ಮಡಿಕೇರಿ: ‘ನೆಹರೂ ಉದ್ಯಾನ ನಿರ್ಮಾಣ ಕಾಮಗಾರಿ ಸದ್ಯದಲ್ಲಿ ಪೂರ್ಣಗೊಳ್ಳಲಿದ್ದು ಅದರ ನಿರ್ವಹಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಾಸೀಟು ಅಭಿವೃದ್ಧಿ ಸಂಬಂಧ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ನೆಹರೂ ಮಂಟಪವನ್ನು ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಸಭೆಯಲ್ಲಿ ರಾಜಾಸೀಟು ಅಭಿವೃದ್ಧಿ ಸಮಿತಿಯೇ ನೆಹರು ಉದ್ಯಾನ ನಿರ್ವಹಣೆ ಮಾಡಲು ತೀರ್ಮಾನಿಸಲಾಯಿತು.
ನೆಹರೂ ಉದ್ಯಾನಕ್ಕೆ ಬೆಳಿಗ್ಗೆ 6ರಿಂದ ಸಂಜೆ 7ರ ತನಕ ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಉದ್ಯಾನದಲ್ಲಿ ಕುಡಿಯುವ ನೀರು ಒದಗಿಸುವುದು, ರಕ್ಷಕರನ್ನು ನಿಯೋಜಿಸುವುದು ಮತ್ತಿತರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಿ.ಸಿ ಸೂಚಿಸಿದರು.
ರಾಜಾಸೀಟು ಉದ್ಯಾನವನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದಕ್ಕೆ ಜಿಲ್ಲಾಧಿಕಾರಿ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸಮವಸ್ತ್ರದಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿಲ್ಲ. ರಕ್ಷಕರನ್ನು ನಿಯೋಜಿಸಿಲ್ಲ ಎಂದು ತೋಟಗಾರಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರಾಜಾಸೀಟಿನಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನಿಯೋಜನೆ ಸಂಬಂಧ ಟೆಂಡರ್ ಆಹ್ವಾನಿಸಿ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ದೇವಕಿ, ರಾಜಾಸೀಟು ಹಾಗೂ ಉದ್ಯಾನ ಆಗಬೇಕಿರುವ ಕಾರ್ಯಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್, ಪೌರಾಯುಕ್ತ ಎಂ.ಎಲ್.ರಮೇಶ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕದ ತಮ್ಮಯ್ಯ, ತೋಟಗಾರಿಕೆ ಇಲಾಖೆ ತಾಂತ್ರಿಕ ಸಹಾಯಕ ಗುರುರಾಜ್, ಪ್ರವಾಸೋದ್ಯಮ ಇಲಾಖೆ ಪ್ರವಾಸಿ ಅಧಿಕಾರಿ ರಾಘವೇಂದ್ರ, ರಾಜಾಸೀಟು ಉದ್ಯಾನ ಸಿಬ್ಬಂದಿಗಳು ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.