ಶುಕ್ರವಾರ, ಫೆಬ್ರವರಿ 3, 2023
18 °C

ಪ್ರಜಾವಾಣಿ ಸಾಧಕರು 2023 | ಸೈಕ್ಲಿಂಗ್‌ನಲ್ಲಿ ರಾಜ್ಯಕ್ಕೆ ‘ಕೀರ್ತಿ’

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

'ಪ್ರಜಾವಾಣಿ' ಪಾಲಿಗಿದು ಅಮೃತ ಮಹೋತ್ಸವದ ವರ್ಷ. 75 ವರ್ಷಗಳ ಹಾದಿಯಲ್ಲಿ ಜನಮುಖಿಯಾಗಿರುವ ಪತ್ರಿಕೆ, ನಮ್ಮ ನಡುವಿನ ಪ್ರತಿಭಾವಂತರನ್ನು ಗುರುತಿಸುವ ಕೆಲಸವನ್ನೂ ಲಾಗಾಯ್ತಿನಿಂದ ಮಾಡುತ್ತಾ ಬಂದಿದೆ. 2020ರಿಂದ ಪ್ರತಿವರ್ಷ ಆಯಾ ಇಸವಿಯ ಕೊನೆಯ ಎರಡು ಅಂಕಿಗಳಿಗೆ ಹೊಂದುವಷ್ಟು ಸಂಖ್ಯೆಯ ಸಾಧಕರನ್ನು ಆಯ್ಕೆ ಮಾಡಿ, ಸನ್ಮಾನಿಸುತ್ತಿರುವುದೇ ಇದಕ್ಕೆ ಸಾಕ್ಷಿ. ಶಿಕ್ಷಣ, ಸಮಾಜಸೇವೆ, ವಿಜ್ಞಾನ, ಕ್ರೀಡೆ, ಸಾಹಿತ್ಯ–ಕಲೆ–ಮನರಂಜನೆ, ಪರಿಸರ, ಉದ್ಯಮ, ಸಂಶೋಧನೆ, ಆಡಳಿತ, ಕನ್ನಡ ಕೈಂಕರ್ಯ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮಷ್ಟಕ್ಕೆ ತಾವು ಮುಗುಮ್ಮಾಗಿ ಸೇವೆ ಸಲ್ಲಿಸುತ್ತಿರುವವರನ್ನು 23 ಸಾಧಕರನ್ನು 2023ರ ಹೊಸವರ್ಷಕ್ಕೆ ಸಾಂಕೇತಿಕವಾಗಿ ಮಾಡಲಾಗಿದೆ. ಸಾಧಕರ ಕಿರು ಪರಿಚಯವನ್ನು ಇಲ್ಲಿ ನೀಡಲಾಗಿದ್ದು, ಅವರ ಹೆಜ್ಜೆಗುರುತುಗಳು ಈ ಅಕ್ಷರಚೌಕಟ್ಟನ್ನೂ ಮೀರಿದ್ದು. ಹೊಸ ವರ್ಷವನ್ನು ಈ ಸಾಧಕರೊಟ್ಟಿಗೆ ಬರಮಾಡಿಕೊಳ್ಳುವುದಕ್ಕೆ ಪತ್ರಿಕಾ ಬಳಗ ಹರ್ಷಿಸುತ್ತದೆ.

****

ಹೆಸರು: ಕೀರ್ತಿ ರಂಗಸ್ವಾಮಿ ಸಿ., ಪದವಿ ವಿದ್ಯಾರ್ಥಿ

ಸಾಧನೆ: ರಾಷ್ಟ್ರೀಯ ಸೈಕ್ಲಿಂಗ್‌ನಲ್ಲಿ ಪದಕಗಳ ಗೆಲುವು

ಸೈಕ್ಲಿಂಗ್‌ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚು ಹರಿಸುತ್ತಿರುವ ಕೀರ್ತಿ ರಂಗಸ್ವಾಮಿ ಸಿ. ಅವರು ಕರ್ನಾಟಕದ ಪ್ರತಿಭಾನ್ವಿತ ಕ್ರೀಡಾಪಟುಗಳಲ್ಲಿ ಒಬ್ಬರು. ಬೆಂಗಳೂರಿನ ಈ ಸೈಕ್ಲಿಸ್ಟ್‌,  ರಸ್ತೆ ಮತ್ತು ಟ್ರ್ಯಾಕ್‌ ಸೈಕ್ಲಿಂಗ್‌ನಲ್ಲಿ ಹಲವು ಪದಕಗಳನ್ನು ಗೆದ್ದುಕೊಂಡಿದ್ದಾರೆ.

ಕಳೆದ ಆರು ವರ್ಷಗಳಲ್ಲಿ 10ಕ್ಕೂ ಅಧಿಕ ರಾಷ್ಟ್ರಮಟ್ಟದ ಚಾಂಪಿಯನ್‌ಷಿಪ್‌ಗಳಲ್ಲಿ ಪಾಲ್ಗೊಂಡು ಐದು ಚಿನ್ನ ಸೇರಿದಂತೆ 19 ಪದಕ ಜಯಿಸಿದ ಹೆಗ್ಗಳಿಕೆ ಅವರದ್ದು. ರಾಷ್ಟ್ರೀಯ ಟ್ರ್ಯಾಕ್‌ ಮತ್ತು ರೋಡ್‌ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌, ರಾಷ್ಟ್ರಮಟ್ಟದ ಸ್ಕೂಲ್‌ ಗೇಮ್ಸ್‌ ಚಾಂಪಿಯನ್‌ಷಿಪ್‌, ಖೇಲೊ ಇಂಡಿಯಾ ಮತ್ತು ಅಖಿಲ ಭಾರತ ಅಂತರ ವಿ.ವಿ ಟ್ರ್ಯಾಕ್‌ ಸೈಕ್ಲಿಂಗ್‌ನಲ್ಲಿ ಅವರಿಗೆ ಪದಕ ದೊರೆತಿದೆ. ಗುಜರಾತ್‌ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಟ್ರ್ಯಾಕ್ ಸೈಕ್ಲಿಂಗ್‌ನ 3 ಕಿ.ಮೀ ವೈಯಕ್ತಿಕ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದರು. ಅಸ್ಸಾಂನಲ್ಲಿ ಈಚೆಗೆ ನಡೆದಿದ್ದ ರಾಷ್ಟ್ರೀಯ ಸೀನಿಯರ್‌ ಟ್ರ್ಯಾಕ್ ಸೈಕ್ಲಿಂಗ್‌ ಕೂಟದಲ್ಲೂ ಕಂಚಿನ ಪದಕ ಕೊರಳಿಗೇರಿಸಿಕೊಂಡಿದ್ದರು.

2019 ರಲ್ಲಿ ಕೊರಿಯಾದ ಸೋಲ್‌ನಲ್ಲಿ ನಡೆದಿದ್ದ ಏಷ್ಯನ್‌ ಜೂನಿಯರ್‌ ಟ್ರ್ಯಾಕ್‌ ಸೈಕ್ಲಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ 4 ಕಿ.ಮೀ. ತಂಡ ವಿಭಾಗದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರಲ್ಲದೆ, ನವದೆಹಲಿಯಲ್ಲಿ ನಡೆದಿದ್ದ ಏಷ್ಯಾ ಕಪ್‌ ಟ್ರ್ಯಾಕ್‌ ಕೂಟದ 2 ಕಿ.ಮೀ ವೈಯಕ್ತಿಕ ವಿಭಾಗದಲ್ಲಿ ಸ್ಪರ್ಧಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು