ಮಂಗಳವಾರ, ಸೆಪ್ಟೆಂಬರ್ 22, 2020
26 °C
ಎಚ್.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ

ಸರ್ಕಾರ ವಿಸರ್ಜನೆಗೆ ಬಿಜೆಪಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೂಡಲೇ ರಾಜೀನಾಮೆ ನೀಡಿ, ರಾಜ್ಯದ ಸಮ್ಮಿಶ್ರ ಸರ್ಕಾರ ವಿಸರ್ಜಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್, ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಘೋಷಣೆ ಮಾಡಿದ ಮುಖ್ಯಮಂತ್ರಿ ಈವರೆಗೆ ಸಾಲ ಮನ್ನಾ ಮಾಡಲಿಲ್ಲ. ಇವತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ’ ಎಂದು ಆರೋಪಿಸಿದರು.

‘ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರು ಬಿಜೆಪಿಯ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಈ ಸರ್ಕಾರ ಶಾಸಕರ ವಿಶ್ವಾಸ ಗಳಿಸುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮೇಲೆ ಅಪನಂಬಿಕೆ ಹೆಚ್ಚಿದೆ. ಹೀಗಾಗಿ ಅವರು ಮಾನ, ಮರ್ಯಾದೆ ಇದ್ದರೆ ಕೂಡಲೇ ರಾಜಿನಾಮೆ ಕೊಡಬೇಕು’ ಎಂದು ಆಗ್ರಹಿಸಿದರು.

‘ಕಳೆದ ನಾಲ್ಕು ತಿಂಗಳಿಂದ ಶಾಲಾ ಶಿಕ್ಷರಿಗೆ ವೇತನ ನೀಡಿಲ್ಲ. ಪರಿಶಿಷ್ಟ ಸಮುದಾಯಗಳು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿಲ್ಲ. ಏನೂ ಕೇಳಿದರೂ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎನ್ನುತ್ತಾರೆ. ಇಂತಹ ಲಜ್ಜೆಗೆಟ್ಟ ಸರ್ಕಾರ ಅಧಿಕಾರದಲ್ಲಿ ಇರುವುದು ಶೋಭೆಯಲ್ಲ. ಕೂಡಲೇ ಸರ್ಕಾರ ವಿಸರ್ಜಿಸಬೇಕು’ ಎಂದು ಹೇಳಿದರು.

‘ಬಿಜೆಪಿ ನಾಯಕರು ಆಪರೇಷನ್ ಕಮಲದಲ್ಲಿ ತೊಡಗಿಲ್ಲ. ಕೆಲ ಶಾಸಕರು ವೈಯಕ್ತಿಕ ಭಿನ್ನಾಭಿಪ್ರಾಯದಿಂದ ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರು ತಮ್ಮ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಆಪರೇಷನ್ ಕಮಲದ ಗೂಬೆ ಕೂರಿಸುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಆಂಜಿನಪ್ಪ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮೀ ನಾರಾಯಣ ಗುಪ್ತಾ, ಮಂಡಲ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್‌, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಾಲು, ನಗರ ಯುವ ಮೋರ್ಚಾ ಘಟಕದ ಅಧ್ಯಕ್ಷ ಮಧುಚಂದ್ರ, ಜಿಲ್ಲಾ ವಕ್ತಾರ ಲಕ್ಷ್ಮಿಪತಿ, ಮುಖಂಡರಾದ ಪ್ರೇಮಲೀಲಾ ವೆಂಕಟೇಶ್, ಸುಬ್ಬರಾಜು, ಶ್ರೀನಿವಾಸ ರೆಡ್ಡಿ, ರಾಮಣ್ಣ, ಕೃಷ್ಣಮೂರ್ತಿ, ಮಲ್ಲಿಕಾ, ಪುಷ್ಪಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು