ಮಂಗಳವಾರ, ಆಗಸ್ಟ್ 11, 2020
23 °C
ಅಕ್ರಮ ಗಣಿಗಾರಿಕೆ ಆರೋಪದಿಂದ ಕೈಬಿಟ್ಟ ಪ್ರಕರಣ

ಅಕ್ರಮ ಗಣಿಗಾರಿಕೆ: ರೆಡ್ಡಿ ಪತ್ನಿ ಲಕ್ಷ್ಮೀಗೆ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪದಿಂದ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಅವರನ್ನು ಕೈಬಿಟ್ಟ ನಗರದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಆಶಾ ದೀಪ್ ಸಂಸ್ಥೆ ಹೈಕೋರ್ಟ್‌ ಮೆಟ್ಟಿಲೇರಿದೆ.

ಈ ಕುರಿತಂತೆ ಸಂಸ್ಥೆಯ ಕಾರ್ಯಕಾರಿ ನಿರ್ದೇಶಕ ಎಸ್.ಆರ್. ಹಿರೇಮಠ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಸಿಬಿಐ ಮತ್ತು ಜಿ. ಲಕ್ಷ್ಮೀ ಅರುಣಾಅವರಿಗೆ ನೋಟಿಸ್ ಜಾರಿಗೆ ನ್ಯಾಯಪೀಠ ಆದೇಶಿಸಿದೆ.

ಪ್ರಕರಣವೇನು?: ಮೆಸರ್ಸ್‌ ಅಸೋಸಿಯೇಟೇಡ್ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ದೋಷಾರೋಪ ಪಟ್ಟಿಯಲ್ಲಿ ಜನಾರ್ದನ ರೆಡ್ಡಿ ಮೊದಲ ಆರೋಪಿ ಮತ್ತು ಅವರ ಪತ್ನಿ ಲಕ್ಷ್ಮೀ ಅರುಣಾ ಎರಡನೇ ಆರೋಪಿಯಾಗಿದ್ದರು.

ಈ ಕುರಿತಂತೆ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಲಕ್ಷ್ಮೀ ಅರುಣಾ, ‘ನಾನು ಕಂಪನಿಯ ಮಾಲೀಕತ್ವ ಹೊಂದಿಲ್ಲ. ಪಾಲುದಾರಳು ಮಾತ್ರ. ಹೀಗಾಗಿ ಕಂಪನಿ ನಡೆಸಿದ ವ್ಯವಹಾರಗಳಿಗೆ ನಾನು ಹೊಣೆಯಲ್ಲ. ಆದ್ದರಿಂದ ನನ್ನ ವಿರುದ್ಧದ ಆರೋಪಗಳನ್ನು ಕೈಬಿಡಬೇಕು’ ಎಂದು ಕೋರಿದ್ದರು.

ಇದನ್ನು ಮಾನ್ಯ ಮಾಡಿದ್ದ ನ್ಯಾಯಾಲಯ, ಲಕ್ಷ್ಮೀ ಅರುಣಾ ವಿರುದ್ಧದ ಆರೋಪಗಳನ್ನು ಕೈಬಿಟ್ಟು 2015ರ ಆಗಸ್ಟ್ 8ರಂದು ಆದೇಶಿಸಿತ್ತು. ಸಮಾಜ ಪರಿವರ್ತನಾ ಸಮುದಾಯದ ಪರ ವಕೀಲ ಮೋನೇಶ್‌ ಕುಮಾರ್‌ ಹಾಜರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು