ಶಶಿಧರ್‌ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ

7

ಶಶಿಧರ್‌ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ

Published:
Updated:

ಬೆಂಗಳೂರು: ಪೊಲೀಸರನ್ನು ಪ್ರತಿಭಟನೆಗೆ ಪ್ರಚೋದಿಸಿದ ಕಾರಣಕ್ಕೆ ‘ಕರ್ನಾಟಕ ಪೊಲೀಸ್ ಮಹಾಸಭಾ’ ಅಧ್ಯಕ್ಷ ವಿ.ಶಶಿಧರ್‌ ವಿರುದ್ಧ ನಗರದ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

‘ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ನನ್ನ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಅಧೀನ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣೆ ಪಟ್ಟಿ ರದ್ದುಪಡಿಸಬೇಕು’ ಎಂದು ಕೋರಿ ವಿ.ಶಶಿಧರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್‌ ವಾದ ಮಂಡಿಸಿ, ‘ಜಾಮೀನಿನ ಷರತ್ತು ಉಲ್ಲಂಘಿಸಿದ್ದಾರೆ ಮತ್ತು ಸರ್ಕಾರದ ವಿರುದ್ಧ ಬುಡಮೇಲು ಮಾಡಲು ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ’ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ‘ಪೊಲೀಸರು ಏಕೆ ಅರ್ಜಿದಾರರ ಬೆನ್ನು ಹತ್ತಿದ್ದಾರೆ, ಪೊಲೀಸರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದು ತಪ್ಪೇ’ ಎಂದು ಪ್ರಶ್ನಿಸಿದರು.

‘ಮುಖ್ಯಮಂತ್ರಿಗಳ ವಿರುದ್ಧ ಮಾತನಾಡಬಾರದೇ, ಮಾತನಾಡಿದರೆ ಬಂಧಿಸುತ್ತೀರಾ, ಅರ್ಜಿದಾರರಿಗೆ ವಾಕ್ ಸ್ವಾತಂತ್ರ್ಯ ಇಲ್ಲವೇ’ ಎಂದು ಪ್ರಾಸಿಕ್ಯೂಷನ್‌ ಪರ ವಕೀಲರನ್ನು ಪ್ರಶ್ನಿಸಿದರು.

ಅರ್ಜಿದಾರರ ವಿರುದ್ಧದ ವಿಚಾರಣಾ ನ್ಯಾಯಾಲಯದಲ್ಲಿ ನಡೆಸುತ್ತಿರುವ ಪ್ರಕರಣದ ವಿಚಾರಣೆಗೆ ತಡೆ ನೀಡಿದರು. ಮುಂದಿನ ವಿಚಾರಣೆಯನ್ನು ಮಾರ್ಚ್‌ 5ಕ್ಕೆ ಮುಂದೂಡಲಾಗಿದೆ.

ಪ್ರಕರಣವೇನು?: ಪೊಲೀಸರ ಸಮಸ್ಯೆ ಬಗೆಹರಿಸುವ ದಿಸೆಯಲ್ಲಿ ‘ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಣೆಯಿಂದ ಹೊರಗುಳಿದು 2016ರ ಜೂನ್‌ 4ರಂದು ಪ್ರತಿಭಟನೆ ನಡೆಸಬೇಕು’ ಎಂದು ಶಶಿಧರ್ ಕರೆ ನೀಡಿದ್ದರು.

ಈ ಕಾರಣಕ್ಕೆ ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು ಶಶಿಧರ್ ಅವರನ್ನು ಬಂಧಿಸಿ, ದೇಶದ್ರೋಹ ಆರೋಪದಡಿ ಪ್ರಕರಣ ದಾಖಲಿಸಿದ್ದರು. ನಂತರ ಈ ಪ್ರಕರಣವನ್ನು ಸಿಸಿಬಿ ವರ್ಗಾವಣೆ ಮಾಡಲಾಗಿತ್ತು.

ಶಶಿಧರ್ ವಿರುದ್ಧ ರಾಜದ್ರೋಹ, ಕ್ರಿಮಿನಲ್ ಸಂಚು ರೂಪಿಸಿದ ಮತ್ತು ಪ್ರಚೋದನೆ ನೀಡಿದ ಆರೋಪದಡಿ ಸಿಸಿಬಿ ಪೊಲೀಸರು ಒಂದನೇ ಎಸಿಎಂಎಂ ನ್ಯಾಯಲಯಕ್ಕೆ 2018ರ ಏಪ್ರಿಲ್‌ 10ರಂದು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !