ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧ ಕಚೇರಿಯಲ್ಲಿ ಹಣ: ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಬಿಜೆಪಿ ಆಗ್ರಹ

Last Updated 6 ಜನವರಿ 2019, 9:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು. ಇದೇ ವೇಳೆ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪುಟ್ಟರಂಗ ಶೆಟ್ಟಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜನ ಸಾಮಾನ್ಯರಿಗೆ ಹೊರೆ ಹೇರಿರುವ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿದ ಅವರು, ಈ ಕೂಡಲೇ ತೆರಿಗೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.

ಪುಟ್ಟರಂಗಶೆಟ್ಟಿ ರಾಜೀನಾಮೆಗೆ ಆಗ್ರಹ

ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಪುಟ್ಟರಂಗಶೆಟ್ಟಿ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಸಚಿವ ಪುಟ್ಟರಂಗಶೆಟ್ಟಿ ಕಚೇರಿ ಸಿಬ್ಬಂದಿಯೊಬ್ಬರು ₹25 ಲಕ್ಷದೊಂದಿಗೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಸಮಿತಿ ಅಧ್ಯಕ್ಷ ನಾಗೇಶ ಕಲಬುರ್ಗಿ ಮಾತನಾಡಿ, ಸತತವಾಗಿ ಏರುತ್ತಿದ್ದ ಬೆಲೆಗಳಿಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಿದೆ. ಕಳೆದ ಒಂದು ತಿಂಗಳಿನಿಂದ ಬೆಲೆ ಇಳಿಕೆಯ ಹಾದಿಯಲ್ಲಿದೆ. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಿಸುವ ಮೂಲಕ ಜನರಿಗೆ ಬರೆ ಎಳೆದಿದ್ದಾರೆ ಎಂದರು.

ಪೆಟ್ರೋಲ್– ಡೀಸೆಲ್ ಬೆಲೆ ಏರಿಕೆಯಾದರೆ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವುದರಿಂದ ಸಾಮಾನ್ಯ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಆದ್ದರಿಂದ ಈ ಕೂಡಲೇ ತೆರಿಗೆ ಕಡಿತ ಮಾಡಬೇಕು ಎಂದು ಆಗ್ರಹಿಸಿದರು.

ಧಾರವಾಡ ವಿಭಾಗದ ಸಹ ಪ್ರಭಾರಿ ಮಹೇಶ ಟೆಂಗಿನಕಾಯಿ ಮಾತನಾಡಿ, ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಆದರೆ ಗುಜರಾತ್‌ನಲ್ಲಿ ಪೆಟ್ರೋಲ್ ಬೆಲೆ ₹65 ಮಾತ್ರ ಇದೆ ಎಂದರು. ಪಾಲಿಕೆ ಸದಸ್ಯ ಶಿವು ಮೆಣಸಿಕನಾಯಿ, ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ವಕ್ತಾರ ಹನುಮಂತಪ್ಪ ದೊಡ್ಡಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT