ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಠೀರವ ಕ್ರೀಡಾಂಗಣಕ್ಕೆ ಹೈಟೆಕ್‌ ಸ್ಪರ್ಶ: ಕ್ರೀಡಾ ಸಚಿವ ನಾರಾಯಣ ಗೌಡ ಹೇಳಿಕೆ

ಕ್ರೀಡಾ ಸಚಿವ ನಾರಾಯಣ ಗೌಡ ಹೇಳಿಕೆ
Last Updated 11 ಫೆಬ್ರುವರಿ 2021, 19:12 IST
ಅಕ್ಷರ ಗಾತ್ರ

ಬೆಂಗಳೂರು: ‘ಕಂಠೀರವ ಕ್ರೀಡಾಂಗಣಕ್ಕೆ ಹೈಟೆಕ್‌ ಸ್ಪರ್ಶ ನೀಡಲು ತೀರ್ಮಾನಿಸಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಅಂದಾಜು ₹1,500 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣವನ್ನು ಉನ್ನತೀಕರಿಸಲು ಉದ್ದೇಶಿಸಲಾಗಿದ್ದು ಈಗಾಗಲೇ ನೀಲನಕ್ಷೆಯೂ ಸಿದ್ಧಗೊಂಡಿದೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣ ಗೌಡ ಗುರುವಾರ ಹೇಳಿದರು.

ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ‘ಕ್ರೀಡಾಂಗಣದ ಆವರಣದಲ್ಲಿ ಬಹುಮಹಡಿ ಕಟ್ಟಡ, ಪಂಚತಾರಾ ಹೋಟೆಲ್‌, ಪಾರ್ಕಿಂಗ್‌ ವ್ಯವಸ್ಥೆ ಹಾಗೂ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ. ಮುಂದಿನ ಎರಡು ತಿಂಗಳಲ್ಲಿ ಈ ಯೋಜನೆ ಕಾರ್ಯರೂಪಕ್ಕೆ ಬರಲಿದೆ’ ಎಂದರು.

‘ಜಿಲ್ಲೆಗಳಲ್ಲಿರುವ ಕ್ರೀಡಾಂಗಣಗಳಿಗೂ ಹೊಸ ರೂಪ ನೀಡಲು ನಿರ್ಧರಿಸಲಾಗಿದೆ. ಖಾಸಗಿ ಕಂಪನಿಗಳು ಮುಂದೆ ಬಂದರೆ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ‘ ಎಂದರು. ಕ್ರೀಡಾಂಗಣಗಳ ಅಭಿವೃದ್ಧಿಗೆ ಸಿಎಸ್‍ಆರ್‌ ಅನುದಾನ ಬಳಸಿಕೊಳ್ಳುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ’ಒಲಿಂಪಿಕ್ಸ್‌ನಲ್ಲಿ ಕರ್ನಾಟಕದ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು’ ಎಂದೂ ಅಧಿಕಾರಿಗಳಿಗೆ ತಾಕೀತು ಮಾಡಿದರು

ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ. ಪುರುಷೋತ್ತಮ್, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಇಲಾಖೆ ಆಯುಕ್ತ ಶ್ರೀನಿವಾಸ್ ಸಭೆಯಲ್ಲಿ ಇದ್ದರು.

₹1 ಸಾವಿರ ಕೋಟಿ ಅನುದಾನಕ್ಕೆ ಪ್ರಸ್ತಾವನೆ

‘ಪಂಜಾಬ್, ಹರಿಯಾಣದಂತಹ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕ್ರೀಡೆಗೆ ನೀಡುತ್ತಿರುವ ಅನುದಾನ ತೀರಾ ಕಡಿಮೆ ಇದೆ. ಹೀಗಾಗಿ ಮುಂದಿನ ಬಜೆಟ್‌ನಲ್ಲಿ ಸದ್ಯ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚು (ಕನಿಷ್ಟ ₹1 ಸಾವಿರ ಕೋಟಿ) ಅನುದಾನ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ’ ಎಂದು ಸಚಿವರು ಮಾಹಿತಿ ನೀಡಿದರು.


ಯುವಜನ ಮೇಳದಲ್ಲಿ ಉದ್ಯೋಗ ಮೇಳ

‘ಯುವ ಸಬಲೀಕರಣ ನಮ್ಮ ಧ್ಯೇಯ. ಇದಕ್ಕಾಗಿ ‘ಯುವ ನೀತಿ’ಗೆ ಹೊಸ ರೂಪ ನೀಡಲು ನಿರ್ಧರಿಸಿದ್ದೇವೆ. ಯುವಜನ ಮೇಳವನ್ನು ಉದ್ಯೋಗಮೇಳವನ್ನಾಗಿ ಪರಿವರ್ತಿಸಿ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಸುವ ಆಲೋಚನೆ ಇದೆ. ರಾಜ್ಯದಲ್ಲಿ 2.5 ಕೋಟಿ ಯುವಜನರಿದ್ದು, ಹೊಸ ಯುವ ನೀತಿಯಿಂದ ಅವರನ್ನೆಲ್ಲಾ ಕ್ರಿಯಾಶೀಲರನ್ನಾಗಿ ಮಾಡಬಹುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT