ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ 

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣರೆಡ್ಡಿ ಸೂಚನೆ
Last Updated 1 ಮಾರ್ಚ್ 2018, 9:32 IST
ಅಕ್ಷರ ಗಾತ್ರ

ಬೀದರ್‌: ‘ಜಿಲ್ಲೆಯಲ್ಲಿ ನಿರ್ಮಾಣದ ಹಂತದಲ್ಲಿರುವ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

‘ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ನಿರ್ಮಿತಿ ಕೇಂದ್ರದ ಕಾಮಗಾರಿಗಳನ್ನು ಬೇಗ ಮುಗಿಸಲು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಯಾವುದೇ ಇಲಾಖೆಗೆ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನ, ಹಣಕಾಸು ಕೊರತೆಯಾಗಿರುವ ಬಗೆಗೆ ಮಾಹಿತಿ ನೀಡಿದ್ದಲ್ಲಿ ಸಂಬಂಧಿಸಿದ ಅಧಿಕಾರಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪ್ರೇಮಸಾಗರ ದಾಂಡೇಕರ್ ಮಾತನಾಡಿ, ‘ಬೊಮ್ಮಗೊಂಡೇಶ್ವರ ಭವನ ನಿರ್ಮಾಣಕ್ಕೆ ಬಿಡುಗಡೆಯಾದ ಅನುದಾನ ಕಾರಣಾಂತರಗಳಿಂದ ವಾಪಸ್‌ ಹೋಗಿದೆ. ಈ ಹಣ ಮತ್ತೆ ಬಿಡುಗಡೆ ಮಾಡಬೇಕು’ ಎಂದು ಕೋರಿದರು.

ಕೃಷಿ ಇಲಾಖೆ ಅಧಿಕಾರಿ ಮಾತನಾಡಿ, ‘ಜಿಲ್ಲೆಯಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ, ಪಾಲಿ ಹೌಸ್ ನಿರ್ಮಾಣ ಮಾಡಲಾಗುತ್ತಿದೆ. ರೈತರಿಗೆ ಸ್ಪ್ರಿಂಕ್ಲರ್ ಮತ್ತು ನೆರಳು ಪರದೆಗಳನ್ನು ವಿತರಿಸಲಾಗುತ್ತಿದೆ’ ಎಂದು ತಿಳಿಸಿದರು.

ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕ ಮಾತನಾಡಿ, ‘ಕೃತಕ ಗರ್ಭಧಾರಣೆ ಯೋಜನೆಯನ್ನು ಜಿಲ್ಲೆಯಲ್ಲಿ ಶೇಕಡ 100ರಷ್ಟು ಅನುಷ್ಠಾನಕ್ಕೆ ತರಲಾಗಿದೆ. ಪಶುಭಾಗ್ಯ ಯೋಜನೆಯಡಿ ಪಶುಗಳ ವಿತರಣೆಗೆ ಹುಮನಾಬಾದ್‌ ಹೊರತುಪಡಿಸಿ ಎಲ್ಲ ತಾಲ್ಲೂಕುಗಳ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಮಾತನಾಡಿ, ‘ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಕರು ಕೊರತೆ ಇರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ ಎಚ್‌ಕೆಆರ್‌ಡಿಬಿ ಪಾಸಿಂಗ್ ಪ್ಯಾಕೇಜ್ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ’ ಎಂದರು.

ರೆಡ್ಡಿ ಅವರು ನಗರಾಭಿವೃದ್ಧಿ ಕೋಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮೀನುಗಾರಿಕೆ, ವಸತಿ ಯೋಜನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಎಚ್‌ಕೆಆರ್‌ಡಿಬಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ, ಜಿಲ್ಲಾ ಸಿಇಒ ಡಾ.ಆರ್.ಸೆಲ್ವಮಣಿ, ಅಧಿಕಾರಿಗಳು ಉಪಸ್ಥಿತರಿದ್ದರು.
***
ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಆಸ್ಪತ್ರೆಗಳ ಕಟ್ಟಡ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.
– ಡಾ. ರಮಣರೆಡ್ಡಿ
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT