ಪರಿಸರ ಜ್ಞಾನ ಮೂಡಿದರೆ ಹಸಿರು ಕ್ರಾಂತಿ

7

ಪರಿಸರ ಜ್ಞಾನ ಮೂಡಿದರೆ ಹಸಿರು ಕ್ರಾಂತಿ

Published:
Updated:
ಪರಿಸರ ದಿನಾಚರಣೆ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಕೋಲಾರದ ಬಾಲ್ಡ್‌ವಿನ್‌ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಕೆ.ವಿ.ಶಂಕರಪ್ಪ ಬಹುಮಾನ ವಿತರಿಸಿದರು.

ಕೋಲಾರ: ‘ಶಾಲಾ ಮಕ್ಕಳಲ್ಲಿ ಪರಿಸರ ಜ್ಞಾನ ಮೂಡಿದರೆ ಜಿಲ್ಲೆಯಲ್ಲಿ ಹಸಿರು ಕ್ರಾಂತಿ ಸೃಷ್ಟಿಯಾಗುತ್ತದೆ’ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತ ಕೆ.ವಿ.ಶಂಕರಪ್ಪ ಅಭಿಪ್ರಾಯಪಟ್ಟರು.

ಪರಿಸರ ದಿನಾಚರಣೆ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ನಗರದ ಬಾಲ್ಡ್‌ವಿನ್‌ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ‘ಯಾವುದೇ ವಿಚಾರದ ಬಗ್ಗೆ ಮಾಹಿತಿ ನೀಡಿದಾಗ ಮಕ್ಕಳು ಸೂಕ್ಷ್ಮವಾಗಿ ಗ್ರಹಿಸುತ್ತಾರೆ. ಆದ ಕಾರಣ ವಿದ್ಯಾರ್ಥಿ ದಿಸೆಯಲ್ಲೇ ಪರಿಸರ ಸಂರಕ್ಷಣೆಯ ಅರಿವು ಮೂಡಿಸಬೇಕು’ ಎಂದರು.

‘ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸಿದರೆ ಪೋಷಕರ ಮೇಲೆ ಒತ್ತಡ ಹೇರಿ ಕೆಲಸ ಮಾಡಿಸುತ್ತಾರೆ. ನೀರಿನ ಮಿತ ಬಳಕೆ, ಮರ ಗಿಡ ಬೆಳೆಸುವುದು ಹಾಗೂ ಅರಣ್ಯ ಸಂರಕ್ಷಣೆ ಬಗ್ಗೆ ಮಕ್ಕಳನ್ನು ಜಾಗೃತಗೊಳಿಸಬೇಕು. ಶಿಕ್ಷಕರು ಈ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ಪರಿಸರ ದಿನಾಚರಣೆಯು ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಪರಿಸರ ರಕ್ಷಣೆಯ ಕೆಲಸ ವರ್ಷದ 365 ದಿನವೂ ಜನಾಂದೋಲನದಂತೆ ನಡೆಯಬೇಕು. ಮನುಕುಲದ ಉಳಿವಿಗಾಗಿ ಪರಿಸರ ರಕ್ಷಣೆ ಮಾಡಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ. ಶಾಲಾ ಕಾಲೇಜು ಮೈದಾನ, ಮನೆಯ ಸುತ್ತಮುತ್ತಲಿನ ಖಾಲಿ ಜಾಗದಲ್ಲಿ ಸಸಿ ನೆಟ್ಟು ಬೆಳೆಸಬೇಕು’ ಎಂದು ಕಿವಿಮಾತು ಹೇಳಿದರು.

‘ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳಿಗೆ ಶಿಸ್ತು, ಸಹನೆ ಬೆಳೆಸುವುದರ ಜತೆಗೆ ಪರಿಸರ ಪ್ರಜ್ಞೆ ಮೂಡಿಸುತ್ತೇವೆ. ಶಾಲೆಗಳಲ್ಲಿ ಸಂಸ್ಥೆಯ ಶಾಖೆ ಆರಂಭಿಸಿದರೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗುತ್ತದೆ’ ಎಂದು ಹೇಳಿದರು.

ಸಂಸ್ಥೆಯ ಸ್ಥಳೀಯ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಸಂಘಟನಾ ಆಯುಕ್ತ ವಿ.ಬಾಬು, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ಜಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ನಾರಾಯಣಪ್ಪ, ಕವಿ ರಾಮಚಂದ್ರ, ಶಾಲೆಯ ಪ್ರಾಂಶುಪಾಲೆ ಅನು ಪಾಲ್ಗೊಂಡಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !