ಭಾನುವಾರ, ನವೆಂಬರ್ 17, 2019
28 °C

ಕಸ ನಿರ್ವಹಣೆ ಪ್ರಾಧಿಕಾರ ರಚನೆಗೆ ಬಿಬಿಎಂಪಿ ಚಿಂತನೆ

Published:
Updated:

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ನಗರ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಕಸ ನಿರ್ವಹಣೆ ಮಾಡದಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ‘ಕಸ ನಿರ್ವಹಣೆ ಪ್ರಾಧಿಕಾರ’ ರಚಿಸಲು ಸರ್ಕಾರ ಮುಂದಾಗಿದೆ.

ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಈಚೆಗೆ ನಡೆದ ಸಭೆಯಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ಕಸ ನಿರ್ವಹಣೆ ವಿಚಾರವನ್ನು ಪ್ರಸ್ತಾಪಿಸಿದ್ದರು. ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಕೇಳಿಬರುತ್ತಿವೆ. ಆದರೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಳ್ಳುತ್ತಿಲ್ಲ. ಸ್ವಚ್ಛತಾ ಕೆಲಸ ಸರಿಯಾಗಿ ನಡೆಯುತ್ತಿಲ್ಲ. ಕಸ ಸಂಗ್ರಹ, ಸಾಗಣೆ ಹಾಗೂ ನಿರ್ವಹಣೆಯಲ್ಲೂ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿವೆ. ಇದಕ್ಕೆ ಒಂದು ವ್ಯವಸ್ಥೆ ಮಾಡಬೇಕು ಎಂದು ಸಲಹೆ ಮಾಡಿದ್ದರು.

ಈ ಸಂಬಂಧ ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ಚರ್ಚಿಸಿದ ನಂತರ ಕಸ ನಿರ್ವಹಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡುವಂತೆ ಸಲಹೆ ಮಾಡಿದ್ದರು. ಆ ನಂತರ ಪ್ರಾಧಿಕಾರ ರಚನೆಗೆ ಕ್ರಮಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು.

‘ಮುಖ್ಯಮಂತ್ರಿ ಸೂಚನೆಯ ನಂತರ ನಗರಾಭಿವೃದ್ಧಿ ಇಲಾಖೆಯು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದಿದೆ. ಕಸ ನಿರ್ವಹಣೆಯಲ್ಲಿ ಈಗಿನ ಪರಿಸ್ಥಿತಿ, ಉಂಟಾಗಿರುವ ಸಮಸ್ಯೆಗಳು ಹಾಗೂ ಪ್ರತ್ಯೇಕ ಪ್ರಾಧಿಕಾರ ರಚನೆಗೆ ಸಂಬಂಧಿಸಿದಂತೆ ಸಮಗ್ರವಾದ ವರದಿ ಸಿದ್ಧಪ
ಡಿಸಿ ಸಲ್ಲಿಸುವಂತೆ ಸೂಚಿಸಿದೆ. ಬಿಬಿಎಂಪಿಯಿಂದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)