರಯತ್ನಿಸಿ

Last Updated 2 ಫೆಬ್ರುವರಿ 2018, 9:24 IST
ಅಕ್ಷರ ಗಾತ್ರ

ಚಾಮರಾಜನಗರ: ‘ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ಶೇ 100ರಷ್ಟು ಸಾಧನೆ ಮಾಡಲು ಪ್ರಯತ್ನಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಎಂ.ಸಿ. ಮೋಹನಕುಮಾರಿ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಸಂಬಂಧ ನಡೆದ ಪ್ರೌಢಶಾಲಾ ಮುಖ್ಯಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಫಲಿತಾಂಶ ಸುಧಾರಣೆಗಾಗಿ ಶಿಕ್ಷಕರು ಮಕ್ಕಳಿಂದ ಹಳೆಯ ಪ್ರಶ್ನೆಪತ್ರಿಕೆಗಳಿಗೆ ಉತ್ತರ ಬರೆಯಿಸಬೇಕು. ಪರೀಕ್ಷೆ ಹಿಂದಿನ ದಿನದವರೆಗೂ ತರಗತಿಗಳನ್ನು ನಡೆಸುವ ಮೂಲಕ ಅವರಲ್ಲಿ ಪರೀಕ್ಷಾ ಭಯ ಹೋಗಲಾಡಿಸಬೇಕು. ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳಿಗೆ ಕೌನ್ಸೆಲಿಂಗ್‌ ನಡೆಸಬೇಕು. ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಸೂಚನೆ ನೀಡಬೇಕು ಎಂದು ಸಲಹೆ ನೀಡಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಪುಸ್ತಕ ವಿತರಣೆ ಮಾಡುವ ಜತೆಗೆ, ಉನ್ನತ ದರ್ಜೆಯಲ್ಲಿ ತೇರ್ಗಡೆಯಾಗುವ ಮೊದಲ 5 ವಿದ್ಯಾರ್ಥಿಗಳಿಗೆ ಸಂಗಮ ಪ್ರತಿಷ್ಠಾನದಿಂದ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ, ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಿನ ಸೌಲಭ್ಯವನ್ನು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿದೆ. ಆದರೂ, ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದಾರೆ. ಇದರಿಂದ ಶಾಲೆಗಳು ಮುಚ್ಚುವ ಹಂತ ತಲುಪುತ್ತಿದ್ದು, ಶಿಕ್ಷಕರು ಈ ನಿಟ್ಟಿನಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸುವಂತೆ ಪೋಷಕರ ಮನವೊಲಿಸಬೇಕು ಎಂದು ತಿಳಿಸಿದರು.

ಕೃಷಿ ಮತ್ತು ಕೈಗಾರಿಕಾ ಸ್ಥಾಯಿಸಮಿತಿ ಅಧ್ಯಕ್ಷ ಕೆರೆಹಳ್ಳಿ ನವೀನ್‌ ಮಾತನಾಡಿ, ಮಾಜಿ ಸಚಿವ ದಿ. ಎಚ್.ಎಸ್‌. ಮಹದೇವಪ್ರಸಾದ್‌ ಅವರ ಸ್ಮರಣಾರ್ಥವಾಗಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಸಾಧಿಸಿದ ಎಲ್ಲ ಶಾಲೆಗಳಿಗೆ ತಲಾ ₹5,000 ನಗದು ಹಾಗೂ ಪ್ರಶಸ್ತಿ ಪತ್ರ ವಿತರಿಸುವುದಾಗಿ ಘೋಷಿಸಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಜೆ. ಯೋಗೇಶ್‌, ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಸಿ.ಎನ್. ಬಾಲರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹದೇವಪ್ಪ ಹಾಜರಿದ್ದರು.

‘ಅ, ಆ, ಇ, ಈ ಕಲಿತಿದ್ದೇ 8ನೇ ತರಗತಿಯಲ್ಲಿ’

‘ನಾನು ಅ, ಆ, ಇ, ಈ... ಕನ್ನಡ ವರ್ಣಮಾಲೆಯನ್ನು ಕಲಿತಿದ್ದು 8ನೇ ತರಗತಿಯಲ್ಲಿ. ಆದರೂ ಕನ್ನಡವನ್ನು ತುಂಬಾ ಚೆನ್ನಾಗಿ ಮಾತನಾಡುತ್ತೇನೆ’ ಎಂದು ಸಚಿವೆ ಮೋಹನಕುಮಾರಿ ಹೇಳಿದರು.

ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ‘ನಾನು ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯಲ್ಲಿ ಪಡೆದೆ. ಹಾಗಾಗಿ, 6ನೇ ತರಗತಿಯವರೆಗೂ ಅ, ಆ, ಇ, ಈ... ಬರುತ್ತಿರಲಿಲ್ಲ. ಹಿರಿಯ ಪ್ರಾಥಮಿಕ ಶಾಲೆಗೆ ಸೇರಿ ಕನ್ನಡ ಭಾಷೆಯ ಅಭ್ಯಾಸ ಪ್ರಾರಂಭಿಸಿದಾಗಲೇ ಕನ್ನಡ ಓದಲು ಕಲಿತದ್ದು, ಪ್ರಸ್ತುತ ಕನ್ನಡ ಭಾಷೆಯಲ್ಲಿ ಕವಿತೆ, ಕವನ, ಲೇಖನಗಳನ್ನು ಬರೆದಿದ್ದೇನೆ’ ಎಂದು ಬಾಲ್ಯ ಜೀವನವನ್ನು ಸ್ಮರಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT