ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜಾವಾಣಿ ಸಾಧಕರು 2023 | ಅನೀಶ್‌ ಗೌಡ - ಈಜು ಪ್ರತಿಭೆ ದಾಖಲೆಗಳ ಒಡೆಯ

Last Updated 1 ಜನವರಿ 2023, 5:06 IST
ಅಕ್ಷರ ಗಾತ್ರ

'ಪ್ರಜಾವಾಣಿ' ಪಾಲಿಗಿದು ಅಮೃತ ಮಹೋತ್ಸವದ ವರ್ಷ. 75 ವರ್ಷಗಳ ಹಾದಿಯಲ್ಲಿ ಜನಮುಖಿಯಾಗಿರುವ ಪತ್ರಿಕೆ, ನಮ್ಮ ನಡುವಿನ ಪ್ರತಿಭಾವಂತರನ್ನು ಗುರುತಿಸುವ ಕೆಲಸವನ್ನೂ ಲಾಗಾಯ್ತಿನಿಂದ ಮಾಡುತ್ತಾ ಬಂದಿದೆ. 2020ರಿಂದ ಪ್ರತಿವರ್ಷ ಆಯಾ ಇಸವಿಯ ಕೊನೆಯ ಎರಡು ಅಂಕಿಗಳಿಗೆ ಹೊಂದುವಷ್ಟು ಸಂಖ್ಯೆಯ ಸಾಧಕರನ್ನು ಆಯ್ಕೆ ಮಾಡಿ, ಸನ್ಮಾನಿಸುತ್ತಿರುವುದೇ ಇದಕ್ಕೆ ಸಾಕ್ಷಿ. ಶಿಕ್ಷಣ, ಸಮಾಜಸೇವೆ, ವಿಜ್ಞಾನ, ಕ್ರೀಡೆ, ಸಾಹಿತ್ಯ–ಕಲೆ–ಮನರಂಜನೆ, ಪರಿಸರ, ಉದ್ಯಮ, ಸಂಶೋಧನೆ, ಆಡಳಿತ, ಕನ್ನಡ ಕೈಂಕರ್ಯ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮಷ್ಟಕ್ಕೆ ತಾವು ಮುಗುಮ್ಮಾಗಿ ಸೇವೆ ಸಲ್ಲಿಸುತ್ತಿರುವವರನ್ನು 23 ಸಾಧಕರನ್ನು 2023ರ ಹೊಸವರ್ಷಕ್ಕೆ ಸಾಂಕೇತಿಕವಾಗಿ ಮಾಡಲಾಗಿದೆ. ಸಾಧಕರ ಕಿರು ಪರಿಚಯವನ್ನು ಇಲ್ಲಿ ನೀಡಲಾಗಿದ್ದು, ಅವರ ಹೆಜ್ಜೆಗುರುತುಗಳು ಈ ಅಕ್ಷರಚೌಕಟ್ಟನ್ನೂ ಮೀರಿದ್ದು. ಹೊಸ ವರ್ಷವನ್ನು ಈ ಸಾಧಕರೊಟ್ಟಿಗೆ ಬರಮಾಡಿಕೊಳ್ಳುವುದಕ್ಕೆ ಪತ್ರಿಕಾ ಬಳಗ ಹರ್ಷಿಸುತ್ತದೆ.

****


ಹೆಸರು: ಅನೀಶ್‌ ಗೌಡ, ಕಾನೂನು ವಿದ್ಯಾರ್ಥಿ

ಸಾಧನೆ: ರಾಷ್ಟ್ರೀಯ ಈಜುಕೂಟದಲ್ಲಿ ಪದಕಗಳ ಗೆಲುವು

ರಾಷ್ಟ್ರೀಯ ಸ್ಪರ್ಧೆಗಳಲ್ಲಿ 65 ಚಿನ್ನ, 29 ಬೆಳ್ಳಿ ಮತ್ತು 15 ಕಂಚಿನ ಪದಕಗಳ ಗೆಲುವು. ಜೂನಿಯರ್‌, ಸೀನಿಯರ್‌ ವಿಭಾಗಗಳಲ್ಲಿ ರಾಷ್ಟ್ರಮಟ್ಟದಲ್ಲಿ ಎರಡು ಹಾಗೂ ರಾಜ್ಯಮಟ್ಟದಲ್ಲಿ ಆರು ದಾಖಲೆಗಳ ಒಡೆಯ...

ಕರ್ನಾಟಕದ ಭರವಸೆಯ ಈಜು ಪ್ರತಿಭೆ ಅನೀಶ್‌ ಎಸ್‌.ಗೌಡ ಅವರ ಸಾಧನೆಯ ಒಂದು ಸಣ್ಣ ಝಲಕ್‌ ಇದು. ಕರ್ನಾಟಕವು ಹಲವು ಅಂತರರಾಷ್ಟ್ರೀಯ ಈಜುಪಟುಗಳನ್ನು ಈ ದೇಶಕ್ಕೆ ನೀಡಿದೆ. ಇಲ್ಲಿನ ಸಾಕಷ್ಟು ಸ್ಪರ್ಧಿಗಳು ರಾಷ್ಟ್ರಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ.

ಕ್ರೈಸ್ಟ್‌ ವಿ.ವಿಯಲ್ಲಿ ಕಾನೂನು ಪದವಿ ಪಡೆಯುತ್ತಿರುವ 18 ವರ್ಷದ ಅನೀಶ್‌ ಕೂಡ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಈಜುಪಟು. ಸಿಂಗಪುರ ಮತ್ತು ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಎಂಟು ಪದಕ ಜಯಿಸಿದ್ದಾರೆ. 2022 ರಲ್ಲಿ ಪೆರುವಿನಲ್ಲಿ ನಡೆದಿದ್ದ ವಿಶ್ವ ಜೂನಿಯರ್‌ ಚಾಂಪಿಯನ್‌ಷಿಪ್‌ನಲ್ಲೂ ಪಾಲ್ಗೊಂಡಿದ್ದರು.

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇದೇ ಅಕ್ಟೋಬರ್‌ನಲ್ಲಿ ನಡೆದಿದ್ದ ರಾಷ್ಟ್ರೀಯ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ರಾಜ್ಯಕ್ಕೆ ಮೂರು ಚಿನ್ನ ಹಾಗೂ ಎರಡು ಕಂಚಿನ ಪದಕ ಗೆದ್ದುಕೊಟ್ಟಿದ್ದರು. 200ಮೀ. ಫ್ರೀಸ್ಟೈಲ್‌ ಸ್ಪರ್ಧೆಯಲ್ಲಿ ಹೊಸ ದಾಖಲೆ ಸ್ಥಾಪಿಸಿದ್ದರು. ಖೇಲೊ ಇಂಡಿಯಾ ಯೂತ್‌ ಗೇಮ್ಸ್‌ನಲ್ಲಿ ಆರು ಚಿನ್ನದ ಪದಕ ಗೆದ್ದು, ‘ಚಿನ್ನದ ಹುಡುಗ’ ಎಂಬ ಗೌರವಕ್ಕೆ ಪಾತ್ರರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT