ಶನಿವಾರ, ಡಿಸೆಂಬರ್ 14, 2019
24 °C

ರೇಸ್ ಕ್ಲಬ್ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ನಡೆಸುತ್ತಿರುವ ಕುದುರೆ ರೇಸ್ ಹಾಗೂ ಇತರ ಎಲ್ಲ ಚಟುವಟಿಕೆಗಳನ್ನು ಡಿಸೆಂಬರ್ 2 ರಿಂದ ಸ್ಥಗಿತಗೊಳಿಸಲು ಕ್ರಮಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಗೆ ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸೂಚನೆ ನೀಡಿದೆ.

‘ಟರ್ಫ್ ಕ್ಲಬ್‌ ಅನ್ನು ನಗರದ ಹೊರವಲಯಕ್ಕೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಮಂಗಳವಾರ ನಡೆದ ಸಮಿತಿ ಸಭೆಯಲ್ಲಿ ಸೂಚನೆ ನೀಡಲಾಯಿತು’ ಎಂದು ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘2017–18ನೇ ಸಾಲಿನ ಅಂತ್ಯದ ವರೆಗೆ ₹32.86 ಕೋಟಿ ಬಾಡಿಗೆಯನ್ನು ಕ್ಲಬ್ ಬಾಕಿ ಉಳಿಸಿಕೊಂಡಿದ್ದು, ವಸೂಲಿಗೆ ಕ್ರಮ ವಹಿಸಬೇಕು. ಇದೇ ತಿಂಗಳ 30ರ ಒಳಗೆ ಪಾವತಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಸುಪ್ರೀಂಕೋರ್ಟ್‌ನಲ್ಲಿ ಟರ್ಫ್ ಕ್ಲಬ್ ದಾಖಲಿಸಿರುವ ಮೊಕದ್ದಮೆಯನ್ನು ಶೀಘ್ರ ಇತ್ಯರ್ಥಗೊಳಿಸಲು ಕ್ರಮವಹಿಸಬೇಕು.ಈ ಸಂಬಂಧ ಡಿಸೆಂಬರ್ ಮೊದಲನೇ ವಾರದಲ್ಲಿ ಸಮಿತಿಗೆ ವರದಿ ಸಲ್ಲಿಸುವಂತೆ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಯಿತು’ ಎಂದು ಅವರು ವಿವರಿಸಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ ಟರ್ಫ್ ಕ್ಲ ಬ್ಅನ್ನು ನಗರದ ಹೊರ ವಲಯಕ್ಕೆ ಸ್ಥಳಾಂತರಿಸಲು ಹಿಂದಿನ ಸರ್ಕಾರಗಳು ನಿರ್ಧಾರ ಕೈಗೊಂಡಿದ್ದರೂ, ಅದರ ಜಾರಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗದಿರುವ ಬಗ್ಗೆ ಚರ್ಚಿಸಲಾಯಿತು. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಸಭೆಗೆ ತಿಳಿಸಿದ್ದಾಗಿ ಅವರು ಹೇಳಿದರು.

ಪ್ರತಿಕ್ರಿಯಿಸಿ (+)