ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ನಳಿನ್‌ ಕುಮಾರ್ ವಿರುದ್ಧದ ಪ್ರಕರಣ ರದ್ದು

Last Updated 20 ನವೆಂಬರ್ 2018, 20:37 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣ ಖಂಡಿಸಿ ನಡೆಸಲಾದ ಪ್ರತಿಭಟನೆ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿದ ಪ್ರಕರಣದ ಆರೋಪಿಗಳಾದ ಬಿಜೆಪಿ ಸಂಸದ ನಳಿನ್‌ ಕುಮಾರ್ ಕಟೀಲ್‌, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಒಟ್ಟು 13 ಜನರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ.

ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ನಳಿನ್ ಕುಮಾರ್ ಕಟೀಲ್ ಸೇರಿದಂತೆ 13 ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಜಿ.ನಿಜಗಣ್ಣವರ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಮಾನ್ಯ ಮಾಡಿದೆ. ಬಂಟ್ವಾಳ ಟೌನ್ ಪೊಲೀಸ್‌ ಠಾಣೆ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸಿದೆ.

ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ‘ನಿಷೇಧಾಜ್ಞೆ ಉಲ್ಲಂಘಿಸಿದರೆ ಜಿಲ್ಲಾಧಿಕಾರಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಬೇಕು. ಆದರೆ, ಬಂಟ್ವಾಳ ಟೌನ್ ಠಾಣಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಹೀಗಾಗಿ, ಪ್ರಕರಣ ದಾಖಲಿಸುವಲ್ಲಿ ಪೊಲೀಸರು ಕಾನೂನು ಲೋಪ ಮಾಡಿದ್ದಾರೆ’ ಎಂದರು.

‘ಪ್ರತಿಭಟನೆ ನಡೆಸುವುದು ಸಂವಿಧಾನದತ್ತವಾದ ಮೂಲಭೂತ ಹಕ್ಕು. ಅರ್ಜಿದಾರರ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿದರು.

ಪ್ರಕರಣವೇನು?: ಶರತ್‌ ಮಡಿವಾಳ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದರು. ಈ ಹತ್ಯೆ ಖಂಡಿಸಿ ಮತ್ತು ಹಂತಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು.ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಶಾಸಕ ವಿ.ಸಂಜೀವ ಕುಮಾರ್, ರಾಜೇಶ್ ನಾಯ್ಕ್, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ಮತ್ತು ಇತರರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT