ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಡಿಎಸ್‌ಎಸ್‌ (ಭೀಮವಾದ) ಸಂಘಟನೆ ವತಿಯಿಂದ ಪ್ರತಿಭಟನೆ
Last Updated 15 ಏಪ್ರಿಲ್ 2018, 5:09 IST
ಅಕ್ಷರ ಗಾತ್ರ

ಬಾಗಲಕೋಟೆ: ದಲಿತ ಸಂಘಟನೆಯ ವತಿಯಿಂದ ಹಮ್ಮಿಕೊಳ್ಳಲು ಉದ್ದೇಶಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ಅನುಮತಿ ನಿರಾಕರಿಸಿದ್ದಾರೆ ಎಂದು ಆರೋಪಿಸಿ ಶನಿವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನವನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಮೆರವಣಿಗೆಯಲ್ಲಿ ಆಗಮಿಸಿದ ಸಂಘಟನೆಯ ಕಾರ್ಯಕರ್ತರು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.ನಂತರ ಪೊಲೀಸ್ ವರಿಷ್ಠಾಧಿಕಾರಿ ಅನುಪಸ್ಥಿತಿಯಲ್ಲಿ ಡಿವೈಎಸ್‌ಪಿ ಎಸ್.ಎಂ. ಓಲೇಕಾರ ಅವರಿಗೆ ಮನವಿ ಸಲ್ಲಿಸಿದರು.

ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಪರಶುರಾಮ ನೀಲನಾಯಕ ಮಾತನಾಡಿ, ‘ಸಂಘಟನೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ದಿನ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಅನುಮತಿ ಕೇಳಲಾಗಿತ್ತು. ಅವರು ನಿರಾಕರಿಸಿದ್ದರು. ಆದರೆ ಹುನಗುಂದ ತಾಲ್ಲೂಕಿನ ಬೆಳಗಲ್‌ ಗ್ರಾಮದ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹಕ್ಕೆ ಅನುಮತಿ ಕೊಡಲಾಗಿದೆ. ನಾವು ದಲಿತರು ಎನ್ನುವ ಒಂದೇ ಕಾರಣಕ್ಕೆ ನಮಗೆ ಅನುಮತಿ ನೀಡದೇ ತಾರತಮ್ಯ ಮಾಡಲಾಗಿದೆ’ ಎಂದು ಆರೋಪಿಸಿದರು.

‘ಈ ಬಗ್ಗೆ ನವನಗರ ಠಾಣೆಯಲ್ಲಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿ ಮೇಲೆ ದೂರು ನೀಡಲಾಗಿದೆ. ಇದುವರೆಗೂ ಪ್ರಕರಣ ದಾಖಲಿಸಿಲ್ಲ’ ಎಂದು ದೂರಿದರು.

ಅಂಬೇಡ್ಕರ್ ಜಯಂತಿ ಅಂಗವಾಗಿ ಶುಕ್ರವಾರ ಸಮೀಪದ ಗದ್ದನಕೇರಿ ಕ್ರಾಸ್‌ನಲ್ಲಿ ಅಂಬೇಡ್ಕರ್ ಭಾವಚಿತ್ರ ಹಾಕುತ್ತಿದ್ದ ದಲಿತ ಯುವಕನ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾಗದಿದ್ದಲ್ಲಿ ಇದೇ 16 ರಂದು ಬಾಗಲಕೋಟೆ ಬಂದ್‌ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

ಪಡೆಪ್ಪ ಕಳ್ಳಿಮನಿ, ಸಿದ್ದು ಮಾದರ, ಬಸವರಾಜ ಹುಣ್ಣಿಬಾವಿ, ಸಾಬಣ್ಣ ಚಲವಾದಿ, ಯುವರಾಜ ಬಂಡಿ, ತುಳಜಾರಾಮ ನೀಲನಾಯಕ, ಸುಧಾಕರ ಬೆಂಡಿಗೇರಿ, ಜಯಕಾಂತ ಖಾತೇದಾರ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT