ಶನಿವಾರ, ಸೆಪ್ಟೆಂಬರ್ 18, 2021
27 °C

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಕವಿತಾ ಎಸ್‌.ಮನ್ನಿಕೇರಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ’ಜಿಲ್ಲೆಯಲ್ಲಿ ಬರ ಆವರಿಸಿರುವುದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕುರಿತು ಶುಕ್ರವಾರ ಏರ್ಪಡಿಸಿದ್ದ ತಾಲ್ಲೂಕುವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರಿನ ಪೂರೈಕೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜೆಸ್ಕಾಂ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯ.  ಖಾಸಗಿ ಕೊಳವೆಬಾವಿ ಮೂಲಕ ಅಥವಾ ಅಗತ್ಯವಿದ್ದಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಒದಗಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ಕೊಳವೆಬಾವಿಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಿ, ಅಗತ್ಯವಿದ್ದಲ್ಲಿ ಕೊಳವೆಬಾವಿಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಆಯಾ ಇಲಾಖೆಯ ಅಧಿಕಾರಿಗಳು ಖುದ್ದಾಗಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ಪರ್ಯಾಯ ವ್ಯವಸ್ಥೆ ಮಾಡಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಖಾಸಗಿ ಕೊಳವೆಬಾವಿ ವ್ಯವಸ್ಥೆ ಮಾಡಿದಲ್ಲಿ ಒಪ್ಪಂದ ಪತ್ರ ಪಡೆದಿಟ್ಟುಕೊಳ್ಳಬೇಕು. ಖಾಸಗಿ ಕೊಳವೆಬಾವಿ ಮಾಲೀಕರು ಉಚಿತವಾಗಿ ನೀರು ಕೊಟ್ಟರೂ ಒಪ್ಪಂದ ಪತ್ರ ಅಗತ್ಯ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ಪಿಡಿಒಗಳಿಂದ ಒಪ್ಪಂದ ಪತ್ರಗಳ ಪ್ರತಿ ಪಡೆದು ಜಿಲ್ಲಾ ಪಂಚಾಯಿತಿಗೆ ಒಂದು ಪ್ರತಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.

ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಬೇಸಿಗೆ ಮುಗಿಯುವವರೆಗೂ ತಾಲ್ಲೂಕು ಪಂಚಾಯಿತಿಗಳಲ್ಲಿ ಪ್ರತಿ ಸೋಮವಾರ ಸಭೆ ನಡೆಸಬೇಕು. ಜಾನುವಾರುಗಳಿಗಾಗಿ ನಿರ್ಮಿಸಿರುವ ಕುಡಿಯುವ ನೀರಿನ ತೊಟ್ಟಿಗಳ ಸ್ಥಿತಿಗತಿ ಕುರಿತು ಪಂಚಾಯಿತಿವಾರು ಮೇ 15ರೊಳಗೆ ನಿಖರ ಮಾಹಿತಿ ನೀಡಬೇಕು. ಅಗತ್ಯವಿದ್ದಲ್ಲಿ ನೀರಿನ ತೊಟ್ಟಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಮುಂದಿನ ವಾರದಿಂದ ಪ್ರತಿ ತಾಲ್ಲೂಕಿನ 15 ಗ್ರಾಮ ಪಂಚಾಯಿತಿಗಳಂತೆ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ, ಕುಡಿಯುವ ನೀರಿನ ಪರಿಸ್ಥಿತಿ, ವಿವಿಧ ಕಾಮಗಾರಿಗಳ ಪ್ರಗತಿ ಕುರಿತಂತೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

ಯಾದಗಿರಿ ಮಹತ್ವಾಕಾಂಕ್ಷೆ ಜಿಲ್ಲೆಯಾಗಿರುವುದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಅಂತರ್ಜಾಲ ಸಂಪರ್ಕ ಕಲ್ಪಿಸುವ ಕಾರ್ಯ ಒಂದು ವಾರದಲ್ಲಿ ಪೂರ್ಣಗೊಳಿಸಬೇಕು. ಈ ಬಗ್ಗೆ ಮಹತ್ವಾಕಾಂಕ್ಷೆ ಜಿಲ್ಲೆಯ ಕೇಂದ್ರ ಸರ್ಕಾರದ ನೋಡಲ್ ಅಧಿಕಾರಿ ಬಿ.ಆನಂದ್ ಅವರು ಈ ಬಗ್ಗೆ ವಿಶೇಷವಾಗಿ ಸೂಚನೆ ನೀಡಿದ್ದಾರೆ. ಅಂತರ್ಜಾಲ ಸಂಪರ್ಕ ಕಲ್ಪಿಸದ ಪಿಡಿಒಗಳು ಶಿಸ್ತುಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ.ಕುಲಕರ್ಣಿ ಮಾತನಾಡಿ, ಜೂನ್ 5ರಂದು ಪರಿಸರ ದಿನಾಚರಣೆ ಪ್ರಯುಕ್ತ ಅರಣ್ಯ ಇಲಾಖೆಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಂದು ಸಾವಿರ ಗಿಡಗಳನ್ನು ನೀಡಲಾಗುವುದು. ಇವುಗಳನ್ನು ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲೆ, ವಸತಿನಿಲಯಗಳು, ಅಂಗನವಾಡಿ ಸೇರಿವಿವಿಧೆಡೆ  ನೆಡಲು ಯೋಜನೆ ರೂಪಿಸಿಕೊಳ್ಳಬೇಕು. ಮುಖ್ಯವಾಗಿ ತಡೆಗೋಡೆ ಇರುವ ಆವರಣದಲ್ಲಿ ಗಿಡ ನೆಡಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಜು ಕುಮಾರ ಪತ್ತಾರ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀಕಾಂತ ಅಗ್ನಾಳ, ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ರಾಘವೇಂದ್ರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು