ಬುಧವಾರ, ಏಪ್ರಿಲ್ 21, 2021
25 °C
ನಿಯೋಗಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಭರವಸೆ

ಶಾಶ್ವತ ಕುಡಿಯುವ ನೀರು: ಶೀಘ್ರ ತಜ್ಞರ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸುವ ಸಂಬಂಧ ಶೀಘ್ರದಲ್ಲಿ ತಜ್ಞರ ತಂಡವನ್ನು ರಾಜ್ಯಕ್ಕೆ ಕಳುಹಿಸಿ ಸಮೀಕ್ಷೆ ನಡೆಸಲಾಗುವುದು’ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭರವಸೆ ನೀಡಿದ್ದಾರೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ, ಬಿಜೆಪಿ ಸಹವಕ್ತಾರ ಎ.ಎಚ್. ಆನಂದ್, ಬಿಜೆಪಿ ಯುವ ಮೋರ್ಚಾದ ಮುಖಂಡ ವೇಣುಗೋಪಾಲ್ ಅವರನ್ನು ಒಳಗೊಂಡ ನಿಯೋಗವು ನವದೆಹಲಿಯಲ್ಲಿ ಸಚಿವರನ್ನು ಗುರುವಾರ ಭೇಟಿಯಾಗಿ ಮನವಿ ಸಲ್ಲಿಸಿತು. 

‘ನೀರಾವರಿ ಯೋಜನೆಯ ಅನುಷ್ಠಾನದಿಂದ ಈ ಭಾಗದ ಜನರಿಗೆ ಆಗುವ ಅನುಕೂಲಗಳು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ, ಅಂತರ್ಜಲ ಕುಸಿತ, ಬೆಳೆ ಹಾನಿ ಸೇರಿದಂತೆ ವಸ್ತುಸ್ಥಿತಿಯನ್ನು ಸಚಿವರಿಗೆ ವಿವರಿಸಲಾಗಿದೆ’ ಎಂದು ಆಂಜನೇಯ ರೆಡ್ಡಿ ತಿಳಿಸಿದರು.

‘ಈ ನಾಲ್ಕು ಜಿಲ್ಲೆಗಳು ಅತ್ಯಂತ ಬರಪೀಡಿತ ಜಿಲ್ಲೆಗಳಾಗಿವೆ. ಸುಮಾರುಮೂರು ದಶಕಗಳಿಂದ ಶಾಶ್ವತ ನೀರಾವರಿಗಾಗಿ ಹೋರಾಟ ಮಾಡುತ್ತಿದ್ದೇವೆ. 2 ಸಾವಿರ ಅಡಿಯವರೆಗೂ ಬೋರ್‌ವೆಲ್ ಕೊರೆಸಿದರೂ ನೀರು ಸಿಗುತ್ತಿಲ್ಲ. ಕುಡಿಯುವ ನೀರಿನಲ್ಲಿ ಫ್ಲೋರೈಡ್ ಮಿಶ್ರಣವಾಗಿ ರೋಗರುಜಿನಗಳಿಗೆಜನರು ತುತ್ತಾಗಿದ್ದಾರೆ’ ಎಂದು ಹೇಳಿದರು. ಬಿಜೆಪಿ ಸಹವಕ್ತಾರ ಎ.ಎಚ್.ಆನಂದ್, ‘ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕರ್ನಾಟಕಕ್ಕೆ ಹೊಂದಿಕೊಂಡಿರುವ ಗಡಿಭಾಗದ ಗ್ರಾಮಗಳಿಗೆ ಉತ್ತರ ಪಿನಾಕಿನಿ ಹಾಗೂ ದಕ್ಷಿಣ ಪಿನಾಕಿನಿ ನದಿ ನೀರು ಯೋಜನೆ ಮೂಲಕ ಶಾಶ್ವತವಾದ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ. ಇದೇ ಮಾದರಿಯಲ್ಲಿ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಬೇಕು’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು