ಬುಧವಾರ, ಸೆಪ್ಟೆಂಬರ್ 29, 2021
20 °C

ಹಿತೈಷಿಗಳ ಬಂಧನ: ಬಿಜೆಪಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಮ್ಮಿಶ್ರ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಲಿಂಗಾಯತ ಪ್ರತ್ಯೇಕ ಧರ್ಮದ ಪತ್ರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಹಿತೈಷಿಗಳ ಬಂಧಿಸಲಾಗುತ್ತಿದೆ. ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಮುಖಂಡರು ಆರೋಪಿಸಿದರು.

ಶಾಸಕ ಆರ್‌.ಅಶೋಕ್‌, ‘ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ತುರ್ತು ಪರಿಸ್ಥಿತಿಯ ಸ್ಥಿತಿ ನಿರ್ಮಾಣವಾಗುತ್ತದೆ. ಸಾಮಾಜಿಕ ಜಾಲತಾಣ ಹಾಗೂ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಮೈತ್ರಿ ಸರ್ಕಾರ ಪ್ರಯತ್ನಿಸುತ್ತಿದೆ. ಪೊಲೀಸ್ ದೌರ್ಜನ್ಯ ಮಿತಿ ಮೀರುತ್ತಿದೆ’ ಎಂದು ದೂರಿದರು.

‘ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬ ನೀತಿ ಅನುಸರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕೃಷ್ಣ ವಿರುದ್ಧ ಇದುವರೆಗೂ ಕ್ರಮ ಕೈಗೊಂಡಿಲ್ಲ. ಆದರೆ, ಪತ್ರಕರ್ತರನ್ನು ಏಕಾಏಕಿ ಬಂಧಿಸಿ ಜೈಲಿಗಟ್ಟುತ್ತಿದೆ’ ಎಂದು ಕಿಡಿಕಾರಿದರು.

‘ಮಾಧ್ಯಮದವರ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ಮಾಡಿದರೆ ನಾವು ಹೊಣೆಯಲ್ಲ ಎಂದು ಮುಖ್ಯಮಂತ್ರಿ ಅವರು ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಆ ಬಳಿಕ ದೌರ್ಜನ್ಯ ಹೆಚ್ಚಾಗಿದೆ. ಈ ಮಾತು ಇವತ್ತಲ್ಲ ನಾಳೆ ನಿಮಗೆ ತಿರುಗುಬಾಣ ಆಗುತ್ತದೆ. ಅಧಿಕಾರ ಯಾರಿಗೂ ಶಾಶ್ವತವಲ್ಲ’ ಎಂದು ಅಭಿಪ್ರಾಯಪಟ್ಟರು. ‌

ಬಿಜೆಪಿ ಮುಖಂಡ ಅಶ್ವತ್ಥನಾರಾಯಣ ಗೌಡ, ‘ಈ ಹಿಂದೆ ತುರ್ತು ಪರಿಸ್ಥಿತಿಯನ್ನು ಹೇರಿದ ಕಾರಣಕ್ಕೆ ಇಂದಿರಾ ಗಾಂಧಿ ಅವರಿಗೆ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಎಂ.ಬಿ.ಪಾಟೀಲರು ಗೃಹ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಅವರು ಗೃಹ ಸಚಿವರಾಗಿ ಶಾಶ್ವತವಾಗಿ ಇರುವುದಿಲ್ಲ. ಮಾಜಿ ಆದ ಬಳಿಕ ನಿಮ್ಮ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಯೋಚಿಸಿ. ಬಿಜೆಪಿ ಕಾರ್ಯಕರ್ತರನ್ನು ಜೈಲಿಗಟ್ಟುವ ಧೋರಣೆ ಮುಂದುವರಿಸಿದರೆ ನಿಮ್ಮ ಮನೆಗೆ ಮುತ್ತಿಗೆ ಹಾಕಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.