ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತಡಕ್ಕೆ ಮಣಿದು ಡಬ್ಲ್ಯುಎಫ್ಐ ಅಮಾನತು ನಿರ್ಧಾರ: ವಿಪಕ್ಷ

Published 24 ಡಿಸೆಂಬರ್ 2023, 19:45 IST
Last Updated 24 ಡಿಸೆಂಬರ್ 2023, 19:45 IST
ಅಕ್ಷರ ಗಾತ್ರ

ನವದೆಹಲಿ; ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಆಡಳಿತ ಸಮಿತಿಯನ್ನು ಅಮಾನತುಗೊಳಿಸುವ ಸರ್ಕಾರದ ನಿರ್ಧಾರವು ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಲು ಸಾಕಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕರು ಭಾನುವಾರ ಹೇಳಿದ್ದಾರೆ. 

ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್‌ಭೂಷಣ್‌ ಶರಣ್ ಸಿಂಗ್ ಅವರ ನಿಷ್ಠಾವಂತರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಏಕೆ ಅವಕಾಶ ನೀಡಲಾಯಿತು ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವಾಲಯವು ‌ಡಬ್ಲ್ಯುಎಫ್‌ಐ ಅಮಾನತುಗೊಳಿಸಿರುವುದು ‘ಪ್ರಹಸನ’. ಇಂತಹ ನಿರ್ಧಾರ ತೆಗೆದುಕೊಳ್ಳುವ ಮೂಲಕ ಆಡಳಿತಾರೂಢ ಬಿಜೆಪಿ ಮಹಿಳಾ ಕುಸ್ತಿಪಟುಗಳಿಗೆ ಸಹಾಯ ಮಾಡುತ್ತಿಲ್ಲ ಎಂಬ ಆರೋಪದಿಂದ ಮುಕ್ತವಾಗಲು ಸಾಧ್ಯವಿಲ್ಲ ಎಂದು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ವಕ್ತಾರ ಕ್ಲೈಡ್ ಕ್ರಾಸ್ಟೊ ‘ಎಕ್ಸ್‌’ನಲ್ಲಿ ಪ್ರಶ್ನಿಸಿದ್ದಾರೆ.

‘ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿರುವುದು ಮತ್ತು ಬಜರಂಗ್ ಪೂನಿಯಾ ಅವರು ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿರುವ ಬೆಳವಣಿಗೆ  ಡಬ್ಲ್ಯುಎಫ್ಐ ಚುನಾವಣೆಯನ್ನು ಅಮಾನತುಗೊಳಿಸುವಂತೆ ಕ್ರೀಡಾ ಸಚಿವಾಲಯದ ಮೇಲೆ ಒತ್ತಡ ಹೇರಿದೆ. ಇದು ಸ್ವಾಗತಾರ್ಹ. ಆದರೆ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ’ ಎಂದು ಕಾಂಗ್ರೆಸ್ ಮುಖಂಡ ಉದಿತ್ ರಾಜ್ ಹೇಳಿದ್ದಾರೆ.

ಬ್ರಿಜ್ ಭೂಷಣ್ ಅವರ ನಿಷ್ಠಾವಂತರ ಆಯ್ಕೆಯಿಂದ ಉಂಟಾದ ಆಕ್ರೋಶದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಫಕ್ರುಲ್ ಹಸನ್ ಚಂದ್ ಆರೋಪಿಸಿದ್ದಾರೆ.

ಡಬ್ಲ್ಯುಎಫ್‌ಐನ ಹೊಸ ಆಡಳಿತ ಸಮಿತಿಯನ್ನು ಕ್ರೀಡಾ ಸಚಿವಾಲಯ ಅಮಾನತು ಮಾಡಿರುವ ನಿರ್ಧಾರವನ್ನು ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಸ್ವಾಗತಿಸಿದ್ದಾರೆ.

‘ನಮ್ಮ ಕುಸ್ತಿಪಟುಗಳು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಅನೇಕ ಮಹಿಳೆಯರು ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಕನಸು ಕಾಣಬಹುದು. ಈ ನಿರ್ಧಾರವು ಭಾರತೀಯ ಕುಸ್ತಿಗೆ ಬಲವಾದ ಭವಿಷ್ಯಕ್ಕೆ ದಾರಿ ಮಾಡಿಕೊಡಲಿ’ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT