ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡಿಗರಿಗೆ ಉದ್ಯೋಗ ಕಾರ್ಯರೂಪಕ್ಕೆ ಯತ್ನ

ಮುಖ್ಯಮಂತ್ರಿ ಕುಮಾರಸ್ವಾಮಿ ಭರವಸೆ
Last Updated 5 ಮೇ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂಬ ಹಕ್ಕೊತ್ತಾಯವನ್ನು ಗಮನಿಸಿದ್ದೇನೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂಬ ಬಗ್ಗೆ ಸಲಹೆ ಪಡೆಯಲಾಗುವುದು’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

‘ಕನ್ನಡಿಗರಿಗೆ ಕರ್ನಾಟಕದ ಉದ್ಯೋಗ’ ಎಂಬ ಟ್ವಿಟರ್‌ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿ ಭಾನುವಾರ ಅವರು ಟ್ವೀಟ್‌ ಮಾಡಿದ್ದಾರೆ.

ಉದ್ಯೋಗಗಳಲ್ಲಿ ಸ್ಥಳೀಯರಿಗೆ ಆ‌ದ್ಯತೆ ನೀಡಬೇಕು ಎಂದು ಆಗ್ರಹಿಸಿಕನ್ನಡಪರ ಸಂಘಟನೆಗಳು ಕರೆ ನೀಡಿರುವ ಈ ಟ್ವಿಟರ್‌ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಇತ್ತೀಚೆಗೆ ತಮಿಳುನಾಡಿನಲ್ಲಿ ‘ತಮಿಳುನಾಡು ಜಾಬ್ಸ್‌ ಫಾರ್‌ ತಮಿಳ್ಸ್‌’ ಎಂಬ ಅಭಿಯಾನ ಎಲ್ಲೆಡೆ ಮನೆಮಾತಾಗಿತ್ತು. ಇಂತಹದ್ದೇ ಅಭಿಯಾನ ರಾಜ್ಯದಲ್ಲಿ ಆರಂಭವಾಗಿದ್ದು, 37 ಸಾವಿರ ಮಂದಿ ಪ್ರತಿಕ್ರಿಯಿಸಿದ್ದಾರೆ.

‘ನಮ್ಮ ರಾಜ್ಯದಲ್ಲಿ ಸಂಸ್ಥೆಗಳನ್ನು ಸ್ಥಾಪಿಸುತ್ತಾರೆ. ಆದರೆ, ಸ್ಥಳೀಯರಿಗೆ ಉದ್ಯೋಗ ನೀಡುವುದಿಲ್ಲ. ಬೇರೆ ಬೇರೆ ರಾಜ್ಯದವರು ಉದ್ಯೋಗ ಪಡೆಯುತ್ತಾರೆ’ ಎನ್ನುತ್ತಾರೆ ರಾಜ ರಾಜೇಶ್ವರಿನಗರದ ನಿವಾಸಿ ಯಶವಂತ ಗೌಡ.

ಪ್ರವೇಶ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ನಡೆಸಬೇಕು ಎಂದು ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಟ್ವಿಟರ್‌ನಲ್ಲಿ ಕೆಲವರು ಬೇಡಿಕೆ ಇಟ್ಟಿದ್ದಾರೆ. ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಯಾಕೆ ಆದ್ಯತೆ ನೀಡುತ್ತಿಲ್ಲ. ಕರ್ನಾಟಕದಲ್ಲಾದರೂ ಸ್ಥಳೀಯರನ್ನು ನೇಮಕ ಮಾಡಿಕೊಳ್ಳಬೇಕು’ ಎಂದು ಕೆಲವರು ಒತ್ತಾಯಿಸಿದ್ದಾರೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದು, ‘ಖಾಸಗಿ ಕ್ಷೇತ್ರವೂ ಸೇರಿದಂತೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕೆಂಬುದು ನನ್ನ ನಿಲುವು. ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ನನ್ನ ಬೆಂಬಲ‌ ಇದೆ’ ಎಂದಿದ್ದಾರೆ.

ಬಿಜೆಪಿ ಶಾಸಕ ಸಿ.ಟಿ.ರವಿ, ‘ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಮೊದಲಿಗೆ ಕನ್ನಡಿಗರಿಗೆ ದಕ್ಕಬೇಕು. ಈ ನಿಟ್ಟಿನಲ್ಲಿ ನಡೆದಿರುವ ಸದುದ್ದೇಶ ಪೂರಿತ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಇದು ಯಾವುದೇ ಕಾರಣಕ್ಕೂ ಹೊರ ರಾಜ್ಯದವರ ಮತ್ತು ಅನ್ಯ ಭಾಷಿಗರ ವಿರುದ್ಧದ ಹೋರಾಟವಾಗಬಾರದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT