ಬಿಜೆಪಿ ರಾಜ್ಯ ಕಾರ್ಯಕಾರಿಣಿ ಇಂದು

7

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಇಂದು

Published:
Updated:

ಬೆಂಗಳೂರು: ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ ಶುಕ್ರವಾರ ನಡೆಯಲಿದ್ದು, ಲೋಕಸಭೆ ಚುನಾವಣೆ ತಯಾರಿಗೆ ಸಂಬಂಧಿಸಿದಂತೆ ಮಹತ್ವದ ಕಾರ್ಯತಂತ್ರಗಳನ್ನು ರೂಪಿಸುವ ಚರ್ಚೆ ನಡೆಯಲಿದೆ.

ಅಲ್ಲದೆ, ವಿಧಾನಪರಿತ್ತಿನ ವಿರೋಧ ಪಕ್ಷದ ನಾಯಕನ ಆಯ್ಕೆ ಮತ್ತು ವಿಧಾನಮಂಡಲದ ಅಧಿವೇಶನದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಯಾವ ಕ್ಷೇತ್ರದಲ್ಲಿ ಯಾರನ್ನು ಕಣಕ್ಕೆ ಇಳಿಸಬೇಕು. ಯಾವ ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಬದಲಿಸುವುದರಿಂದ ಅನುಕೂಲವಾಗುತ್ತದೆ. ಗರಿಷ್ಠ 25 ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಯಾವ ರೀತಿ ಪ್ರಯತ್ನ ಮಾಡಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಗರದ ಅರಮನೆ ಮೈದಾನದಲ್ಲಿರುವ ಗಾಯತ್ರಿ ವಿಹಾರ್‌ನಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮಧ್ಯಾಹ್ನ 12ಕ್ಕೆ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ರಮೇಶ್‌ ಜಿಗಜಿಣಗಿ, ಅನಂತಕುಮಾರ್‌ ಹೆಗಡೆ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರರಾವ್‌ ಅವರು ಭಾಗವಹಿಸಲಿದ್ದಾರೆ.

ಸ್ವಾಮೀಜಿಗಳು ರಾಜಕೀಯ ಮಾಡಬಾರದು: ಕುಮಾರಸ್ವಾಮಿ ಸರ್ಕಾರ ಪತನಗೊಳಿಸುವ ಪ್ರಯತ್ನ ನಡೆಸಿದರೆ ಸುಮ್ಮನಿರುವುದಿಲ್ಲ ಎಂದು ನಂಜಾವಧೂತ ಸ್ವಾಮೀಜಿ ನೀಡಿರುವ ಹೇಳಿಕೆ ಖಂಡನೀಯ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.

ಸ್ವಾಮೀಜಿಗಳು ರಾಜಕೀಯ ಮಾಡಬಾರದು. ಎಲ್ಲ ಸಮುದಾಯದ ಜನರೂ ಭಕ್ತರಾಗಿರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಅವರು ಹೇಳಿದರು.

Tags: 

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !