ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ತಿ ಮೀಸಲಾತಿ: ಸಿಎಸ್‌ ನೇತೃತ್ವದಲ್ಲಿ 27ರಂದು ಸಭೆ

Last Updated 24 ಮೇ 2019, 19:33 IST
ಅಕ್ಷರ ಗಾತ್ರ

ಬೆಂಗಳೂರು: ಬಡ್ತಿ ಮೀಸಲಾತಿಯ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್‌ ನೇತೃತ್ವದಲ್ಲಿ ಇದೇ 27ರಂದು ಬೆಳಿಗ್ಗೆ 10ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಅಧಿಕಾರಿಗಳ ಸಭೆ ನಡೆಯಲಿದೆ.

ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ಹಿಂಬಡ್ತಿ ನೀಡಿರುವ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿರುವ ಬಗ್ಗೆ, ಜ್ಯೇಷ್ಠತಾ ಪಟ್ಟಿಗಳನ್ನು ಪರಾಮರ್ಶಿಸಲು ಆಗಿರುವ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಸಭೆಯಲ್ಲಿ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಬಿ.ಕೆ.ಪವಿತ್ರ ‍ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಧಿಕಾರಿಗಳಿಗೆ ಹಿಂಬಡ್ತಿ ನೀಡುವಂತೆ ಸುಪ್ರೀಂ ಕೋರ್ಟ್‌ 2017ರಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಜ್ಯೇಷ್ಠತಾ ಪಟ್ಟಿಯನ್ನು ತಯಾರಿಸಲು ನಿವೃತ್ತ ಅಧಿಕಾರಿಗಳ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಪಟ್ಟಿ ತಯಾರಿಸಲು ಒಂದು ವರ್ಷ ತೆಗೆದುಕೊಂಡಿತ್ತು. ಈ ಸಲವೂ ಅದೇ ರೀತಿ ವಿಳಂಬ ಮಾಡಬಾರದು. ನಿವೃತ್ತ ಅಧಿಕಾರಿಗಳಿಗೆ ಮಣೆ ಹಾಕಬಾರದು ಎಂದು ನೌಕರರು ಒತ್ತಾಯಿಸಿದ್ದಾರೆ.

‘ಲೋಕೋಪಯೋಗಿ ಇಲಾಖೆಯಲ್ಲಿ ಜ್ಯೇಷ್ಠತಾ ಪಟ್ಟಿ ತಯಾರಿಸಲು ಹೈಕೋರ್ಟ್‌ನ ನ್ಯಾಯಮೂರ್ತಿ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಬೇಕು’ ಎಂದು ರಾಜ್ಯ ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮನ್ವಯ ಸಮಿತಿ ಒತ್ತಾಯಿಸಿದೆ.

ಈ ಸಮಿತಿಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ತಲಾ ಒಬ್ಬರು, ಸಮನ್ವಯ ಸಮಿತಿ ಹಾಗೂ ಸಾಮಾನ್ಯ ನೌಕರರ ವರ್ಗದ ತಲಾ ಒಬ್ಬರು ಇರಬೇಕು. ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT