ಇನ್ನೂ ಪರಿಸರ ಇಲಾಖೆ ತಲುಪಿಲ್ಲ ಅರ್ಜಿ

7
ಎಲಿವೇಟೆಡ್‌ ಕಾರಿಡಾರ್‌: ಪರಿಸರದ ಮೇಲಿನ ಪರಿಣಾಮ ಅಧ್ಯಯನ

ಇನ್ನೂ ಪರಿಸರ ಇಲಾಖೆ ತಲುಪಿಲ್ಲ ಅರ್ಜಿ

Published:
Updated:

ಬೆಂಗಳೂರು: ಮಹತ್ವಾಕಾಂಕ್ಷೆಯ ಎಲಿವೇಟೆಡ್‌ ಕಾರಿಡಾರ್‌ ಯೋಜನೆಯಿಂದ ಪರಿಸರದ ಮೇಲಾಗುವ ಪರಿಣಾಮಗಳ ಅಧ್ಯಯನ ಇನ್ನಷ್ಟೇ ನಡೆಯಬೇಕಿದೆ.

96 ಕಿ.ಮೀ ಉದ್ದದ ಕಾರಿಡರ್‌ ನಿರ್ಮಿಸುವ ಈ ಯೋಜನೆಗೆ ಪರಿಸರ ಇಲಾಖೆಯ ಅನುಮತಿ ಪಡೆಯುವುದಕ್ಕೆ ಕುರಿತು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌) ಇನ್ನೂ ಅರ್ಜಿ ಸಲ್ಲಿಸಿಲ್ಲ.

‘ಕಾನೂನುಬದ್ಧ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಪರಿಸರ ಇಲಾಖೆಯಿಂದ ಅನುಮತಿ ಪಡೆಯುವುದಕ್ಕೆ ಏನಿಲ್ಲವೆಂದರೂ ನಾಲ್ಕು ತಿಂಗಳು ಹಿಡಿಯುತ್ತದೆ. ಈ ಯೋಜನೆ ಕುರಿತು ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸುವುದಕ್ಕೆ ಕನಿಷ್ಠ ಒಂದು ತಿಂಗಳು ಕಾಲಾವಕಾಶ ನೀಡಬೇಕಾಗುತ್ತದೆ. ಡಿಸೆಂಬರ್‌ ಒಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈಗಿನ ಪರಿಸ್ಥಿತಿ ನೋಡಿದರೆ ಇದಕ್ಕೆ ಇನ್ನಷ್ಟು ಸಮಯ ತಗಲುವ ಸಾಧ್ಯತೆ ಇದೆ’ ಎಂದು ಹೆಸರು ಹೇಳಲು ಇಚ್ಛಿಸದ ಪರಿಸರ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಯೋಜನೆಯಿಂದ ಪರಿಸರದ ಮೇಲಾಗುವ ಪರಿಣಾಮದ ಅಧ್ಯಯನ ವರದಿ ಸಿದ್ಧವಾದ ಬಳಿಕವಷ್ಟೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಕೋರಬಹುದು. ಮಂಡಳಿ ಸೂಚಿಸುವ ಕೆಲವೊಂದು ಮಾರ್ಪಾಡುಗಳನ್ನು ಅಳವಡಿಸಿಕೊಂಡ ಬಳಿಕ ಯೋಜನೆಗೆ ಪರಿಸರ ಮೇಲಿನ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರದ ಅನುಮತಿ ಪಡೆಯಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಈ ಯೋಜನೆಯ ವಿಸ್ತೃತ ಕಾರ್ಯಸಾಧ್ಯತಾ ವರದಿ ಸಿದ್ಧವಾಗಿದೆ. ಹಾಗಾಗಿ ಈ ಯೋಜನೆಗೆ ಶೀಘ್ರ ಪರಿಸರ ಇಲಾಖೆ ಅನುಮತಿ ಪಡೆಯವ ಪ್ರಕ್ರಿಯೆ ಆರಂಭಿಸಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜೂನ್‌ 30ರಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿತ್ತು.ಆದರೆ, ಕೆಆರ್‌ಡಿಸಿಎಲ್‌  ಇನ್ನೂ ಪರಿಸರ ಇಲಾಖೆಗೆ ಸಲ್ಲಿಸಬೇಕಾದ ಪ್ರಸ್ತಾವ ಸಿದ್ಧಪಡಿಸಿಲ್ಲ.

‘ನಾವು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಇದಕ್ಕೆ ಅಗತ್ಯ ದಾಖಲೆಗಳನ್ನು ಸಜ್ಜುಗೊಳಿಸುತ್ತಿದ್ದೇವೆ. ಇದು ಪೂರ್ಣಗೊಳ್ಳಲು ಇನ್ನೂ ಒಂದು ವಾರ ಬೇಕು. ಬಳಿಕ ಪರಿಸರ ಇಲಾಖೆಗೆ ಅರ್ಜಿ ಸಲ್ಲಿಸುತ್ತೇವೆ’ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಗಣೇಶ್‌ ತಿಳಿಸಿದರು.

ಯಾವುದೇ ಯೋಜನೆಯನ್ನು ಕಾರ್ಯಗತಗೊಳಿಸುವ ಮುನ್ನ ಅದರಿಂದ ಪರಿಸರದ ಮೇಲಾಗುವ ಪರಿಣಾಮ ನಡೆಸುವುದು ಕಡ್ಡಾಯ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹೇಳಿದೆ. ಪರಿಸರ ಕಾಯ್ದೆಯ ಸೆಕ್ಷನ್‌ 8ಎ ಮತ್ತು ಬಿ ಪ್ರಕಾರವೂ ಈ ಅಧ್ಯಯನ ಕಡ್ಡಾಯ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !