ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಪಾಲ ಆಯ್ಕೆ: ಮಾರ್ಚ್‌ 1ಕ್ಕೆ ಸಭೆ

Last Updated 23 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ : ಭ್ರಷ್ಟಾಚಾರ ತಡೆ ಸಂಸ್ಥೆ ಲೋಕಪಾಲ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಆಯ್ಕೆ ಸಮಿತಿಯ ಸಭೆ ಮಾರ್ಚ್‌ 1ರಂದು ನಡೆಯಲಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪ್ರಧಾನಿ, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಲೋಕಸಭೆಯ ಸ್ಪೀಕರ್‌ ಮತ್ತು ಲೋಕಸಭೆಯ ಅತ್ಯಂತ ದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿಯು ಸಭೆ ಸೇರಲಿದೆ ಎಂದು ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಅವರು ನ್ಯಾಯಮೂರ್ತಿಗಳಾದ ರಂಜನ್‌ ಗೊಗೊಯ್‌ ಮತ್ತು ಆರ್‌. ಭಾನುಮತಿ ಅವರ ಪೀಠಕ್ಕೆ ತಿಳಿಸಿದ್ದಾರೆ.

ಲೋಕಪಾಲರನ್ನು ನೇಮಿಸುವಂತೆ ಕಳೆದ ಏಪ್ರಿಲ್‌ 27ರಂದು ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಹಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಮನ್‌ ಕಾಸ್‌ ಎಂಬ ಎನ್‌ಜಿಒ ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸಿತು.

ಅರ್ಜಿಯ ವಿಚಾರಣೆಯನ್ನು ಮಾರ್ಚ್‌ 6ಕ್ಕೆ ಮುಂದೂಡಲಾಯಿತು. ಲೋಕಪಾಲ ನೇಮಕಕ್ಕೆ ಸಂಬಂಧಿಸಿ ಕೈಗೊಂಡಿರುವ ಕ್ರಮಗಳು ಮತ್ತು ಪ್ರಸ್ತಾವಿತ ಕ್ರಮಗಳ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಕಾರ್ಯದರ್ಶಿಗೆ ಪೀಠ ಸೂಚಿಸಿದೆ.

ಆಯ್ಕೆ ಸಮಿತಿಯ ಸದಸ್ಯರಾಗಿದ್ದ ಹಿರಿಯ ವಕೀಲ ಪಿ.ಪಿ. ರಾವ್‌ ನಿಧನದಿಂದಾಗಿ ಲೋಕಪಾಲ ನೇಮಕ ಪ್ರಕ್ರಿಯೆ ವಿಳಂಬವಾಯಿತು ಎಂದು ವೇಣುಗೋಪಾಲ್‌ ತಿಳಿಸಿದರು.

ಲೋಕಾಯುಕ್ತ ಕಾಯ್ದೆಯನ್ನು ಜಾರಿಗೆ ತಾರದಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ ಎಂದು ಕಳೆದ ವರ್ಷ ನೀಡಿದ ಆದೇಶದಲ್ಲಿ ಸುಪ್ರೀಂ ಕೋರ್ಟ್‌ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT