ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌ನಲ್ಲಿ ಒಬಿಸಿಗೆ ಸೀಟು: ಸೋನಿಯಾ ಗಾಂಧಿ ಬೇಡಿಕೆ ಸರಿ ಎಂದ ಪ್ರಿಯಾಂಕಾ ಗಾಂಧಿ

Last Updated 4 ಜುಲೈ 2020, 8:20 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ಎನ್‌ಇಇಟಿ) ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವೈದ್ಯಕೀಯ ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗದ (ಒಬಿಸಿ) ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕೋಟಾ ಅಡಿಯಲ್ಲಿ ಸೀಟುಗಳನ್ನು ಕಾಯ್ದಿರಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒತ್ತಾಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಬಲ ನೀಡಿದ್ದಾರೆ. ಈ ಕುರಿತಾದ ಬೇಡಿಕೆ ನ್ಯಾಯಸಮ್ಮತವಾಗಿದೆ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನೀಟ್ ಭರ್ತಿ ಮಾಡುವ ಸ್ಥಾನಗಳ ಪೈಕಿ ರಾಷ್ಟ್ರೀಯ ಕೋಟಾ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ವೈದ್ಯಕೀಯ ಸಂಸ್ಥೆಗಳಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡುವ ನ್ಯಾಯಸಮ್ಮತ ಬೇಡಿಕೆಯನ್ನು ಎತ್ತಿದ್ದಾರೆ. ಇದು ಸಾಮಾಜಿಕ ನ್ಯಾಯದ ಬೇಡಿಕೆಯಾಗಿದೆ. ಇದನ್ನು ಕೇಂದ್ರ ಸರ್ಕಾರ ಜಾರಿಗೆ ತರುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಇನ್ನು ಈ ಕುರಿತು ಸೋನಿಯಾ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಅಖಿಲ ಭಾರತ ಕೋಟಾ ಅಡಿಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ನೀಟ್‌ ಮೂಲಕ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವಂತೆ ನಿಮ್ಮ ಗಮನವನ್ನು ಸೆಳೆಯಲು ಬಯಸುತ್ತೇನೆ ಎಂದಿದ್ದಾರೆ.

ಮುಂದುವರಿದು ಸದ್ಯ ಅಖಿಲ ಭಾರತ ಕೋಟಾದಡಿಯಲ್ಲಿ ಕೇಂದ್ರ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿನ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಕ್ರಮವಾಗಿ ಶೇ 15, 7.5 ಮತ್ತು ಶೇ 10ರಷ್ಟು ಸ್ಥಾನಗಳನ್ನು ಕಾಯ್ದಿರಿಸಲಾಗಿದೆ.

ಇತರೆ ಹಿಂದುಳಿದ ವರ್ಗಗಳ ಅಖಿಲ ಭಾರತ ಫೆಡರೇಶನ್ ಸಂಗ್ರಹಿಸಿದ ಮಾಹಿತಿಯ ಪ್ರಕಾರ, 2017 ರಿಂದ, ಒಬಿಸಿ ಅಭ್ಯರ್ಥಿಗಳು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿಯನ್ನು ಅನುಷ್ಠಾನಗೊಳಿಸದ ಕಾರಣ, ರಾಷ್ಟ್ರೀಯ ಕೋಟಾದಲ್ಲಿ 11,000 ಸ್ಥಾನಗಳನ್ನು ಕಳೆದುಕೊಂಡಿದ್ದಾರೆ ಎಂದು ದೂರಿದ್ದಾರೆ.

ರಾಷ್ಟ್ರೀಯ ಕೋಟಾದಡಿಯಲ್ಲಿ ಹಿಂದುಳಿದ ವರ್ಗಗಳಿಗೆ ರಾಜ್ಯದ ವೈದ್ಯಕೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ನಿರಾಕರಿಸುವುದು ಸಂವಿಧಾನದ 93ನೇ ತಿದ್ದುಪಡಿಯ ಉದ್ದೇಶವನ್ನು ಉಲ್ಲಂಘಿಸುತ್ತದೆ ಮತ್ತು ಅರ್ಹ ಒಬಿಸಿ ಅಭ್ಯರ್ಥಿಗಳಿಗೆ ವೈದ್ಯಕೀಯ ಶಿಕ್ಷಣವನ್ನು ಪ್ರವೇಶಿಸಲು ತಡೆಗೋಡೆಯಾಗಿದೆ ಎಂದು ಸೋನಿಯಾ ಗಾಂಧಿ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT