ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ವಿಳಂಬ: ಕಪ್ಪುಪಟ್ಟಿಗೆ ಗುತ್ತಿಗೆದಾರರು

ನಗರಸಭೆ ತುರ್ತುಸಭೆಯಲ್ಲಿ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಎಚ್ಚರಿಕೆ
Last Updated 16 ನವೆಂಬರ್ 2019, 13:32 IST
ಅಕ್ಷರ ಗಾತ್ರ

ಮಡಿಕೇರಿ: ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆಯುಡಬ್ಲ್ಯುಎಸ್) ವತಿಯಿಂದ ಈಗಾಗಲೇ ನಗರದಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಎಂಜಿನಿಯರ್‌ಗಳಿಗೆ ಸೂಚಿಸಿದರು.

ನಗರದ ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ನಗರಸಭೆ ವ್ಯಾಪ್ತಿಯ ರಸ್ತೆ, ಚರಂಡಿ, ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿ ಬಗ್ಗೆ ಎಂಜಿನಿಯರ್‌ಗಳಿಂದ ಮಾಹಿತಿ ಪಡೆದು ಅವರು ಖಡಕ್‌ ಎಚ್ಚರಿಕೆ ನೀಡಿದರು.

ಆರಂಭವಾಗಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿರುವ ರಸ್ತೆ ಕಾಮಗಾರಿಗಳನ್ನು ಒಂದು ವಾರದೊಳಗೆ ಆರಂಭಿಸಬೇಕು ಎಂದು ಕಟ್ಟುನಿಟ್ಟಿನ ಸೂಚಿಸಿದರು.

ಕೆಯುಡಬ್ಲ್ಯುಎಸ್ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ಮೇ ಅಂತ್ಯದೊಳಗೆ ಪೂರ್ಣಗೊಳಿಸದಿದ್ದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಅನೀಸ್‌ ಕಣ್ಮಣಿ ಜಾಯ್‌ ಎಂದು ಎಚ್ಚರಿಸಿದರು.

ಕ್ರಿಯಾ ಯೋಜನೆಗೆ ಬಾಕಿಯಿರುವ ಕಾಮಗಾರಿಗಳ ಕಡತವನ್ನು ಸೋಮವಾರ ಜಿಲ್ಲಾಡಳಿತ ಕಚೇರಿಗೆ ಸಲ್ಲಿಸಬೇಕು. ಜತೆಗೆ, ನಗರೋತ್ಥಾನ 3ನೇ ಹಂತದ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕು ಎಂದು ಸೂಚಿಸಿದರು.

ಪೌರಾಯುಕ್ತ ರಮೇಶ್ ಮಾತನಾಡಿ, ಸ್ಟೋನ್‌ ಹಿಲ್‌ನಲ್ಲಿ ಮಳೆ ಕಾರಣದಿಂದ ಘನತ್ಯಾಜ್ಯ ಸಮರ್ಪಕ ವಿಲೇವಾರಿಗೆ ತೊಂದರೆ ಉಂಟಾಯಿತು ಎಂದು ತಿಳಿಸಿದರು.

ನಗರಾಭಿವೃದ್ಧಿ ಯೋಜನಾ ಶಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹೇಮಂತ್ ಕುಮಾರ್, ಸಹಾಯಕ ಎಂಜಿನಿಯರ್‌ಗಳಾದ ವನಿತಾ, ನಾಗರಾಜು, ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಶ್ರೀನಿವಾಸ್, ನಗರಸಭೆ ಘನತ್ಯಾಜ್ಯ ವಿಭಾಗದ ಅಧಿಕಾರಿ ನಾಚಪ್ಪ, ಆರೋಗ್ಯ ವಿಭಾಗದ ಅಧಿಕಾರಿ ರಮೇಶ್, ಲೆಕ್ಕಾಧಿಕಾರಿ ತಾಹಿರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT