ಭಾನುವಾರ, ಸೆಪ್ಟೆಂಬರ್ 26, 2021
23 °C

ಹೋರಾಟ ಕೈಬಿಡಲ್ಲ: ಆಶಾ ಕಾರ್ಯಕರ್ತರ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12 ಸಾವಿರ ಗೌರವಧನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡಲೇ ಮಧ್ಯಪ್ರವೇಶಿಸಬೇಕು' ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಆಗ್ರಹಿಸಿದೆ.

ಸೋಮವಾರ ಇಲ್ಲಿ ಆನ್‍ಲೈನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೋಮಶೇಖರ ಯಾದಗಿರಿ,'ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ 11ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳ ಈಡೇರಿಕೆಗೆ ಈಗಾಗಲೇ ಹಲವು ಬಾರಿ ಪ್ರತಿಭಟನೆ ಮಾಡಿದ್ದೇವೆ. ಭರವಸೆಗಳನ್ನೇ ನೀಡುವ ಮೂಲಕ ಸರ್ಕಾರದ ನಾಯಕರು ಆಶಾ ಕಾರ್ಯಕರ್ತರನ್ನು ಮೂಲೆಗುಂಪು ಮಾಡಿದ್ದಾರೆ' ಎಂದು ದೂರಿದರು.

'ರಾಜ್ಯದಲ್ಲಿ 42 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಇವರಿಗೆ ನಿರ್ದಿಷ್ಟ ವೇತನ ಇನ್ನೂ ನಿಗದಿಯಾಗಿಲ್ಲ. ಇದರಿಂದ ಕುಟುಂಬ ನಿರ್ವಹಣೆಗೆ ಹರಸಾಹಸ ಪಡಬೇಕಿದೆ. ಆಂಧ್ರಪ್ರದೇಶ, ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳು ಅಲ್ಲಿನ ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವಧನ ನೀಡುತ್ತಿವೆ. ಅದೇ ಮಾದರಿ ಜಾರಿ ಮಾಡಲು ನಮ್ಮ ರಾಜ್ಯದಲ್ಲಿ ಏಕೆ ಸಾಧ್ಯವಾಗಿಲ್ಲ‘ ಎಂದು ಪ್ರಶ್ನಿಸಿದರು.

ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, 'ಕೊರೊನಾ ಸಂದರ್ಭದಲ್ಲೂ ಆಶಾ ಕಾರ್ಯಕರ್ತೆಯರ ಸೇವೆಯು ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲ. ಅವರಿಗೆ ಮಾಸ್ಕ್, ಸ್ಯಾನಿಟೈಸರ್ ಸಮರ್ಪಕವಾಗಿ ಸಿಗುತ್ತಿಲ್ಲ. 50ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಸೋಂಕಿಗೆ ಒಳಗಾಗಿದ್ದಾರೆ. ಈ ರೀತಿ ಜೀವದ ಹಂಗು ತೊರೆದು ಸೇವೆ ಮಾಡುವವರನ್ನೇ ಸರ್ಕಾರ ನಿರ್ಲಕ್ಷಿಸಿದೆ' ಎಂದು ಬೇಸರ ವ್ಯಕ್ತಪಡಿಸಿದರು. ಬೇಡಿಕೆ ಈಡೇರುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು