ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಬೇಡ: ಅಭ್ಯರ್ಥಿಗಳ ಆಗ್ರಹ

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ
Last Updated 2 ಏಪ್ರಿಲ್ 2019, 1:32 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿರುವ ಪದವೀಧರ ಶಿಕ್ಷಕರಿಗೆ ಹೊಸದಾಗಿ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಸರ್ಕಾರದ ಕ್ರಮದ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಈ ಸಂಬಂಧ ಸೋಮವಾರ ಆದೇಶ ಹೊರಡಿಸಿದ್ದು, ರಾಜ್ಯದ ವಿವಿಧೆಡೆಯಿಂದ ‘ಪ್ರಜಾವಾಣಿ’ಗೆ ಕರೆ ಮಾಡಿ ಆತಂಕ ವ್ಯಕ್ತಪಡಿಸಿದ್ದಾರೆ.

ಸುಮಾರು 10 ಸಾವಿರಕ್ಕೂ ಹೆಚ್ಚು ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಆದರೆ, ಹೊಸ ಆದೇಶವು ಮೊದಲ ಬಾರಿಗೆ ಅರ್ಜಿ ಸಲ್ಲಿಸುತ್ತಿರುವ ಅಭ್ಯರ್ಥಿಗಳಲ್ಲಿ ಆತಂಕ ಮೂಡಿಸಿದೆ.

‘ಈಗಾಗಲೇ ಪದವೀಧರ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವವರು ಹೊಸದಾಗಿ ಅರ್ಜಿ ಸಲ್ಲಿಸಲು ನಿರಾಕ್ಷೇಪಣಾ ಪತ್ರ ಕೋರಿ ಮನವಿ ಸಲ್ಲಿಸಿದರೆ ವಿಳಂಬ ಮಾಡದೇ ಅರ್ಜಿ ಸಲ್ಲಿಸಿದವರಿಗೆ ತಕ್ಷಣವೇ ನಿರಾಕ್ಷೇಪಣಾ ಪತ್ರವನ್ನು ನೀಡಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಇದೇ ಮೊದಲ ಬಾರಿಗೆ ಇಂತಹದ್ದೊಂದು ಅವಕಾಶ ನೀಡಲಾಗಿದೆ. ಈಗಾಗಲೇ ಕಲಬುರ್ಗಿ, ಬೀದರ್, ರಾಯಚೂರು ಮುಂತಾದ ಕಡೆಗಳಲ್ಲಿರುವ ಪದವೀಧರ ಪ್ರಾಥಮಿಕ ಶಿಕ್ಷಕರು ತಮಗೆ ಬೇಕಾದ ಜಿಲ್ಲೆಗಳಿಗೆ ಹೋಗಬೇಕು ಎಂಬ ಕಾರಣಕ್ಕೆ ದಾವಣಗೆರೆ, ಮೈಸೂರು, ಬೆಂಗಳೂರು ಇತ್ಯಾದಿ ಕಡೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಇದರಿಂದ ಹೊಸ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂದು ಅಭ್ಯರ್ಥಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ನೇಮಕಗೊಂಡು ಕೆಲಸ ಮಾಡುತ್ತಿರುವವರಿಗೆ ಸಮಾನ ಹುದ್ದೆಗೆ ಇನ್ನೊಮ್ಮೆ ಪರೀಕ್ಷೆ ಬರೆದು ಆಯ್ಕೆ ಆಗಲು ಅವಕಾಶ ಇಲ್ಲ. ಉನ್ನತ ಹುದ್ದೆಗಳಿಗೆ ಪರೀಕ್ಷೆ ಬರೆಯುವುದಕ್ಕೆ ಅವಕಾಶ ಇದೆ. ಹಿಂದೆ ಸಮಾನ ಹುದ್ದೆಗಳಿಗೆ ಪರೀಕ್ಷೆ ಬರೆಯುವುದಕ್ಕೆ ಶಿಕ್ಷಣ ಇಲಾಖೆಯೇ ಅವಕಾಶ ನೀಡುತ್ತಿರಲಿಲ್ಲ. ಈ ಬಾರಿ ವ್ಯತಿರಿಕ್ತವಾಗಿ ಆದೇಶ ಹೊರಡಿಸಿದೆ ಎಂದು ಅವರು ಹೇಳಿದರು.

ಹಿಂದಿನ ಸಾಲಿನಲ್ಲಿ ಆಯ್ಕೆಯಾದ ಅಭ್ಯರ್ಥಿಯೊಬ್ಬರು ಮೂರು ತಿಂಗಳ ಹಿಂದಷ್ಟೇ ಶಿಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ತಮ್ಮ ಊರಿಗೆ ಸಮೀಪದಲ್ಲಿ ಕೆಲಸ ಗಿಟ್ಟಿಸಲು ಅವರು ಈ ಬಾರಿ ಮತ್ತೆ ಅರ್ಜಿ ಹಾಕಿದ್ದಾರೆ. ಸರ್ಕಾರ ಹೊಸ ಪರಂಪರೆಗೆ ನಾಂದಿ ಹಾಡಿರುವುದರಿಂದ ನಿರುದ್ಯೋಗಿಗಳಿಗೆ ಅನ್ಯಾಯವಾಗುತ್ತದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT