ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಬಸ್ ಪಾಸ್ ವಿತರಣೆಗೆ ಒತ್ತಾಯ

ವಿದ್ಯಾರ್ಥಿಗಳಿಂದ ಶಾಸಕ ವೆಂಕಟರೆಡ್ಡಿ ಮುದ್ನಾಳಗೆ ಮನವಿ
Last Updated 15 ಜೂನ್ 2018, 13:59 IST
ಅಕ್ಷರ ಗಾತ್ರ

ಯಾದಗಿರಿ: ಗ್ರಾಮೀಣ ಭಾಗದ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿ ಗುರುವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ ಪ್ರತಿಭಟನೆ ನಡೆಸಿತು.

ರಾಜ್ಯದಲ್ಲಿ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡದೆ ಕೇವಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಪಾಸ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕೂಡಲೇ ಎಲ್ಲಾ ವಿದ್ಯಾರ್ಥಿಗಳಿಗೆ ಪಾಸ್ ನೀಡಲು ಕ್ರಮಕೈಗೊಳ್ಳಬೇಕು ಎಂದು ಸಂಘಟನೆ ಕಾರ್ಯಕರ್ತರು ಸರ್ಕಾರವನ್ನು ಒತ್ತಾಯಿಸಿದರು.

ಈಗಾಗಲೇ ಉಚಿತ ಬಸ್ ಪಾಸ್‌ಗಾಗಿ ರಾಜ್ಯದಾದ್ಯಂತ ಹೋರಾಟವನ್ನು ನಡೆಸಿ ರಾಜ್ಯದ ಶಿಕ್ಷಣ, ಹಣಕಾಸು ಮತ್ತು ಸಾರಿಗೆ ಇಲಾಖೆಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಅಧಿಕಾರಿಗಳು ಮಾತ್ರ ಇಲ್ಲಿಯವರೆಗೂ ಪ್ರತಿಕ್ರಿಯೆ ನೀಡಿಲ್ಲ ಎಂದು ದೂರಿದರು.

ರಾಜ್ಯ ಸರ್ಕಾರ ಈ ಕೂಡಲೇ ಮದ್ಯ ಪ್ರವೇಶಿಸಿ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಹಿಂದಿನ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು. ನಂತರ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಗೆ ಮನವಿ ಸಲ್ಲಿಸಿದರು.

ವಿದ್ಯಾರ್ಥಿ ಮುಖಂಡರಾದ ನಿತೀಶ್ ಕುರಕುಂದಿ, ಭೀಮು ಪೂಜಾರಿ, ವಿಜಯ ಕುಮಾರ ಯಳವಾರ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

ಶಹಾಪುರ: ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅಭ್ಯಾಸ ಮಾಡುತ್ತಿರುವ ಎಲ್ಲ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಗುರುವಾರ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಗ್ರಾಮೀಣ ಭಾಗದ ಪಾಸ್ ಹೊಂದಿದ ವಿದ್ಯಾರ್ಥಿಗಳಿಗೆ ನಗರ ಸಾರಿಗೆಯಲ್ಲಿ ಸಂಚರಿಸಲು ಅನುವು ಮಾಡಿಕೊಡಬೇಕು. ಗ್ರಾಮೀಣ ಪ್ರದೇಶದ ಕೆಲ ಹಳ್ಳಿಗಳಿಗೆ ಇಂದಿಗೂ ಬಸ್ ಸಂಚಾರ ಇಲ್ಲ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬಸ್‌  ವ್ಯವಸ್ಥೆ ಕಲ್ಪಿಸಿಕೊಡಬೇಕು.  ಶಾಲಾ, ಕಾಲೇಜುಗಳಲ್ಲಿ ಸೂಕ್ತ ಶೌಚಾಲಯ ನಿರ್ಮಾಣ ಮಾಡಬೇಕು. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಂತಿಗೆ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಎಬಿವಿಪಿ ಮುಖಂಡರಾದ ಅರವಿಂದ ಉಪ್ಪಿನ, ಮಲ್ಲಿಕಾರ್ಜುನ ಜಾಕಾ, ಅವಿನಾಶ ಗುತ್ತೇದಾರ, ಬಸವರಾಜ ಗುತ್ತೇದಾರ, ಭಾಗಣ್ಣ ಹೂಗಾರ, ಮರಲಿಂಗಪ್ಪ ಕಟ್ಟಿಮನಿ, ಪವರನ ಘವಳಕರ್, ಶಿವಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT