ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಗಣಿ ಹಗರಣಕ್ಕಿಂತ ದೊಡ್ಡದು: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ
Last Updated 16 ಜುಲೈ 2020, 20:09 IST
ಅಕ್ಷರ ಗಾತ್ರ

ಬೆಂಗಳೂರು: ‘ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿ ರಾಜ್ಯ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಟ್ಟಿದೆ. ಆ ಮೂಲಕ, ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ತಿದ್ದುಪಡಿ ತಂದಿರುವುದರ ಹಿಂದೆ ಭಾರಿ ಷಡ್ಯಂತ್ರ ಅಡಗಿದೆ. ಇದು ಗಣಿ ಹಗರಣಕ್ಕಿಂತ ದೊಡ್ಡದು. ಇದರಲ್ಲಿ ಇಡೀ ಸರ್ಕಾರವೇ ಭಾಗಿಯಾಗಿದೆ’ ಎಂದು ಆರೋಪಿಸಿದರು.

‘ಸರ್ಕಾರದ ಈ ನಿರ್ಧಾರ ವಿರೋಧಿಸಿ ಕಾಂಗ್ರೆಸ್ ಹೋರಾಟ ನಡೆಸಲಿದೆ. ಹಳ್ಳಿ ಮಟ್ಟದಿಂದ ಹೋರಾಟ ಸಂಘಟಿಸಲಾಗುವುದು. ಈ ಕುರಿತು ಬೇರೆ ಬೇರೆ ಪಕ್ಷಗಳು ಮತ್ತು ರೈತ ಸಂಘಟನೆಗಳ ಜೊತೆಗೆ ಚರ್ಚಿಸಲಾಗುವುದು’ ಎಂದರು.

‘ಕಾಯ್ಷೆಗೆ ತಿದ್ದುಪಡಿ ತರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಾಗಲೇ ನಾವು (ಕಾಂಗ್ರೆಸ್‌) ವಿರೋಧ ಮಾಡಿದ್ದೆವು. ಕೋವಿಡ್ ಸಂದರ್ಭದಲ್ಲಿ ಸರ್ಕಾರ ಸುಗ್ರೀವಾಜ್ಞೆ ತರುವುದಿಲ್ಲ ಎಂದು ಅಂದುಕೊಂಡಿದ್ದೆವು. ಆದರೆ, ಈ ಸಂದರ್ಭ ಬಳಸಿಕೊಂಡು ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿದೆ. ಸುಗ್ರೀವಾಜ್ಞೆ ಹೊರಡಿಸಿದ ದಿನ ಕರ್ನಾಟಕದ ಪಾಲಿಗೆ ಕರಾಳವಾದ ದಿನ’ ಎಂದರು.

‘ಸುಮಾರು 13,814 ಪ್ರಕರಣಗಳು ಬಾಕಿ ಇದೆ. ಆ ಪ್ರಕರಣಗಳು ಈ ಸುಗ್ರೀವಾಜ್ಞೆಯಿಂದ ವಜಾ ಆಗಲಿವೆ. 79ಎ, 79ಬಿ ರದ್ದತಿಯ ಹಿಂದೆ ಷಡ್ಯಂತ್ರ ಇದೆ. ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬೆಂಗಳೂರು, ಸುತ್ತಮುತ್ತ 45-50 ಸಾವಿರ ಕೋಟಿ ರೂಪಾಯಿ ಬೆಳೆ ಬಾಳುವ ಜಮೀನಿನ ಪ್ರಕರಣಗಳನ್ನು ವಜಾ ಮಾಡಿದ್ದಾರೆ’ ಎಂದು ಆರೋಪಿಸಿದರು.

‘ಕಾಯ್ದೆಯ ಸೆಕ್ಷನ್ 63ಕ್ಕೆ ತಿದ್ದುಪಡಿ ತಂದು ಒಂದು ಕುಟುಂಬಕ್ಕೆ ಇದ್ದ 118 ಎಕರೆ ಮಿತಿಯನ್ನು 436 ಎಕರೆಗೆ ಏರಿಸಿದ್ದಾರೆ. 436 ಎಕರೆ ಯಾರು ತೆಗೆದುಕೊಳ್ಳುತ್ತಾರೆ. ರೈತರು ಅಷ್ಟು‌ ಜಮೀನು ತೆಗೆದುಕೊಳುತ್ತಾರಾ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

‘ಕೊರೊನಾ ಸಂದರ್ಭದಲ್ಲಿ ಸುಗ್ರೀವಾಜ್ಞೆ ತರುವ ಅಗತ್ಯವೇನಿತ್ತು. ಕೊರೊನಾದಲ್ಲಿ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ, ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿ ಇದೆ. ಈ ಬಗ್ಗೆ ಹೋರಾಟ ಮಾಡುವುದನ್ನು ಬಿಟ್ಟು ಕಳ್ಳದಾರಿಯಲ್ಲಿ ಹೊರಟಿದ್ದಾರೆ. ಲಾಕ್ ಡೌನ್ ಸಮಯವನ್ನು ಉಪಯೋಗಿಸಿಕೊಂಡಿದ್ದಾರೆ. ಇದೊಂದು ‌ಕರಾಳ ಸುಗ್ರೀವಾಜ್ಞೆ’ ಎಂದರು.

‘ಜಹಗೀರದಾರರು, ಜಮೀನ್ದಾರಿ ಪದ್ದತಿ ಮತ್ತೆ ತರುವ ಪ್ರಯತ್ನ ಬಿಜೆಪಿ ಸರ್ಕಾರದಿಂದ ನಡೆಯುತ್ತಿದೆ. ಅಂಬಾನಿ, ಅದಾನಿ ಕೃಷಿ ಮಾಡುತ್ತಾನಾ. ಅವರು ರಿಯಲ್ ಎಸ್ಟೇಟ್ ಮಾಡುತ್ತಾರೆ. ಇದು ಸಾಮಾನ್ಯ ರೈತರ ಮೇಲೆ ದುಷ್ಪರಿಣಾಮ ಬೀರುತ್ತದೆ. ಕಾರ್ಪೋರೆಟರ್‌ಗಳ ಏಜೆಂಟರಂತೆ, ರಿಯಲ್ ಎಸ್ಟೇಟ್ ಉದ್ಯಮಿಗಳ ಮಾತು ಕೇಳಿ ಕಾಯ್ದೆಗೆ ತಿದ್ದುಪಡಿ ಮಾಡಿದ್ದಾರೆ. ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ತೆಗೆದುಕೊಂಡು ರೈತರ ಭೂಮಿಯನ್ನು ಕೊಡುತ್ತಿದ್ದಾರೆ. ರೈತ ವಿರೋಧಿ ಸರ್ಕಾರವಿದು. ಸರ್ಕಾರ ಈ ನಡೆಯನ್ನು ನಮ್ಮ ಪಕ್ಷ ಒಕ್ಕೊರಲಿನಿಂದ ವಿರೋಧಿಸುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೋವಿಡ್‌ ನಿಯಂತ್ರಣಕ್ಕೆ ವೈದ್ಯಕೀಯ ಸಾಮಗ್ರಿಗಳ ಖರೀದಿಗೆ ಸಂಬಂಧಿಸಿದಂತೆ ಲೆಕ್ಕ ಕೊಡಿ ಎಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. 2–3 ದಿನಗಳಲ್ಲಿ ಲೆಕ್ಕ ಕೊಡುವುದಾಗಿ ಹೇಳಿದ್ದಾರೆ. ಲೆಕ್ಕ ಕೊಟ್ಟ ಮೇಲೆ ಮತ್ತೆ ಮಾತನಾಡುತ್ತೇನೆ. ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ವಿಫಲವಾಗಿದೆ. ಸೋಂಕು ಹರಡದಂತೆ ಕ್ರಮವಹಿಸಬೇಕು‌ ಮೊದಲು ಮೂಲಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಬೇಕು’ ಎಂದರು.

ಲೆಕ್ಕ ಕೇಳುವ ಸಮಯ ಇದಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ಅವರು ಯಾವ ಅರ್ಥದಲ್ಲಿ ಹೇಳಿದ್ದರೋ ಗೊತ್ತಿಲ್ಲ. ನನ್ನ ಜತೆ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದ್ದರು. ಇದರ ಬಗ್ಗೆ ಪಕ್ಷದ ಕಾರ್ಯಕರ್ತರಿಗೂ ಸೂಚನೆ ಕೊಟ್ಟಿದ್ದೇವೆ. ಲೆಕ್ಕಕೊಡಿ ಅಂತ ಎಲ್ಲರೂ ಕೇಳುತ್ತಿದ್ದೇವೆ. ಶಿವಕುಮಾರ್ ಬಳಿ ಈ ಬಗ್ಗೆ ಚರ್ಚೆ ಮಾಡುತ್ತೇನೆ’ ಎಂದರು.

‘ಕಪ್ಪುಹಣ ಬಿಳಿ ಮಾಡಲು ಅವಕಾಶ’
‘ಬಿಜೆಪಿಯವರು ಬ್ರಹ್ಮಾಂಡ ಭ್ರಷ್ಟಾಚಾರದಿಂದ ಗಳಿಸಿದ ಕಪ್ಪು ಹಣ ಬಿಳಿ ಮಾಡಿಕೊಳ್ಳಲು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ’ ಎಂದು ವಿಧಾನಪರಿಷತ್ ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ ಟೀಕಿಸಿದರು.

ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ‘ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಿಂದ ರಾಜ್ಯದಲ್ಲಿ 58 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತರು ಭೂಮಿ ಕಳೆದುಕೊಂಡು ನಿರ್ಗತಿಕರಾಗಲಿದ್ದಾರೆ. ನಗರ ಪ್ರದೇಶದ ಸುತ್ತಲಿನ ಹಳ್ಳಿಗಳ ಜಮೀನು ರಿಯಲ್ ಎಸ್ಟೇಟ್ ಮಾಫಿಯಾದ ಪಾಲಾಗಲಿದೆ.ಈ ಕರಾಳ ಶಾಸನದ ವಿರುದ್ಧ ಪಕ್ಷಾತೀತ ಹಾಗೂ ಜಾತ್ಯತೀತವಾಗಿಒಂದಾಗಿ ಹೋರಾಟ ರೂಪಿಸಬೇಕಿದೆ’ ಎಂದರು.

‘ವಿರೋಧದ ಹಿಂದೆ ಹುನ್ನಾರ’
‘ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಹೊರಡಿಸಲಾಗಿರುವ ಸುಗ್ರೀವಾಜ್ಞೆಯನ್ನು ವಾಪಸ್‌ ಪಡೆಯುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ತಿದ್ದುಪಡಿ ಕಾಯ್ದೆಯನ್ನು ಹಿಂದೆ ಸದನದಲ್ಲಿ ಕಾಂಗ್ರೆಸ್ ಸದಸ್ಯರೇ ಬೆಂಬಲಿಸಿದ್ದರು. ಈಗ ಸಿದ್ದರಾಮಯ್ಯ ಟೀಕೆ ಮಾಡುತ್ತಿದ್ದಾರೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಾಸಕ ಡಿ.ಕೆ. ಶಿವಕುಮಾರ್‌, ಇದು ಕಾಯ್ದೆಯಾಗಿ ಜಾರಿಗೆ ಬರಬೇಕು ಎಂದಿದ್ದರು. ಈ ಬಗ್ಗೆ ಟೀಕಿಸುತ್ತಿರುವವರು ಎದೆ ಮುಟ್ಟಿಕೊಂಡು ಆತ್ಮಾವಲೋಕನ ಮಾಡಿಕೊಳ್ಳಲಿ. ಕೆಲವರು ತಮ್ಮ ರಾಜಕೀಯ ಹುನ್ನಾರಗಳ ಕಾರಣಕ್ಕೆ ಅಪಸ್ವರ ಎತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT