ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮವಾಗಿ ನೆಲೆಸಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಪಾಕ್ ದಂಪತಿ ವಾಘಾ ಗಡಿಯತ್ತ

ರೈಲಿನಲ್ಲಿ ಹೊರಟ ದಂಪತಿಗೆ ಪೊಲೀಸರ ಸಾಥ್‌
Last Updated 10 ಮೇ 2019, 19:44 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿ ಜೈಲುಶಿಕ್ಷೆಗೆ ಗುರಿಯಾಗಿದ್ದ ಪಾಕ್‌ನ ದಂಪತಿಯನ್ನು, ಹೈಕೋರ್ಟ್‌ ನಿರ್ದೇಶನದಂತೆ ವಾಘಾ ಗಡಿಗೆ ಬಿಟ್ಟು ಬರಲು ಕುಮಾರಸ್ವಾಮಿ ಲೇಔಟ್‌ ಪೊಲೀಸರು ಶುಕ್ರವಾರ ರಾತ್ರಿ ರೈಲಿನಲ್ಲಿ ಹೊರಟರು.

ದಂಪತಿಯನ್ನು ಕರೆದುಕೊಂಡು ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬಂದಿದ್ದ ಇನ್‌ಸ್ಪೆಕ್ಟರ್‌ ಹಜರೇಶ್ ಕಿಲ್ಲೇದಾರ್‌ ನೇತೃತ್ವದ ತಂಡ, ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿತು.

‘ದೆಹಲಿಯಿಂದ ವಾಘಾ ಗಡಿಗೆ ತೆರಳಲಿರುವ ತಂಡ, ಪಾಕಿಸ್ತಾನದ ಅಧಿಕಾರಿಗಳಿಗೆ ದಂಪತಿಯನ್ನು ಹಸ್ತಾಂತರಿಸಲಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಕರಣದ ವಿವರ: ಕರಾಚಿ ಜಿಲ್ಲೆಯ ಚಕ್ರಘೋತ್‌ನ ಕಾಸಿಫ್‌ ಶಂಸುದ್ದೀನ್‌ ಅಲಿಯಾಸ್‌ ಕಾಸಿಫ್‌ (30) ಮತ್ತು ಕೋರಂಗಿಯ ಕಿರಣ್‌ ಗುಲಾಂ ಅಲಿ (30) ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಅಕ್ರಮವಾಗಿ ನೆಲೆಸಿದ್ದ ಇವರನ್ನು ಕುಮಾರಸ್ವಾಮಿ ಲೇಔಟ್ ಮತ್ತು ಬನಶಂಕರಿ ಠಾಣೆ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದರು. ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ ಹಾಗೂ ವಿದೇಶಿಯರ ಕಾಯ್ದೆ ಅಡಿಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದರು.

ವಿಚಾರಣೆ ನಡೆಸಿದ್ದ 44ನೇ ಎಸಿಎಂಎಂ ನ್ಯಾಯಾಲಯ, ಎರಡೂ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ 21 ಮತ್ತು 12 ತಿಂಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು. ಅಂತೆಯೇ 60 ಸಾವಿರಕ್ಕೂ ಹೆಚ್ಚು ಮೊತ್ತದ ದಂಡ ವಿಧಿಸಿತ್ತು. 21 ಮತ್ತು 12 ತಿಂಗಳ ಜೈಲು ಶಿಕ್ಷೆಯನ್ನು ಪ್ರ‌ತ್ಯೇಕವಾಗಿ ಅನುಭವಿಸಬೇಕು ಎಂದು ಆದೇಶಿಸಿತ್ತು. ಅರ್ಜಿದಾರ ದಂಪತಿ ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT