ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ವತ್ ಮೇಲೆ ಹಲ್ಲೆ ಪ್ರಕರಣ: ಅಧೀನ ನ್ಯಾಯಾಲಯದ ವಿಚಾರಣೆಗೆ ಮಧ್ಯಂತರ ತಡೆ

ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಲ್ಲೆ ನಡೆಸಿದ ಆರೋಪಿ
Last Updated 16 ಡಿಸೆಂಬರ್ 2018, 16:10 IST
ಅಕ್ಷರ ಗಾತ್ರ

ಬೆಂಗಳೂರು:ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ಎಂಟು ವಾರಗಳ ಕಾಲ ಮಧ್ಯಂತರ ತಡೆ ನೀಡಿದೆ.

ಸಿಸಿಬಿ ಪೊಲೀಸರ ಕ್ರಮ ಪ್ರಶ್ನಿಸಿ ಮೊಹಮದ್ ನಲಪಾಡ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದೆ.ಪ್ರತಿವಾದಿಗಳಾದ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾಧಿಕಾರಿ ಹಾಗೂ ಸಿಸಿಬಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲು ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಅಡಿಯಲ್ಲಿ ಅವಕಾಶವಿಲ್ಲ. ಏನಿದ್ದರೂ ದೋಷಾರೋಪಣೆ ಪಟ್ಟಿಯನ್ನು ಪೊಲೀಸ್ ಠಾಣಾಧಿಕಾರಿ ಮಾತ್ರವೇ ನ್ಯಾಯಾಲಯಕ್ಕೆ ಸಲ್ಲಿಸಲು ಅವಕಾಶವಿದೆ. ಆದ್ದರಿಂದ ಸಿಟಿ ಸಿವಿಲ್ ಕೋರ್ಟ್ ನ 67ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿಜಯನ್ ಅವರು ನಡೆಸುತ್ತಿರುವ ವಿಚಾರಣೆಗೆ ಮಧ್ಯಂತರ ತಡೆ ನೀಡಬೇಕು’ಎಂಬ ಅರ್ಜಿದಾರ ಮೊಹಮದ್ ನಲಪಾಡ್ ಪರ ವಕೀಲ ಪಿ.ಉಸ್ಮಾನ್ ಅವರ ಮನವಿಯನ್ನು ನ್ಯಾಯಪೀಠ ಮಾನ್ಯ ಮಾಡಿದೆ.

ವಿಚಾರಣೆಗೆ ಎಂಟು ವಾರಗಳ ಕಾಲ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಅಂತೆಯೇ ವಿಚಾರಣೆಯನ್ನು ಎಂಟು ವಾರಗಳ ಕಾಲ ಮುಂದೂಡಿದೆ.

ಪ್ರಾಸಿಕ್ಯೂಟರ್ ಆಕ್ಷೇಪ

ಹೈಕೋರ್ಟ್ಗೆ ಈ ರೀತಿಯ ಕ್ರಿಮಿನಲ್ ಅರ್ಜಿ ಸಲ್ಲಿಸುವಾಗ ಈ ಪ್ರಕರಣದಲ್ಲಿ ವಿಶೇಷ ಪ್ರಾಸಿಕ್ಯೂಟರ್ ಇದ್ದಾರೆ ಎಂಬ ಅಂಶವನ್ನು ಅರ್ಜಿದಾರರ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದಿಲ್ಲ’ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಎಂ.ಎಸ್.ಶ್ಯಾಮಸುಂದರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಶ್ಯಾಮಸುಂದರ್, ‘ಅರ್ಜಿದಾರರ ಪರ ವಕೀಲರು ಈ ವಿಷಯವನ್ನು ನ್ಯಾಯಪೀಠದ ಗಮನಕ್ಕೆ ತಾರದೆ ಮುಚ್ಚಿಟ್ಟಿದ್ದಾರೆ’ಎಂದರು.

ಪ್ರಕರಣವೇನು?

2018ರ ಫೆಬ್ರುವರಿ 17ರಂದು ರಾತ್ರಿ ಮೊಹಮದ್ ನಲಪಾಡ್ ಮತ್ತು ಅವರ ಸಹಚರರು ನಗರದ ಫರ್ಜಿ ಕಫೆಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ನಲಪಾಡ್‌ 116 ದಿನಗಳನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದಿದ್ದರು. ಇವರಿಗೆ ಹೈಕೋರ್ಟ್‌ 2018ರ ಜೂನ್ 14ರಂದು ಷರತ್ತು ಬದ್ಧ ಜಾಮೀನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT