ತಿರುವನಂತಪುರ: ಇತ್ತೀಚೆಗೆ ಅಂತರರಾಷ್ಟ್ರೀಯ ಹಾಕಿಗೆ ವಿದಾಯ ಹೇಳಿದ್ದ ದಿಗ್ಗಜ ಗೋಲ್‌ಕೀಪರ್ ಪಿ.ಆರ್.ಶ್ರೀಜೇಶ್ ಅವರಿಗೆ ಕೇರಳ ಸರ್ಕಾರ ₹2 ಕೋಟಿ ನಗದು ಬಹುಮಾನ ಪ್ರಕಟಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.
ಪ್ಯಾರಿಸ್ ಒಲಿಂಪಿಕ್ ಕ್ರೀಡೆಗಳಲ್ಲಿ ಭಾರತ ಹಾಕಿ ತಂಡ ಕಂಚಿನ ಪದಕ ಗೆದ್ದುಕೊಂಡಿದ್ದು, ತಂಡದ ಪ್ರಮುಖ ಆಟಗಾರ ಶ್ರೀಜೇಶ್ ಅವರಿಗೆ ₹2 ಕೋಟಿ ನಗದು ಬಹುಮಾನ ನೀಡಲಾಗುವುದು’ ಎಂದು ತಿಳಿಸಲಾಗಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯವರಾದ ಶ್ರೀಜೇಶ್ ಭಾರತ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮೂರು ವರ್ಷಗಳ ಹಿಂದೆ ಟೋಕಿಯೊದಲ್ಲೂ ಕಂಚಿನ ಪದಕ ಗೆದ್ದ ಭಾರತ ತಂಡದಲ್ಲಿ ಅವರು ಆಡಿದ್ದರು. ಒಟ್ಟು ನಾಲ್ಕು ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ.